ಗುರುವಾರ , ಮೇ 6, 2021
26 °C

ಪಿಯುಸಿ: ಮೇ 26ರ ಒಳಗೆ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂದಿನ ತಿಂಗಳ ಮೂರನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಕೊನೆ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಇಲ್ಲಿ ತಿಳಿಸಿದರು.ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಮೇ 21- 26ರ ಅವಧಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.ಮೇ 21, 22, 23ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಸಿಇಟಿ ಪರೀಕ್ಷೆ ನಂತರವೇ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಈ ವರ್ಷವೂ ಅದೇ ರೀತಿ ಆಗಲಿದೆ ಎಂದರು.ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ. ಗಣಿತ ವಿಷಯದಲ್ಲಿ ಎರಡು ಪ್ರಶ್ನೆಗಳು ಸಂಕೀರ್ಣವಾಗಿದ್ದ ಹಿನ್ನೆಲೆಯಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಆರು ಕೃಪಾಂಕಗಳನ್ನು ನೀಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಈ ರೀತಿಯ ಸಂದರ್ಭಗಳು ಬಂದಾಗ ಮಂಡಳಿ ಆಂತರಿಕವಾಗಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಮವಸ್ತ್ರ-ಪಠ್ಯಪುಸ್ತಕ: ಈಗಾಗಲೇ ಶೇ 50ರಷ್ಟು ಪಠ್ಯಪುಸ್ತಕ, ಸಮವಸ್ತ್ರಗಳನ್ನು ಶಾಲೆಗಳಿಗೆ ತಲುಪಿಸಲಾಗಿದೆ. ಮೇ ಅಂತ್ಯದ ವೇಳೆಗೆ ಎಲ್ಲ ಶಾಲೆಗಳ ಮಕ್ಕಳಿಗೂ ಅಗತ್ಯವಿರುವ ಸಮವಸ್ತ್ರ, ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು. ಶೈಕ್ಷಣಿಕ ವರ್ಷ ಆರಂಭವಾಗುವ ವೇಳೆಗೆ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ಲಭ್ಯವಾಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.ದೂರು ಬಂದರೆ ಕ್ರಮ: ಕಾನೂನು ಉಲ್ಲಂಘಿಸಿ ಖಾಸಗಿ ಶಾಲೆಗಳು ನಿಗದಿಗಿಂತ ಹೆಚ್ಚಿನ ಶುಲ್ಕ, ವಂತಿಗೆ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೆ, ಅವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.8ನೇ ತರಗತಿಯನ್ನು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿಲೀನಗೊಳಿಸುವ ಸಂಬಂಧ ಸಮಿತಿಯೊಂದನ್ನು ರಚಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು.2012-13ನೇ ಸಾಲಿಗೆ 8ನೇ ತರಗತಿಗೆ ಪ್ರೌಢಶಾಲೆಗಳಲ್ಲೇ ಪ್ರವೇಶ ನೀಡುವ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಬಹಿರಂಗ ಪ್ರಕರಣದ ಬಗ್ಗೆ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ವರದಿ ನೀಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಖಜಾನೆ ಇಲಾಖೆಯ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.ಉಪನ್ಯಾಸಕರು, ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,765 ಉಪನ್ಯಾಸಕರು ಹಾಗೂ ಪ್ರೌಢಶಾಲೆಗಳಲ್ಲಿನ 3,500 ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.ಉಪನ್ಯಾಸಕರ ಹುದ್ದೆಗಳಿಗೆ ಮೇ 15ರವರೆಗೆ ಹಾಗೂ ಶಿಕ್ಷಕರ ಹುದ್ದೆಗೆ ಮೇ 16ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ ಎಂದು ಅವರು ಹೇಳಿದರು.ಪಿಯುಸಿ: ಕೇಂದ್ರೀಕೃತ ಪ್ರವೇಶವಿಲ್ಲ

ಪ್ರಥಮ ಪಿಯುಸಿ ಪ್ರವೇಶಕ್ಕೆ ಕೇಂದ್ರೀಕೃತ ಪ್ರವೇಶ ಪದ್ಧತಿ ಜಾರಿಗೆ ತರುವ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಆದರೆ ಇದಕ್ಕೆ ಬೇಕಾದ ಸಾಫ್ಟ್‌ವೇರ್ ಸಿದ್ಧಪಡಿಸುವ ಕಾರ್ಯ ಇನ್ನೂ ಆಗಿಲ್ಲದ ಕಾರಣ 2012-13ನೇ ಸಾಲಿಗೆ ಈ ಪದ್ಧತಿಯನ್ನು ಜಾರಿಗೊಳಿಸುವುದು ಕಷ್ಟ ಎಂದು ಕಾಗೇರಿ ಹೇಳಿದರು.ಪ್ರಥಮ ಪಿಯುಸಿ ಪ್ರವೇಶದಲ್ಲಿ ಪಾರದರ್ಶಕತೆಯನ್ನು ತರುವ ದೃಷ್ಟಿಯಿಂದ ಇಂಟರ್‌ನೆಟ್ ಮೂಲಕವೇ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಸೇರಿದಂತೆ ಸುಧಾರಣಾ ಕ್ರಮಗಳ ಬಗ್ಗೆ ಚಿಂತನೆ ನಡೆದಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೂ ಮುನ್ನ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.