ಗುರುವಾರ , ಮೇ 13, 2021
39 °C

ಪೆಟ್ರೋಲ್, ಬಸ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೆಟ್ರೋಲ್, ಬಸ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಹಾಗೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ವಿವಿಧ ಜನಪರ ಸಂಘಟನೆಗಳ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭಾರತೀಯ ರಿಪಬ್ಲಿಕ್ ಪಕ್ಷದ ಕಾರ್ಯಕರ್ತರು, `ಬಿಜೆಪಿ ಸರ್ಕಾರದ ಅಧಿಕಾರದಿಂದ ರೋಸಿ ಹೋಗಿದ್ದ ರಾಜ್ಯದ ಜನ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆಡಳಿತದ ಚುಕ್ಕಾಣಿ ಹಿಡಿದ ಒಂದೇ ತಿಂಗಳಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಮೂಡಿಸಿದ ಕಾಂಗ್ರೆಸ್ ಸರ್ಕಾರ, ಈಗ ಹಂತ ಹಂತವಾಗಿ ಜನವಿರೋಧಿಯಾಗಿ ನಡೆದುಕೊಳ್ಳುವ ಮೂಲಕ ತನ್ನ ನಿಜ ಬಣ್ಣವನ್ನು ಬಯಲು ಮಾಡುತ್ತಿದೆ' ಎಂದು ಆರೋಪಿಸಿದರು.ಎಲ್ಲರಿಗೂ ಅಗ್ಗದ ಹೆಂಡ ವಿತರಿಸುವುದು, ಬಿಪಿಎಲ್ ಕಾರ್ಡುದಾರರಿಗೆ ಒಂದು ರೂಪಾಯಿಗೆ ಒಂದು ಕೆ.ಜಿ ಅಕ್ಕಿ ವಿತರಿಸಲು ಮುಂದಾಗಿ ಎಪಿಎಲ್ ಕಾರ್ಡುದಾರರಿಗೆ ಅಕ್ಕಿ ವಿತರಣೆ ನಿಲ್ಲಿಸಲು ಸರ್ಕಾರ ಮುಂದಾಗಿದೆ.     ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ಮತ್ತೊಂದು ಆಘಾತ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಬಿ.ಎನ್.ಮಂಟೇಸ್ವಾಮಿ, `ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬಸ್‌ಗಳ ಪ್ರಯಾಣ ದರದಲ್ಲಿ ಹೆಚ್ಚಳ ಮಾಡಲಾಗಿದೆ. ಇದರಿಂದ ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ' ಎಂದರು.ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳವಾಗಿದೆ ಎಂದು ಸ್ವಂತ ವಾಹನದಲ್ಲಿ ಓಡಾಡುವುದು ಕಷ್ಟ. ಕಾರಣ, ಕೇಂದ್ರ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡುವ ಮೂಲಕ ಆಘಾತ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದನ್ನು ಬಿಟ್ಟು, ಜನಪರವಾಗಿ ವರ್ತಿಸಬೇಕು ಎಂದು ಆಗ್ರಹಿಸಿದರು.ಜೇಬಿಗೆ ಕತ್ತರಿ:  ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದ ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಜನ ಸಾಮಾನ್ಯನ ಜೇಬಿಗೆ ಮತ್ತೊಮ್ಮೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದರು.ಈ ವೇಳೆ ಮಾತನಾಡಿದ ಪಕ್ಷದ ಕಾರ್ಯದರ್ಶಿ ಕೆ.ಪ್ರಕಾಶ್, `ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಪೆಟ್ರೋಲ್ ಮತ್ತು ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ಕಾಂಗ್ರೆಸ್ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೀಡು   ಮಾಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.