ಸೋಮವಾರ, ಮಾರ್ಚ್ 27, 2023
24 °C

ನಗರಸಭೆ, ಪುರಸಭೆಯಲ್ಲಿ ಮಹಿಳೆಯರಿಗೆ ಶೇ 50 ಮೀಸಲಾತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರಸಭೆ, ಪುರಸಭೆಯಲ್ಲಿ ಮಹಿಳೆಯರಿಗೆ ಶೇ 50 ಮೀಸಲಾತಿ

ಬೆಂಗಳೂರು: `ನಗರಸಭೆ ಹಾಗೂ ಪುರಸಭೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸಲು ಮುಂದಿನ ವಿಧಾನಸಭೆಯ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮವು ನಗರದಲ್ಲಿ ಗುರುವಾರ ಆಯೋಜಿಸಿದ್ದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ ನೀಡಲು ಸರ್ಕಾರ ಬದ್ಧವಿದೆ. ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಲು ಈಗಾಗಲೇ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆ.ನಗರಸಭೆ ಹಾಗೂ ಪುರಸಭೆಗಳಲ್ಲೂ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಬೇಕು ಎಂಬ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಮೀಸಲಾತಿಯ ವಿಷಯ ಶೀಘ್ರವೇ ವಿಧಾನಸಭೆಯ ಮುಂದೆ ಚರ್ಚೆಗೆ ಬರಲಿದೆ~ ಎಂದು ಅವರು ಹೇಳಿದರು.`ರಾಜ್ಯದಲ್ಲಿ 36 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳಿವೆ. ರಾಜ್ಯ ಸರ್ಕಾರ ಸಹಕಾರಿ ಸಂಘಗಳಿಗೆ ಹಿಂದಿನಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. 2001ರ ಸಹಕಾರಿ ಸಂಘಗಳ ಕಾಯ್ದೆಗೆ ತಿದ್ದುಪಡಿ ತಂದು ಸಹಕಾರ ಸಂಘಗಳಲ್ಲಿ ಮಹಿಳೆಯರಿಗೆ ವಿಶೇಷ ಮೀಸಲಾತಿ ಕಲ್ಪಿಸಲು ಚಿಂತನೆ ನಡೆದಿದೆ.ಕಾಯ್ದೆಯ ತಿದ್ದುಪಡಿಯಿಂದ ಸಹಕಾರಿ ಸಂಘಗಳ ಆಡಳಿತ ಮಂಡಳಿಗಳಲ್ಲಿ ಮಹಿಳೆಯರಿಗೆ ಎರಡು ಖಾಯಂ ಸ್ಥಾನ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚು ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು~ ಎಂದು ಅವರು ಕರೆನೀಡಿದರು.ಸಹಕಾರ ಸಚಿವ ಬಿ.ಜೆ.ಪುಟ್ಟಸ್ವಾಮಿ ಮಾತನಾಡಿ, `ಸಹಕಾರಿ ಕ್ಷೇತ್ರದ ನಿರ್ವಹಣೆ ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರಿಗೆ ಕರಗತವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರ ಪ್ರೋತ್ಸಾಹಕ್ಕೆ ಸಹಕಾರ ಇಲಾಖೆಯಿಂದ ಅಗತ್ಯ ಪ್ರೋತ್ಸಾಹ ನೀಡಲಾಗುವುದು. ಅಲ್ಲದೇ ಮಹಿಳಾ ಉದ್ಯಮಿಗಳ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಇಲಾಖೆ ಬದ್ಧವಿದೆ~ ಎಂದರು.ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ.ಮಂಜುಳಾ ಮಾತನಾಡಿ, `ಮಹಿಳೆಯರು ಸಹಕಾರಿ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ರಾಜ್ಯದಲ್ಲಿ ಪೂರಕ ವಾತಾವರಣವಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಮುಗಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆಯ ಮೇಲೆ ಒತ್ತಡ ತರಲಾಗುತ್ತಿದೆ. ಅಂಜಿಕೆಗಳನ್ನು ಬಿಟ್ಟು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು~ ಎಂದು ಕರೆನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.