ಸೋಮವಾರ, ಮೇ 16, 2022
29 °C

ಪ್ರಚಾರ ಕಣಕ್ಕಿಳಿದ ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಭಾಗದ ಜನತೆಯನ್ನು ವಂಚಿಸಿದ್ದಾರೆ’ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಘುನಂದನ್ ರಾಮಣ್ಣ ಅವರ ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಸುದ್ದಿಗಾರರ ಜತೆ ಮಾತನಾಡಿದರು.ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವಚನ ನೀಡಿದ್ದ ಕುಮಾರಸ್ವಾಮಿ ಅವರು ಇದೀಗ ಸ್ಪರ್ಧೆಯಿಂದ ಹಿಂದೆ ಸರಿಯುವ ಮೂಲಕ ಮಾತಿಗೆ ತಪ್ಪಿದ್ದಾರೆ. ಇದರಿಂದ ಕ್ಷೇತ್ರದ ಜನತೆ ಅಸಮಾಧಾನಗೊಂಡಿದ್ದಾರೆ ಎಂದು ಅವರು ವಾದಿಸಿದರು. ಕಾಂಗ್ರೆಸ್ ಇತಿಹಾಸ ಹೊಂದಿರುವ ಪಕ್ಷ. ಹೊಸ ಹಾಗೂ ಯುವ ಅಭ್ಯರ್ಥಿಯನ್ನು ಚನ್ನಪಟ್ಟಣದಲ್ಲಿ ಕಣಕ್ಕಿಳಿಸಿದೆ.ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ, ಎಸ್.ಎಂ.ಕೃಷ್ಣ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಶಯದ ಮೇರೆಗೆ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದು ಅವರು ಹೇಳಿದರು. ಜಿ.ಪಂ ಮತ್ತು ತಾ.ಪಂ ಚುನಾವಣೆಯ ಫಲಿತಾಂಶ ಉಪ ಚುನಾವಣೆಯಲ್ಲಿ ಪುನರಾವರ್ತನೆ ಆಗುವುದಿಲ್ಲ ಎಂದ ಅವರು, ಕಳೆದ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದ ಟಿ.ಕೆ.ಯೋಗೇಶ್ ಅವರ ಸೂಚನೆ ಮೇರೆಗೆ ಅವರ ಸಹೋದರ ರಘುನಂದನ್ ರಾಮಣ್ಣ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಅಭ್ಯರ್ಥಿ ರಘುನಂದನ್ ರಾಮಣ್ಣ ಮಾತನಾಡಿ, ‘ಚನ್ನಪಟ್ಟಣ ನನಗೆ ಹೊಸದಲ್ಲ. ಕ್ಷೇತ್ರದ ಸಾಕಷ್ಟು ಗ್ರಾಮಗಳಲ್ಲಿ ಸುತ್ತಾಡಿದ್ದೇನೆ. ನನ್ನ ಸಹೋದರ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದೆ. ಆಗ ಕ್ಷೇತ್ರದ ಪರಿಚಯ ಆಗಿದೆ. ಅಲ್ಲದೆ ಇಲ್ಲಿನ ಕೆಲ ಗ್ರಾಮಗಳಲ್ಲಿನ ಶಾಲೆಗಳಿಗೆ ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿ ಸೇವಾ ಕಾರ್ಯದಲ್ಲಿಯೂ ನಿರತನಾಗಿರುವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.