ಸೋಮವಾರ, ಮೇ 16, 2022
30 °C

ದೌರ್ಜನ್ಯ: ಪಿಡಿಒ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ದೌರ್ಜನ್ಯ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಗರದ ಬನಪ್ಪ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.`ಜನಪ್ರತಿನಿಧಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಪಿಡಿಒಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ, ಇದರಿಂದ ಕೆಲಸ ನಿರ್ವಹಿಸುವುದೇ ಕಷ್ಟವಾಗಿದೆ~ ಎಂದು ಸಂಘದ ಅಧ್ಯಕ್ಷ ಎಸ್.ರಮೇಶ್ ದೂರಿದರು.ಪಿಡಿಒಗಳ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ. ಪಿಡಿಒಗಳ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಪ್ರತಿನಿತ್ಯ ಜೀವ ಭಯದಲ್ಲೇ ಕೆಲಸ ಮಾಡುವ ಸ್ಥಿತಿ ಎದುರಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಹಲವು ಬಾರಿ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದರು.ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಗುಲ್ಬರ್ಗ ಜಿಲ್ಲೆ ಸಣ್ಣೂರು ಪಿಡಿಒ ಮಂದಾಕಿನಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಿಂದಾದರೂ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ರಕ್ಷಣೆ ನೀಡಬೇಕು. ಮಂದಾಕಿನಿ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಪಿಡಿಒಗಳ ಕಾರ್ಯದಲ್ಲಿ ಜನಪ್ರತಿನಿಧಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಬೇಕು. ಕಾನೂನಿನಲ್ಲಿ ಅಗತ್ಯ ತಿದ್ದುಪಡಿ ಮಾಡಿ ಹೆಚ್ಚಿನ ರಕ್ಷಣೆ ನೀಡಬೇಕು. ಹಲ್ಲೆ ನಡೆಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಬಂಧಿಸಬೇಕು.ದೌರ್ಜನ್ಯಕ್ಕೆ ಒಳಗಾದ ಪಿಡಿಒಗಳಿಗೆ ವರ್ಗಾವಣೆ ಪಡೆಯಲು ಅವಕಾಶ ನೀಡಬೇಕು. ಬಿಲ್ ಕಲೆಕ್ಟರ್‌ಗಳನ್ನು ಪಿಡಿಒಗಳ ನಿಯಂತ್ರಣದ ವ್ಯಾಪ್ತಿಗೆ ತರಬೇಕು ಎಂದು ಅವರು ಮನವಿ ಮಾಡಿದರು.ಪ್ರತಿಭಟನಾನಿರತರನ್ನು ಭೇಟಿ ಮಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್, `ಪಿಡಿಒಗಳು ರಾಜೀನಾಮೆ ನೀಡುವುದು ಅಥವಾ ಆತ್ಮಹತ್ಯೆ ಮಾಡಿಕೊಳ್ಳುವುದು ಸಮಸ್ಯೆಗೆ ಪರಿಹಾರವಲ್ಲ. ಬದಲಿಗೆ ಸಮಸ್ಯೆಯನ್ನು ಧೈರ್ಯದಿಂದ ಎದುರಿಸಬೇಕು. ಪಿಡಿಒಗಳಿಗೆ ಸೂಕ್ತ ರಕ್ಷಣೆ ನೀಡಲು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ~ ಎಂದರು.ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಪತ್ರ ಹಿಂಪಡೆಯುವುದಾಗಿ ಪ್ರತಿಭಟನಾನಿರತರು ಹೇಳಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ರೂಡಗಿ, ಖಜಾಂಚಿ ಸುರೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.