ಗುರುವಾರ , ಮೇ 26, 2022
30 °C

ನಮ್ಮಮೆಟ್ರೊ ಕಾಮಗಾರಿ ವೀಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕೆಳಸೇತುವೆ ಹಾಗೂ ಮೇಲ್ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಸಂಬಂಧ ಕೇಂದ್ರದ ಮೇಲೆ ಒತ್ತಡ ಹೇರಲು ಮೇಯರ್ ಡಿ. ವೆಂಕಟೇಶಮೂರ್ತಿ ನೇತೃತ್ವದ ನಿಯೋಗ ಜುಲೈ ಮೊದಲ ವಾರ ನವದೆಹಲಿಗೆ ತೆರಳಲಿದೆ.ನಗರದ ಕೆ.ಆರ್. ವೃತ್ತದ ಬಳಿ ನಡೆಯುತ್ತಿರುವ `ನಮ್ಮ ಮೆಟ್ರೊ~ ಸುರಂಗ ಮಾರ್ಗದ ಕಾಮಗಾರಿಯನ್ನು ಗುರುವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.`ನಗರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧೆಡೆ ಕೈಗೆತ್ತಿಕೊಂಡಿರುವ ರೈಲ್ವೆ ಕೆಳಸೇತುವೆ ಹಾಗೂ ಮೇಲ್ಸೇತುವೆ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವುದು ಅನಿವಾರ್ಯವಾಗಿದೆ. ಈ ಸಂಬಂಧ ರೈಲ್ವೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಚಿವರ ಮೇಲೆ ಒತ್ತಡ ಹೇರಲಾಗುವುದು~ ಎಂದರು.`ರೈಲ್ವೆ ಇಲಾಖೆ ಕೈಗೆತ್ತಿಕೊಂಡಿರುವ ಹಲವು ಯೋಜನೆಗಳು ಕುಂಟುತ್ತಾ ಸಾಗಿವೆ. ಅನೇಕ ಕಡೆಗಳಲ್ಲಿ ಯೋಜನೆ ಪೂರ್ಣಗೊಳಿಸಲು ಜಾಗ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಇನ್ನು, ಯಾವುದೇ ಅಡೆ-ತಡೆಯಿಲ್ಲದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ಹೀಗಾಗಿ, ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಗಿದೆ~ ಎಂದು ಮೇಯರ್ ತಿಳಿಸಿದರು.`ಈ ಸಂಬಂಧ ಈಗಾಗಲೇ ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಗಮನಸೆಳೆಯಲಾಗಿದೆ. ಉದ್ದೇಶಿತ ಕೆಳಸೇತುವೆ ಹಾಗೂ ಮೇಲ್ಸೇತುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಶೀಘ್ರ ಟೆಂಡರ್ ಕರೆಯುವಂತೆಯೂ ಕೋರಲಾಗಿದೆ~ ಎಂದರು.`ರೈಲ್ವೆ ಕಾಮಗಾರಿಗಳಿಗೆ ನಗರದ ಹಲವೆಡೆ ಜಾಗ ಸ್ವಾಧೀನಪಡಿಸಿಕೊಳ್ಳುವ ಸಂಬಂಧ ರಕ್ಷಣಾ ಇಲಾಖೆಯ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗುವುದು. ಆ ಮೂಲಕ ನಗರದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಎಲ್ಲ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಪಾಲಿಕೆ ಪ್ರಯತ್ನ ನಡೆಸಲಿದೆ~ ಎಂದು ಅವರು ಭರವಸೆ ನೀಡಿದರು.ಕಾಮಗಾರಿ ಬಗ್ಗೆ ಮೆಚ್ಚುಗೆ: ಸೆಂಟ್ರಲ್ ಕಾಲೇಜು ಬಳಿ ನಡೆಯುತ್ತಿರುವ `ನಮ್ಮ ಮೆಟ್ರೊ~ ಸುರಂಗ ಮಾರ್ಗದ ಕಾಮಗಾರಿ ಮೆಚ್ಚುಗೆ ವ್ಯಕ್ತಪಡಿಸಿದ ಮೇಯ, ಮೊದಲ ಹಂತದ ಶೇ 75ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿ 2014ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು.ಉಪ ಮೇಯರ್ ಎಲ್. ಶ್ರೀನಿವಾಸ್, ಆಡಳಿತ ಪಕ್ಷದ ನಾಯಕ ಎನ್. ನಾಗರಾಜ್, ವಿರೋಧ ಪಕ್ಷದ ನಾಯಕ ಎಂ.ಕೆ. ಗುಣಶೇಖರ್, ಪಾಲಿಕೆ ಮುಖ್ಯ ಎಂಜಿನಿಯರ್ ಬಿ.ಟಿ. ರಮೇಶ್ ಹಾಗೂ ಬಿಎಂಆರ್‌ಸಿಎಲ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.