ಮಂಗಳವಾರ, ಏಪ್ರಿಲ್ 13, 2021
30 °C

ಪರಿಶಿಷ್ಟರ ಹಣ ಮೀಸಲು: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕಿನ ಪ್ರತಿಯೊಂದು ಇಲಾಖೆ ಶೇ.22.5 ಹಣವನ್ನು ಪರಿಶಿಷ್ಟ ಜಾತಿ ಮತ್ತು ವರ್ಗದ ಅಭಿವೃದ್ಧಿಗಾಗಿ ಮೀಸಲಿಡಬೇಕು. ಲೋಪ ಉಂಟಾದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜುಲಿಫಿಕರುಲ್ಲಾ ಎಚ್ಚರಿಕೆ ನೀಡಿದರು.ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನ ಪ್ರಗತಿ ಮತ್ತು ಸಮಸ್ಯೆಗಳ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿಗಳಿಗೆ ಒದಗಿಸುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಕಾಪಾಡುವಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು. ಅಂಗನವಾಡಿಗಳಿಗೆ ಹಲವಾರು ಬಾರಿ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ನೀಡುತ್ತಿರುವ ದೂರುಗಳು ಬರುತ್ತಿವೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಈ ಬಗ್ಗೆ ಗಮನ ವಹಿಸುವಂತೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶೇಖರ್‌ಬಾಬು ಸೂಚಿಸಿದರು.ಜಲಾನಯನ ಇಲಾಖೆಯಿಂದ ನಡೆಯುತ್ತಿರುವ ಗಿಡನೆಡುವುದು, ಕೆರೆಗಳಲ್ಲಿ ಹೂಳು ತೆಗೆಯುವುದು ಮುಂತಾದ ಕಾಮಗಾರಿಗಳ ಬಗ್ಗೆ ಗಮನಕ್ಕೆ ತರುತ್ತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ನಂದನವನಂ ಶ್ರೀರಾಮರೆಡ್ಡಿ, ಚಿನ್ನಪ್ಪ ಪ್ರಶ್ನಿಸಿದರು. ಜಲಾನಯನ ಇಲಾಖೆ, ಅರಣ್ಯ ಇಲಾಖೆಗಳು, ತೋಟಗಾರಿಕೆ ಇಲಾಖೆ ಕಳೆದ 10 ವರ್ಷಗಳಿಂದ ಎಲ್ಲೆಲ್ಲಿ ಸಸಿಗಳನ್ನು ನೆಡಲಾಗಿದೆ. ಯಾವ ಯಾವ ಯೋಜನೆಯಲ್ಲಿ ಅಭಿವೃದ್ದಿ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂಬ ಸಮಗ್ರ ಮಾಹಿತಿಯನ್ನು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗೂ ನೀಡುವಂತೆ ಜಿಲ್ಲಾ ಪಂಚಾಯಿತಿ ಸದಸ್ಯ ಚಿನ್ನಪ್ಪ ಒತ್ತಾಯಿಸಿದರು.ಕೆಲವು ಇಲಾಖೆ ಅಧಿಕಾರಿಗಳು ಸೂಕ್ತ ಮಾಹಿತಿ ಇಲ್ಲದೆ ಸಭೆಗೆ ಬಂದಿರುವುದನ್ನು ಗಂಭೀರವಾಗಿ ತೆಗೆದುಕೊಂಡು ಎಚ್ಚರಿಕೆಯ ನೊಟೀಸ್ ನೀಡುವಂತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪಯ್ಯ ಕಾರ್ಯನಿರ್ವಹಣಾಧಿಕಾರಿ ರಂಗನಾಥಸ್ವಾಮಿ ಅವರಿಗೆ ಸೂಚಿಸಿದರು.ತಾ.ಪಂ ಉಪಾಧ್ಯಕ್ಷೆ ಮೀನಾ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.