ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

7

ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Published:
Updated:
ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ಉದ್ಯೋಗ ಖಾತರಿ ಯೋಜನೆ ಕೂಲಿ ಹಣಕ್ಕಾಗಿ ಒತ್ತಾಯಿಸಿದ ಕೊಪ್ಪಳ ಜಿಲ್ಲೆ ರೈತರು ಮತ್ತು ಕಾರ್ಮಿಕರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ಖಂಡಿಸಿದ ಟಿಯುಸಿಐ ಮತ್ತು ಕರ್ನಾಟಕ ರೈತ ಸಂಘ ಕಾರ್ಯಕರ್ತರು, ಸಚಿವ ಜಗದೀಶ್ ಶೆಟ್ಟರ್ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು.ಹಳೆ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಹನುಮಂತಪ್ಪ ವೃತ್ತದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕೃತಿ ದಹಿಸಿದರು. ಅಲ್ಲಿಂದ ಎಂ.ಜಿ.ರಸ್ತೆಯಲ್ಲಿ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂಎಲ್) ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ, ಪೊಲೀಸರು ಮೇಲಾಧಿಕಾರಿಗಳ ಆಣತಿ ಮೇರೆಗೆ ಹಾಗೂ ವೃತ್ತಿಯಲ್ಲಿ ಬಡ್ತಿ ಆಸೆಗಾಗಿ ರೈತರ, ಕೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲು ಮುಂದಾದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಪೊಲೀಸ್ ದೌರ್ಜನ್ಯಕ್ಕೆ ನೈತಿಕ ಹೊಣೆ ಹೊತ್ತು ಸಚಿವರಾದ ಜಗದೀಶ ಶೆಟ್ಟರ್ ಮತ್ತು ಬಿ.ಎನ್.ಬಚ್ಚೇಗೌಡ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆದಿದ್ದು, ಅಧಿಕಾರಿಗಳು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಟಿಯುಸಿಐ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎನ್.ರಮೇಶ್, ಜಿಲ್ಲಾ ಘಟಕ ಕಾರ್ಯದರ್ಶಿ ಎಸ್.ವಿಜಯ್, ರೈತ ಸಂಘ ಜಿಲ್ಲಾ ಘಟಕ ಕಾರ್ಯದರ್ಶಿ ಜಿ.ಸುರೇಶ್, ಉಪಾಧ್ಯಕ್ಷ ಕೆ.ಎನ್.ಉದ್ದಪ್ಪ, ಪ್ರತಿಭಟನೆ ನೇತೃತ್ವ ವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry