ಮಂಗಳವಾರ, ಅಕ್ಟೋಬರ್ 15, 2019
29 °C

ಪಠ್ಯೇತರ ವಿಷಯಗಳಲ್ಲಿ ಅಭಿರುಚಿ ಬೆಳೆಸಿಕೊಳ್ಳಲು ಕರೆ

Published:
Updated:

ಕೊಳ್ಳೇಗಾಲ: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳನ್ನು ಓದಿ, ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದರೆ ಸಾಲದು. ಅದಕ್ಕಿಂತ ಹೆಚ್ಚಾಗಿ ಪಠ್ಯೇತರ ವಿಷಯಗಳಲ್ಲಿ ಹೆಚ್ಚಿನ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.ತಾಲ್ಲೂಕಿನ ಹನೂರು ಪಟ್ಟಣದಲ್ಲಿ ನಡೆದ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪೋಷಕರು ವಿದ್ಯಾರ್ಥಿಗಳಿಗೆ ಹೆಚ್ಚಿನ ಒತ್ತಡ ಹೇರದೆ ವಿದ್ಯಾರ್ಥಿಗಳು ಆಸಕ್ತಿ ಹೊಂದಿರುವ ವಿಷಯಗಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಹಾಗೂ ಶಿಕ್ಷಕರು ಸಹ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಂಡು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ ಮಾತನಾಡಿ, ಹಲವಾರು ವರ್ಷಗಳಿಂದ ವಿವೇಕಾನಂದ ಶಾಲೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಶ್ರಮಿಸುತ್ತಿದೆ. ಆ ಮೂಲಕ ಮಕ್ಕಳ ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ವಿಶೇಷ ಒತ್ತು ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಷೂ, ಬ್ಯಾಗ್‌ಗಳನ್ನು ವಿತರಿಸಲಾಯಿತು. ಶಾಲೆಯ ಸಹಾಯಕಿ ಹಂಸಮ್ಮ ಅವರನ್ನು ಸನ್ಮಾನಿಸಲಾಯಿತು. ಮಕ್ಕಳು ಕನ್ನಡ ನಾಡು ನುಡಿ ಸಂಸ್ಕೃತಿಯ ಬಗೆಗಿನ ನೃತ್ಯ ರೂಪಕಗಳನ್ನು ನಡೆಸಿಕೊಟ್ಟರು.ಜಿ.ವಿ.ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಿದ್ದರಾಜು, ಶಾಲಾ ಅಧ್ಯಕ್ಷ ಮಾದೇ ಗೌಂಡರ್, ದೊರೆಸ್ವಾಮಿನಾಯ್ಡು, ಕಾರ್ಯದರ್ಶಿ ಸುರೇಶ್‌ನಾಯ್ಡು, ರಾಜೇಂದ್ರನ್, ಮುಖ್ಯ ಶಿಕ್ಷಕ ಮಧುಸೂದನ್ ಇತರರು ಹಾಜರಿದ್ದರು.

Post Comments (+)