ಮಂಗಳವಾರ, ಏಪ್ರಿಲ್ 20, 2021
25 °C

ಪ್ರತ್ಯೇಕ ಅಪಘಾತ: ಮೂರು ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ವೈಟ್‌ಫೀಲ್ಡ್ ಮತ್ತು ಚಿಕ್ಕಜಾಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಬಿಎಂಟಿಸಿ ಬಸ್‌ಗೆ ಬೈಕ್ ಗುದ್ದಿಸಿದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವೈಟ್‌ಫೀಲ್ಡ್ ಸಮೀಪದ ಸೀಗೇಹಳ್ಳಿ ಮುಖ್ಯರಸ್ತೆಯಲ್ಲಿ  ನಡೆದಿದೆ. ಭಟ್ಟರಹಳ್ಳಿ ನಿವಾಸಿ ಸುಧೀನ್ (25) ಮೃತಪಟ್ಟ ಯುವಕ. ಕೇರಳ ಮೂಲದ ಆತ ನಗರದ ಕಟ್ಟಡ ನಿರ್ಮಾಣ ಕಂಪೆನಿಯೊಂದರಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಕಾಡುಗೋಡಿಗೆ ಹೋಗುತ್ತಿದ್ದ ಆತ ಕಾರನ್ನು ಹಿಂದಿಕ್ಕುವ ಯತ್ನದಲ್ಲಿ, ರಸ್ತೆ ಬದಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಗುದ್ದಿಸಿದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ ಪಾನಮತ್ತನಾಗಿ ಬೈಕ್ ಚಾಲನೆ ಮಾಡುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ, ಆತ ಪಾನಮತ್ತನಾಗಿದ್ದನೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಖರ ಮಾಹಿತಿ ಸಿಗಲಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ವೈಟ್‌ಫೀಲ್ಡ್ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ನಾಗೇಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮತ್ತೊಂದು ಘಟನೆ: ಬೆಂಗಳೂರು ಅಂತರರಾಷ್ಟೀಯ ವಿಮಾನ ನಿಲ್ದಾಣ (ಬಿಐಎಎಲ್) ರಸ್ತೆಯ ಮೀನುಕುಂಟೆ ಹೊಸೂರು ಸೇತುವೆ ಮೇಲೆ ರಾತ್ರಿ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.

ಮೃತರ ಹೆಸರು ಮತ್ತು ವಿಳಾಸ ಗೊತ್ತಾಗಿಲ್ಲ. ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಅವರಿಬ್ಬರೂ ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಂತರ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ವಾಹನವನ್ನು ವಶಕ್ಕೆ ತೆಗೆದುಕೊಂಡು ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.