ಪಲ್ಸ್ ಪೋಲಿಯೊ: ಬಿಬಿಎಂಪಿ ಸಿದ್ಧತೆ

7

ಪಲ್ಸ್ ಪೋಲಿಯೊ: ಬಿಬಿಎಂಪಿ ಸಿದ್ಧತೆ

Published:
Updated:

ಬೆಂಗಳೂರು: ಈ ತಿಂಗಳ 19 ಹಾಗೂ ಏಪ್ರಿಲ್ 1ರಂದು ಎರಡು ಹಂತಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಸಲು ಪಾಲಿಕೆ ಆಡಳಿತ ಸಿದ್ಧತೆ ನಡೆಸಿದೆ.ಜಿಲ್ಲಾ ವಿಚಕ್ಷಣ ದಳದ ಅಧ್ಯಕ್ಷರೂ ಆಗಿರುವ ಪಾಲಿಕೆ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಉನ್ನತ ಅಧಿಕಾರಿಗಳ ಸಭೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು.ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಐದು ವರ್ಷದೊಳಗಿನ ಸುಮಾರು 6.50 ಲಕ್ಷ ಮಕ್ಕಳಿಗೆ ಯಶಸ್ವಿಯಾಗಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 78 ಯೋಜನಾ ಘಟಕಗಳಿದ್ದು, 2,200 ಬೂತ್‌ಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು. ಜತೆಗೆ 8,400 ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 425 ಮಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ರೈಲು ನಿಲ್ದಾಣ, ಬಸ್ ನಿಲ್ದಾಣ ಹಾಗೂ ಮಾಲ್‌ಗಳಲ್ಲಿ ಬೂತ್ ತೆರೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.ನಗರಕ್ಕೆ ವಲಸೆ ಬಂದವರಿಗೆ ಪ್ರತ್ಯೇಕವಾದ ಯೋಜನೆ ರೂಪಿಸಿದ್ದು, ಆ ಮಕ್ಕಳಿಗೂ ಪೋಲಿಯೊ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗುವುದು. ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲಸಿಕೆ ಹಾಕಲು ಸಿದ್ಧತೆ ನಡೆಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ವಯಂ ಸೇವಾಸಂಸ್ಥೆಗಳ ಪದಾಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲಾಗುತ್ತದೆ.ನಗರದಲ್ಲಿ ಕಳೆದ ಸಾಲಿನಲ್ಲಿ 6,51,057 ಮಕ್ಕಳ ಪೈಕಿ 6,50,592 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಶೇಕಡ 99.92 ಗುರಿ ಮುಟ್ಟಲಾಗಿತ್ತು. ಈ ವರ್ಷ ಸಂಪೂರ್ಣ ಯಶಸ್ಸು ಸಾಧಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ಫೆ. 19ರಂದು ಮೊದಲ ಸುತ್ತಿನ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಸದಸ್ಯರು, ತಾಲ್ಲೂಕು ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರೂ ಸೇರಿದಂತೆ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಪಲ್ಸ್ ಪೋಲಿಯೊ ಜಿಲ್ಲಾ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯ ಇಲಾಖೆ, ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಗರಸಭೆ, ಪುರಸಭೆ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಆ ದಿನ ತಪ್ಪದೇ ಕಾರ್ಯನಿರ್ವಹಿಸಬೇಕು.

 

ಅಧಿಕಾರಿಗಳು ಯಾವುದೇ ಸಿಬ್ಬಂದಿಗೆ ರಜೆ ನೀಡಬಾರದು ಎಂದು ಸೂಚನೆ ನೀಡಿದರು.

ಜಿಲ್ಲೆ ವ್ಯಾಪ್ತಿಯಲ್ಲಿ ಐದು ವರ್ಷದೊಳಗಿನ 5,14,349 ಮಕ್ಕಳಿದ್ದು, ಈ ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೊ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 1650 ಕೇಂದ್ರಗಳನ್ನು ತೆರೆಯಲಾಗುವುದು. 6,600 ಸಿಬ್ಬಂದಿಯನ್ನು ಈ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲಾಗುವುದು.ಫೆ. 20, 21 ಹಾಗೂ 22ರಂದು ಸಹ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ. ತಿಮ್ಮಪ್ಪ ತಿಳಿಸಿದರು.ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಲ್ಲಯ್ಯ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry