ಭಾನುವಾರ, ಜೂನ್ 13, 2021
24 °C

ನೀರು ಸಮಸ್ಯೆ ನಿವಾರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಮರ್ಪಕ ನೀರು ಪೂರೈಸಲು ಆದ್ಯತೆ ಕೊಡಬೇಕು, ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶೇಷ ಆಸಕ್ತಿ ತೋರಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವತ್ತ ಹೆಚ್ಚಿನ ಗಮನ ನೀಡಬೇಕು....ಹೀಗೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದವರು ಜಿಲ್ಲಾ ಪಂಚಾಯಿತಿ ಸದಸ್ಯರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಎಲ್ಲ ವಿಷಯಗಳನ್ನು ಪ್ರಸ್ತಾಪಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು, ನಾವು ಕೋರಿದ ಬೇಡಿಕೆಗಳನ್ನು ಈಡೇರಿಸಬೇಕು. ಬೇಡಕೆಗಳನ್ನು ಈಡೇರಿಸದಿದ್ದರೆ, ನಮಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗುವುದಿಲ್ಲ. ಗ್ರಾಮಸ್ಥರಿಗೆ ಉತ್ತರಿಸಲು ಸಾಧ್ಯವಾಗುವುದಿಲ್ಲ ಎಂದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ವಿ.ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಕೇಂದ್ರೀಕರಿಸಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಸದಸ್ಯರು, ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆಯುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ನೀರಿನ ಸಮಸ್ಯೆ ಬೇಗನೇ ಪರಿಹರಿಸದಿದ್ದರೆ, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ನೀರು ಸಿಗದೇ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಗ್ರಾಮಸ್ಥರ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಬೇಕಿದೆ ಎಂದರು.ಕೆಲ ಕಡೆ ಕೊಳವೆ ಬಾವಿಗಳನ್ನು ಕೊರೆಸಲಾಗಿದೆಯಾದರೂ ಇನ್ನೂ ಮೋಟರ್ ಅಳವಡಿಸಲಾಗಿಲ್ಲ. ಇನ್ನೂ ಕೆಲ ಕಡೆ ಕೊಳವೆ ಬಾವಿಗಳನ್ನು ಕೊರೆಸಲು ತೀರ್ಮಾನಿಸಿಲಾಗಿದೆ ಆದರೂ ಯಾವುದೇ ಕ್ರಮವನ್ನು ಕೈಗೊಳ್ಳಲಾಗಿಲ್ಲ. ಬಹುತೇಕ ಕಡೆ ಕೊಳವೆಬಾವಿಗಳು ಕೆಟ್ಟಿದ್ದು, ಇನ್ನೂ ದುರಸ್ತಿಯಾಗಿಲ್ಲ. ಬೆಳಿಗ್ಗೆ ಎದ್ದರೆ, ನೀರಿಗಾಗಿ ಗ್ರಾಮಸ್ಥರಿಂದ ದೂರವಾಣಿ ಕರೆ ಬರುತ್ತದೆ. ಅವರಿಗೆ ನಾವು ಏನು ಉತ್ತರಿಸಬೇಕು. ಅವರನ್ನು ಹೇಗೆ ಸಮಾಧಾನಪಡಿಸಬೇಕು~ ಎಂದು ಸದಸ್ಯರು ಪ್ರಶ್ನಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಮಾತನಾಡಿ, ಪ್ರತಿಯೊಂದು ವಿಷಯಕ್ಕೂ ಜಿಲ್ಲಾ ಪಂಚಾಯಿತಿಯನ್ನು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ದೂಷಿಸುವುದು ಸರಿಯಲ್ಲ. ಎಲ್ಲ ಕೆಲಸ ಕಾರ್ಯಗಳನ್ನು ಒಬ್ಬರಿಂದಲೇ ನಿಭಾಯಿಸಲು ಆಗುವುದಿಲ್ಲ. ಆಯಾ ತಾಲ್ಲೂಕಿನ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿರುವ ಅಭಿವೃದ್ಧಿ ಅಧಿಕಾರಿಗಳು ಕೂಡ ಗಮನಹರಿಸಬೇಕು ಎಂದರು.ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿದ ಮೂಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮತ್ತು ಪರಿಹರಿಸಲು ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಕಾರ್ಯಪಡೆ ಸದಸ್ಯರನ್ನಾಗಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುವುದು ಎಂದು ಅವರು ತಿಳಿಸಿದರು.

ತಾಲ್ಲೂಕು ಮಟ್ಟದಲ್ಲಿ ಆಗಿರುವ ಪ್ರಗತಿ ಕಾರ್ಯಗಳ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಪ್ರಗತಿ ಕಾರ್ಯಗಳಲ್ಲಿ ಯಾವುದೇ ಕಾರಣಕ್ಕೂ ವಿಳಂಬ ತೋರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

 

ಶಾಸಕ ಕೆ.ಪಿ.ಬಚ್ಚೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.