ಗುರುವಾರ , ಏಪ್ರಿಲ್ 22, 2021
25 °C

ನೀರಾವರಿ ಸೌಲಭ್ಯಕ್ಕೆ ಕೇಂದ್ರದಿಂದ 500 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಸನ್ನತ್ತಿ ಬ್ಯಾರೇಜ್‌ನಿಂದ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಾಲುವೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ರೂ.500 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ವಿಶೇಷ ಕಾಳಜಿಯಿಂದಾಗಿ ಈ ಅನುದಾನ ಬಿಡುಗಡೆಯಾಗಿದ್ದು, ಗುರುಮಠಕಲ್ ಕ್ಷೇತ್ರದ ಶೇ. 90 ರಷ್ಟು ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿಂತಾಗಲಿದೆ ಎಂದು ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಯಬಣ್ಣ ಬೋರಬಂಡ್ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸನ್ನತ್ತಿ ಬಳಿ ಭೀಮಾನದಿಗೆ ನಿರ್ಮಿಸಲಾಗಿರುವ ಬ್ಯಾರೇಜ್‌ನಲ್ಲಿ ಸಂಗ್ರಹವಾಗುವ ನೀರನ್ನು ಕಾಲುವೆಗಳ ಮೂಲಕ ರೈತರ ಜಮೀನುಗಳಿಗೆ ಹರಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.ಇದಲ್ಲದೇ ಗುಲ್ಬರ್ಗದಿಂದ ಯಾದಗಿರಿ, ರಾಯಚೂರುಗಳ ಮೂಲಕ ಗುತ್ತಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಚಿವ ಖರ್ಗೆ ರೂ.600 ಕೋಟಿ ಅನುದಾನ ಮಂಜೂರು ಮಾಡಿಸಿದ್ದು, ಇದರಿಂದ 360 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆಗಲಿದೆ. ಈ ಹೆದ್ದಾರಿ ನಿರ್ಮಾಣದಿಂದ ಈ ಭಾಗದ ಜನರು ಸುಲಭವಾಗಿ ಬೆಂಗಳೂರಿಗೆ ಹೋಗಬಹುದಾಗಿದೆ ಎಂದು ತಿಳಿಸಿದರು.

 

ರೂ. 60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಯಾದಗಿರಿ ಸೇಡಂ ರಸ್ತೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಹತ್ತಿಕುಣಿ ಜಲಾಶಯದಲ್ಲಿ ಈಗಾಗಲೇ 10 ಅಡಿ ನೀರು ಸಂಗ್ರಹವಾಗಿದೆ. ಸದ್ಯಕ್ಕೆ ರೈತರಿಗೆ ಬತ್ತ ಬೆಳೆಯಲು ನೀರು ಅವಶ್ಯಕವಾಗಿದ್ದು, ಕೂಡಲೇ ನೀರು ಒದಗಿಸಬೇಕು. ಇದರಿಂದ ಸುಮಾರು 700 ಎಕರೆ ಜಮೀನಿಗೆ ಅನುಕೂಲ ಆಗಲಿದೆ. ಅಧಿಕಾರಿಗಳು ಶೀಘ್ರ ಸಭೆ ಕರೆದು ನೀರು ಬಿಡಬೇಕು ಎಂದು ಆಗ್ರಹಿಸಿದರು.ಶಿಕ್ಷಕರ ಕೊರತೆಯಿಂದ ಗಡಿಭಾಗದ ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗಿದೆ. ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡು ಪದವೀಧರ ಯುವಕರನ್ನು ತಾತ್ಕಾಲಿಕವಾಗಿ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳು ಜನತೆ ಎದುರಿಸುತ್ತಿದ್ದಾರೆ. ವಿದ್ಯುತ ಪರಿವರ್ತಕ ಯಂತ್ರಗಳ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.