ಪ್ರತ್ಯೇಕ ಅಪಘಾತ: ಇಬ್ಬರ ಸಾವು
ಬೆಂಗಳೂರು: ನಗರದ ಚಿಕ್ಕಪೇಟೆ ಮತ್ತು ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಮೆಜೆಸ್ಟಿಕ್ ಬಳಿಯ ಗುಬ್ಬಿ ತೋಟದಪ್ಪ ಛತ್ರ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾಫ್ಟ್ವೇರ್ ಎಂಜಿನಿಯರ್ ನಿಜಾಮುದ್ದೀನ್ (35) ಎಂಬುವರು ಸಾವನ್ನಪ್ಪಿದ್ದಾರೆ.
ತಮಿಳುನಾಡು ಮೂಲದ ಅವರು ನಗರದ ಎಲೆಕ್ಟ್ರಾನಿಕ್ಸಿಟಿಯ ಸಾಫ್ಟ್ವೇರ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಕೊಡಿಗೇಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ರಾತ್ರಿ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಪಾದಚಾರಿ ಸುರಂಗ ಮಾರ್ಗಕ್ಕೆ ಬದಲಾಗಿ ಗುಬ್ಬಿ ತೋಟದಪ್ಪ ಛತ್ರ ರಸ್ತೆ ಮೂಲಕ ರೈಲು ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದ ಅವರು, ಕಿವಿಗೆ ಮೊಬೈಲ್ನ ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುತ್ತಾ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಂತರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ವಾಹನದ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಚಿಕ್ಕಪೇಟೆ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮತ್ತೊಂದು ಪ್ರಕರಣ: ಎಂಇಎಸ್ ವರ್ತುಲ ರಸ್ತೆಯ ಗೊರಗುಂಟೆಪಾಳ್ಯದ ಬಳಿ ಲಾರಿ ಡಿಕ್ಕಿ ಹೊಡೆದು ತಿಪ್ಪೇಸ್ವಾಮಿ (38) ಎಂಬುವರು ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆ ಪುರ್ಲೆ ಹಳ್ಳಿಯ ತಿಪ್ಪೇಸ್ವಾಮಿ ಅವರು ನಗರದಲ್ಲಿ ಭಾನುವಾರ ಏರ್ಪಡಾಗಿದ್ದ ಒಕ್ಕಲಿಗರ ಸಮಾವೇಶಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.
ಊರಿನ ಜನರೊಂದಿಗೆ ಖಾಸಗಿ ಬಸ್ನಲ್ಲಿ ನಗರಕ್ಕೆ ಬರುತ್ತಿದ್ದ ಅವರು, ಗೊರಗುಂಟೆಪಾಳ್ಯದ ಬಳಿ ವಾಹನದಿಂದ ಕೆಳಗಿಳಿದು ಹೋಟೆಲ್ಗೆ ಹೋಗುವ ಉದ್ದೇಶದಿಂದ ರಸ್ತೆ ದಾಟುತ್ತಿದ್ದಾಗ ಲಾರಿ ಅವರಿಗೆ ಡಿಕ್ಕಿ ಹೊಡೆಯಿತು.
ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಶವಂತಪುರ ಸಂಚಾರ ಠಾಣೆ ಪೊಲೀಸರು ಚಾಲಕನನ್ನು ಬಂಧಿಸಿ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.