ಶುಕ್ರವಾರ, ಜೂನ್ 18, 2021
29 °C

ನಗರಸಭೆಯಲ್ಲಿ ಪ್ರತಿಧ್ವನಿಸಿದ ನೀರಿನ ಗದ್ದಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ:  ಸೋಮವಾರ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಹಾಹಾಕಾರವೇ ಪ್ರಮುಖ ವಿಷಯವಾಗಿ ಚರ್ಚೆಗೆ ಕಾರಣವಾಯಿತು. ವಿರೋಧ ಪಕ್ಷದವರ ಜತೆ ಆಡಳಿತ ಪಕ್ಷದ ಸದಸ್ಯರು ನೀರಿನ ಸಮಸ್ಯೆ ಪರಿಹಾರಕ್ಕೆ ಒಮ್ಮತದಿಂದ ಆಗ್ರಹಿಸಿದರು.ಸಭೆ ಆರಂಭವಾಗುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ನೀರಿನ ಸಮಸ್ಯೆ ಪ್ರಸ್ತಾಪಿಸಿ, ನಗರದ ಎಲ್ಲಾ ಭಾಗಗಳಲ್ಲಿ ಸರಿಯಾಗಿ ನೀರಿನ ಪೂರೈಕೆಯಾಗುತ್ತಿಲ್ಲ. ಇದರಿಂದ ನಾಗರಿಕರು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಅಲ್ಲದೇ, ನಗರಸಭೆ ಅಧಿಕಾರಿಗಳಾಗಲಿ, ಸಿಬ್ಬಂದಿಗಳಾಗಲಿ ನಾಗರಿಕರ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಚರ್ಚೆಯಲ್ಲಿ ಎಸ್.ಕೆ. ಮರಿಯಪ್ಪ, ಕೆ.ಬಿ. ಪ್ರಸನ್ನಕುಮಾರ್, ಮುನಿಯಪ್ಪ, ನಾಗರಾಜ ಕಂಕಾರಿ ಮತ್ತಿತರರು ಪಾಲ್ಗೊಂಡಿದ್ದರು.ಇದೇ ವೇಳೆ ಬಿಜೆಪಿಯ ಕೆಲ ಸದಸ್ಯರು ಮಾತನಾಡಿ, ತಮ್ಮ ವಾರ್ಡ್‌ಗಳಲ್ಲೂ ನೀರಿನ ಸಮಸ್ಯೆ ಇದೆ ಎಂದಾಗ ಕೆಲ ಕಾಲ ಕಾವೇರಿದ ಚರ್ಚೆ ನಡೆದು, ಕೆಲ ಸದಸ್ಯರು ಅಧ್ಯಕ್ಷ- ಉಪಾಧ್ಯಕ್ಷರ ಮೇಲೆ ಹರಿಹಾಯ್ದರು.ಸದಸ್ಯರ ಅಹವಾಲು ಆಲಿಸಿ ನಂತರ ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದ್ದು, ತೀವ್ರ ಸಮಸ್ಯೆ ಇರುವ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ಕುಡಿಯುವ ನೀರಿನ ನಲ್ಲಿಗಳಿಗೆ ಮೀಟರ್ ಅಳವಡಿಕೆಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿ, ನಗರಸಭೆ ಅನುಸರಿಸುತ್ತಿರುವ ಜನವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಅಲ್ಲದೇ, ಯಾವುದೇ ಕಾರಣಕ್ಕೂ ನಲ್ಲಿಗಳಿಗೆ ಮೀಟರ್ ಅಳವಡಿಕೆಗೆ ಅವಕಾಶ ನೀಡುವುದಿಲ್ಲ ಎಂದರು.ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಚನ್ನಬಸಪ್ಪ, ನಲ್ಲಿಗಳಿಗೆ ಮೀಟರ್ ಅಳವಡಿಕೆ ಕುರಿತು ಯಾವುದೇ ಅಧಿಕೃತ ನಿರ್ಣಯ ಮಾಡಿಲ್ಲ. ಈ ಕುರಿತು ಈಚೆಗೆ ನಗರದ ಉದ್ಯಮಿಗಳ ಸಭೆ ಕರೆದು ಚರ್ಚಿಸಲಾಗಿದ್ದು, ಪ್ರಥಮ ಹಂತವಾಗಿ ವಾಣಿಜ್ಯ ಉದ್ದೇಶದ ನಲ್ಲಿಗಳಿಗೆ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ. ಅಲ್ಲದೇ, ಕುಡಿಯುವ ನೀರು ಪೂರೈಕೆಗೆ ಸುಮಾರು ರೂ.9 ಕೋಟಿ   ಖರ್ಚಾಗುತ್ತದೆ. ಆದರೆ, ಬರುವ ಆದಾಯ ಸಂಗ್ರಹಣೆ ್ಙ 2 ಕೋಟಿ ಮಾತ್ರ. ಹಾಗಾಗಿ, ಆದಾಯ ಸಂಗ್ರಹಣೆ ಹೆಚ್ಚುಗೊಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.ಹಾಗೆಯೇ, ನಗರಸಭೆ ಶೇ. 22.75ರ ಅನುದಾನದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಸಮಗ್ರ ತನಿಖೆಯಾಗಬೇಕು. ಇದಕ್ಕೆ ಸಂಬಂಧಪಟ್ಟ ನಗರಸಭೆ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಎಸ್.ಕೆ. ಮರಿಯಪ್ಪ ಆಗ್ರಹಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ರಾಮು, ಆಯುಕ್ತ ರಮೇಶ್ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.