ಗುರುವಾರ , ಫೆಬ್ರವರಿ 25, 2021
20 °C

ಪೊಲೀಸರ ವೇತನ ಪರಿಷ್ಕರಣೆ: ಸಿ.ಎಂ. ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೊಲೀಸರ ವೇತನ ಪರಿಷ್ಕರಣೆ: ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ‘ರಾಜ್ಯದ ಪೊಲೀಸರ ವೇತನ ಹೆಚ್ಚಳ ಪರಿಷ್ಕರಣಾ ಹಂತದಲ್ಲಿದೆ. ಈ ಸಂದರ್ಭದಲ್ಲಿ ಎಲ್ಲಾ ತಾರತಮ್ಯಗಳನ್ನು ನಿವಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಸೋಮವಾರ ನಡೆದ 70ನೇ ಸ್ವಾತಂತ್ರ್ಯೋತ್ಸವದಲ್ಲಿ ಮಾತನಾಡಿದ ಅವರು, ‘ಇತರೆ ರಾಜ್ಯಗಳಿಗೆ ಹೋಲಿಸದರೆ ನಮ್ಮ ರಾಜ್ಯ ಪೊಲೀಸ್ ಸಿಬ್ಬಂದಿಯ ವೇತನ ಕಡಿಮೆ ಇದೆ. ಕೆಲವು ರಾಜ್ಯಗಳಲ್ಲಿ ವೇತನ ಪರಿಷ್ಕರಣೆಯಾಗಿದೆ. ನಮ್ಮ ರಾಜ್ಯದಲ್ಲೂ ವೇತನ ಪರಿಷ್ಕರಣಾ ಹಂತದಲ್ಲಿದೆ’ ಎಂದರು.

‘ಇನ್ನೆರಡು ವರ್ಷಗಳಲ್ಲಿ 15,000 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 6,389 ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆಳಹಂತದ ಪೊಲೀಸರ ಮೇಲಿನ ಒತ್ತಡ ಸಂಪೂರ್ಣ ಕಡಿಮೆಯಾಗಲಿದೆ. ಮುಂದಿನ ಹತ್ತು ತಿಂಗಳಲ್ಲಿ ಪೊಲೀಸ್‌ ವಸತಿಗೃಹಗಳ ನಿರ್ಮಾಣ ಪೂರ್ಣಗೊಳ್ಳಲಿದೆ’ ಎಂದು ಹೇಳಿದರು.

ಶೀಘ್ರದಲ್ಲೇ ಉಚಿತ ವೈ–ಫೈ

‘ರಾಜ್ಯದ ಪ್ರಮುಖ ನಗರಗಳಲ್ಲಿ ಉಚಿತ ವೈ-ಫೈ ಹಾಟ್‌ಸ್ಪಾಟ್‌ ಹಾಗೂ ಎಲ್ಲಾ ಪಂಚಾಯ್ತಿಗಳಲ್ಲಿ ಉಚಿತ ವೈ-ಫೈ ಸೌಲಭ್ಯವನ್ನು ಒದಗಿಸುವ ಯೋಜನೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು’ ಎಂದು ಸಿದ್ದರಾಮಯ್ಯ ಘೋಷಿಸಿದರು.

‘ಮುಂದಿನ ಎರಡು ವರ್ಷಗಳಲ್ಲಿ 150 ಬಹುಗ್ರಾಮ ಕುಡಿಯುವ ನೀರು ಯೋಜನೆಗಳನ್ನು ಪೂರ್ಣಗೊಳಿಸಿ 40 ಲಕ್ಷ ಜನಸಂಖ್ಯೆಗೆ ಶಾಶ್ವತ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಮುಂದಿನ 2 ವರ್ಷಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವೈಯಕ್ತಿಕ ಗೃಹ ಶೌಚಾಲಯಗಳನ್ನು ನಿರ್ಮಾಣಗೊಳಿಸಲಾಗುವುದು. 2018ರ ಅಕ್ಟೋಬರ್ 2ರ ವೇಳೆಗೆ ರಾಜ್ಯದ ಗ್ರಾಮೀಣ ಪ್ರದೇಶವನ್ನು ಸಂಪೂರ್ಣ ಬಯಲು ಬಹಿರ್ದೆಸೆ ಮುಕ್ತ ಮಾಡುವ ಗುರಿ ಇದೆ’ ಎಂದರು.

4,950 ಎಕರೆ ಭೂಮಿ ವಶ

‘ಬೆಂಗಳೂರು ನಗರ ಜಿಲ್ಲೆಯಲ್ಲಿ ₹ 52 ಸಾವಿರ ಕೋಟಿ ಮೌಲ್ಯದ 4,950 ಎಕರೆ ಭೂಮಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ’ ಎಂದು ಹೇಳಿದರು.

‘ನಮ್ಮ ಮೆಟ್ರೊ ಮೊದಲ ಹಂತದ ಎಲ್ಲಾ ಕಾಮಗಾರಿಗಳೂ ಈ ವರ್ಷದ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿವೆ. ನಮ್ಮ ಮೆಟ್ರೊ ಮೂರನೇ ಹಂತದ ಯೋಜನೆ ರೂಪಿಸುವ ಕಾರ್ಯ ಪ್ರಾರಂಭವಾಗಿದೆ. ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌. ಪುರದವರೆಗೆ ಹಾಗೂ ನಾಗವಾರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಮಾರ್ಗ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.