ಗುರುವಾರ , ಅಕ್ಟೋಬರ್ 1, 2020
27 °C

ನಗರದಲ್ಲಿ ಸರಣಿ ಪ್ರತಿಭಟನೆ, ತಮಟೆ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರದಲ್ಲಿ ಸರಣಿ ಪ್ರತಿಭಟನೆ, ತಮಟೆ ಚಳವಳಿ

ಮೈಸೂರು: ನಗರದ ವಿವಿಧೆಡೆ ಸೋಮವಾರ ಸರಣಿ ಪ್ರತಿಭಟನೆ ನಡೆದವು. ಮಂಗಳೂರಿನಲ್ಲಿ ಯುವತಿಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜೆಡಿಎಸ್, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಆಡಳಿತ ನಡೆಸಲು ವಿಫಲವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಧರಣಿ ನಡೆಸಿದವು.

 

ರೈಲ್ವೆ ಇಲಾಖೆಯ ಭದ್ರತಾ ವೈಫಲ್ಯವನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆ, ಸಂಬಳ ನೀಡುವಂತೆ ಆಗ್ರಹಿಸಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವಂತೆ ಒತ್ತಾಯಿಸಿ ಮಾದಿಗ ದಂಡೋರ ತಮಟೆ ಚಳವಳಿ ನಡೆಸಿತು.ಯುವತಿಯರ ಮೇಲೆ ಹಲ್ಲೆ: ಜೆಡಿಎಸ್ ಖಂಡನೆ

ಮಂಗಳೂರಿನ `ಮಾರ್ನಿಂಗ್ ಮಿಸ್ಟ್~ ಹೋಂಸ್ಟೇನಲ್ಲಿ ಈಚೆಗೆ ಯುವತಿಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜೆಡಿಎಸ್ ವತಿಯಿಂದ ನಗರದ ಗಾಂಧಿ ಚೌಕದಲ್ಲಿ ಧರಣಿ ನಡೆಸಲಾಯಿತು. ಯುವತಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರೆ ಈ ಕೃತ್ಯವನ್ನು ಎಸಗಿದ್ದಾರೆ. ಅವರಿಗೆ ಬಿಜೆಪಿ ಸರ್ಕಾರದ ಕುಮ್ಮಕ್ಕು ಇದೆ. ಅಸ್ಸಾಂನಲ್ಲಿ ಈಚೆಗೆ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದೆ. ಆದರೆ ರಾಜ್ಯ ಸರ್ಕಾರ ಅಂತಹ ದಿಟ್ಟತನ ತೋರಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.ಯುವತಿಯರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಬೇಕು ಎಂದು ಒತ್ತಾಯಿಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಜಣ್ಣ, ಮಾಜಿ ಮೇಯರ್ ಸಂದೇಶಸ್ವಾಮಿ, ಮಾಜಿ ಉಪಮೇಯರ್ ಎಂ.ಜೆ.ರವಿಕುಮಾರ್, ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್‌ಬಿಎಂ ಮಂಜು, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಇತರರು ಧರಣಿ ನೇತೃತ್ವ ವಹಿಸಿದ್ದರು.ಭದ್ರತಾ ವೈಫಲ್ಯಕ್ಕೆ ಆಕ್ರೋಶ

ಮದ್ದೂರು ಬಳಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ರೈಲಿನಿಂದ ಹೊರ ತಳ್ಳಿದ ಘಟನೆಗೆ ರೈಲ್ವೆ ಇಲಾಖೆಯ ಭದ್ರತಾ ವೈಫಲ್ಯವೇ ಕಾರಣ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.ರೈಲು ಪ್ರಯಾಣಿಕರಿಗೆ ಸರಿಯಾದ ಭದ್ರತೆ ಇಲ್ಲ. ಈ ಘಟನೆಯಿಂದ ಒಂಟಿ ಮಹಿಳೆಯರು ರೈಲಿನಲ್ಲಿ ಪ್ರಯಾಣ ಮಾಡಲು ಹಿಂಜರಿಯುತ್ತಿದ್ದಾರೆ. ರೈಲ್ವೆ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ನಾಲಾಬೀದಿ ರವಿ, ಸಾ.ವಿ.ಮಲ್ಲಿಕಾರ್ಜುನ, ಸುರೇಶ್ ಬಾಬು, ವೆಂಕಟೇಶ್, ಮಹದೇವಸ್ವಾಮಿ ಹಾಜರಿದ್ದರು.ರಾಜ್ಯ ಸರ್ಕಾರದ ವಿರುದ್ಧ ಧರಣಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಧರಣಿಗೆ ನಗರದಲ್ಲೂ ಬೆಂಬಲ ವ್ಯಕ್ತವಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಜನಹಿತ ಕಾಪಾಡುವಲ್ಲಿ ವಿಫಲವಾಗಿದೆ. ರೈತರ ಹೆಸರು ಹೇಳಿಕೊಂಡು ಅಧಿಕಾರ ಹಿಡಿದ ಸರ್ಕಾರ ರೈತ ವಿರೋಧಿ ಕೆಲಸ ಮಾಡುತ್ತಿದೆ. ಆಪರೇಷನ್ ಕಮಲದ ಮೂಲಕ್ಕೆ ಪ್ರಜಾಪ್ರಭುತ್ವಕ್ಕೆ ಕಳಂಕ ತಂದಿದ್ದು, ನಾಲ್ಕು ವರ್ಷದಲ್ಲಿ ಮೂರು ಮುಖ್ಯಮಂತ್ರಿಗಳು, ಇಬ್ಬರು ಉಪಮುಖ್ಯಮಂತ್ರಿಗಳನ್ನು ಮಾಡಿ ಜನತೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಶೈಕ್ಷಣಿಕ ಸೌಲಭ್ಯ ನೀಡುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ದುರ್ಬಲ ವರ್ಗದವರಿಗೆ ಮೂಲಸೌಕರ್ಯಗಳು ದೊರೆಯುತ್ತಿಲ್ಲ ಎಂದು ಕಿಡಿಕಾರಿದರು.ಶಾಲೆಗಳು ಆರಂಭವಾದ ದಿನವೇ ವಿದ್ಯಾರ್ಥಿ ನಿಲಯಗಳನ್ನು ತೆರೆಯಬೇಕು. ಡೊನೇಷನ್ ಹಾವಳಿಯನ್ನು ತಪ್ಪಿಸಬೇಕು. ಇಂಗ್ಲಿಷ್ ಮಾಧ್ಯಮ ಬೇಡ ಎಂಬ ಸಾಹಿತಿಗಳ ಒತ್ತಡಕ್ಕೆ ಮಣಿಯಬಾರದು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಇಂಗ್ಲಿಷ್ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ದಸಂಸ ಮುಖಂಡ ಡಾ.ಕೆ.ಪಿ.ಮಹಲಿಂಗು, ಜಿಲ್ಲಾ ಸಂಚಾಲಕ ಮಲ್ಲೇಶ್ ಚುಂಚನಹಳ್ಳಿ, ಶ್ರೀನಿವಾಸ್ ಬಂಬೂಬಜಾರ್, ನಾಗರಾಜು ಇದ್ದರು.ಒಳಮೀಸಲಾತಿ ಜಾರಿಗೆ ಒತ್ತಾಯ


ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಬೇಕು ಎಂದು ಶಿಫಾರಸು ಮಾಡಿದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ವತಿಯಿಂದ ತಾಲ್ಲೂಕು ಕಚೇರಿ ಎದುರು ತಮಟೆ ಚಳವಳಿ ನಡೆಸಲಾಯಿತು.ಹಲವು ವರ್ಷಗಳಿಂದ ವಂಚನೆಗೆ ಒಳಗಾಗಿರುವ ಮಾದಿಗರಿಗೆ ಒಳಮೀಸಲಾತಿ ನೀಡುವ ಅವಶ್ಯಕತೆ ಇದೆ. ಈ ಸಂಬಂಧ ಆಯೋಗ ವರದಿ ಕೂಡ ನೀಡಿದೆ. ಆದರೆ ಅದನ್ನು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರ ಮೀನಾಮೇಷ ಏಣಿಸುತ್ತಿದೆ ಎಂದು ಆರೋಪಿಸಿದರು. ಬ್ಯಾಕ್‌ಲಾಗ್ ಹುದ್ದೆಗಳನ್ನು ನೂತನ ವರದಿ ಆಧರಿಸಿ ಹಂಚಿಕೆ ಮಾಡಬೇಕು. ಮಾದಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು. ಗುತ್ತಿಗೆ ಪೌರ ಕಾರ್ಮಿಕ ಪದ್ಧತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.ಮಾದಿಗ ದಂಡೋರ ಗೌರವಾಧ್ಯಕ್ಷ ರಾಜಣ್ಣ, ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವ ವಹಿಸಿದ್ದರು.ಸಂಬಳಕ್ಕೆ ಪೌರಕಾರ್ಮಿಕರ ಆಗ್ರಹ

ಎರಡು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಸಂಬಳವನ್ನು ಪಾವತಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘದ ವತಿಯಿಂದ ಸೋಮವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.ಗುತ್ತಿಗೆದಾರ ವಿಜಯ್‌ರೆಡ್ಡಿ ಅವರು 18 ವಾರ್ಡ್‌ಗಳ ಗುತ್ತಿಗೆ ಪೌರಕಾರ್ಮಿಕರಿಗೆ ಕಳೆದ ಎರಡು ತಿಂಗಳಿಂದ ಸಂಬಳ ನೀಡಿಲ್ಲ. ಇದರಿಂದ ಜೀವನ ಸಾಗಿಸುವುದು ಕಷ್ಟವಾಗುತ್ತಿದೆ. ಈ ಕುರಿತು ಹಲವು ಬಾರಿ ಪಾಲಿಕೆ ಗಮನಕ್ಕೆ ತರಲಾಗಿದೆ. ಸಮಯಕ್ಕೆ ಸರಿಯಾಗಿ ಸಂಬಳ ನೀಡುವಂತೆ ಪಾಲಿಕೆ ಆಯುಕ್ತರು ಗುತ್ತಿಗೆದಾರರಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.ಪೌರಕಾರ್ಮಿಕರ ಸಂಘದ ಅಧ್ಯಕ್ಷ ಎನ್. ಮಾರ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಮಂಚಯ್ಯ, ಜಿ.ಮಹದೇವ, ಸಿ.ಎಂ.ಮಹದೇವ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.