ಮಂಗಳವಾರ, ಮೇ 11, 2021
24 °C

ಪ್ರತ್ಯೇಕ ಪ್ರಕರಣ: ನೇಣು ಹಾಕಿಕೊಂಡು ಇಬ್ಬರ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.ಮೂಲತಃ ಶಿವಮೊಗ್ಗದವರಾದ ನಾಗರಾಜ್(40) ಆತ್ಮಹತ್ಯೆ ಮಾಡಿಕೊಂಡವರು. ತರಕಾರಿ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ ಅವರು ಪತ್ನಿ ಸವಿತಾ ಹಾಗೂ ಮಗನೊಂದಿಗೆ ಸೋಮೇಶ್ವರ ನಗರದ ಎರಡನೇ ಅಡ್ಡರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.ಬೆಳಿಗ್ಗೆ 8.30ರ ಸುಮಾರಿಗೆ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ಸ್ನೇಹಿತರ ಬಳಿ ಸಾಲ ಮಾಡಿಕೊಂಡಿದ್ದರು. ಸಾಲಗಾರರು ಮಂಡಿ ಬಳಿ ಬಂದು ಹಣ ವಾಪಸ್ ಕೊಡುವಂತೆ ಜಗಳವಾಡುತ್ತಿದ್ದರು. ಹಾಗಾಗಿ  ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಅವರ ಕುಟುಂಬದವರಿಗೆ ಒಪ್ಪಿಸಲಾಯಿತು ಎಂದು ಪೊಲೀಸರು ತಿಳಿಸಿದರು.ಅಪರಿಚಿತ ವ್ಯಕ್ತಿ ಆತ್ಮಹತ್ಯೆ: ಅಪರಿಚಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಾಗಡಿ ರಸ್ತೆಯ ಕುಷ್ಠ ರೋಗಿಗಳ ಆಸ್ಪತ್ರೆಯ ಆವರಣದಲ್ಲಿನ ಮರವೊಂದಕ್ಕೆ ಸುಮಾರು 25 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಶವವನ್ನು ಕಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಪೊಲೀಸರು ತಿಳಿಸಿದರು.ವಿದ್ಯಾರ್ಥಿನಿ ಸಾವು: ಬೆಂಕಿ ಹಚ್ಚಿಕೊಂಡು ಗಾಯಗೊಂಡಿದ್ದ ವಿದ್ಯಾರ್ಥಿನಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಹನುಮಂತನಗರ ಸಮೀಪದ ಜವರೇಗೌಡ ರಸ್ತೆ ನಿವಾಸಿ ಶಿಲ್ಪಾ ಶ್ರೀ (17) ಸಾವನ್ನಪ್ಪಿದ್ದಾರೆ.ಎರಡು ವರ್ಷಗಳ ಹಿಂದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಅವರು, ಪುನಃ ಪರೀಕ್ಷೆ ಬರೆದಿದ್ದರು. ಆದರೆ, ಅದರಲ್ಲೂ ಅನುತ್ತೀರ್ಣರಾಗಿದ್ದರಿಂದ ಮನನೊಂದು ಮಾ.29ರಂದು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು ಎಂದು ಅವರ ಸಂಬಂಧಿಕರು ತಿಳಿಸಿರುವುದಾಗಿ ಪೊಲೀಸರು ಹೇಳಿದರು.ಗಾಯಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ ರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಹನುಮಂತನಗರ ಪೊಲೀಸರು ತಿಳಿಸಿದರು.ಅಪಘಾತ ಸಾವು: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಕೊಲೇಔಟ್ ಸಮೀಪ ಗೊಟ್ಟಿಗೆರೆಯಲ್ಲಿ ಗುರುವಾರ ಸಂಭವಿಸಿದೆ.

ಮೂಲತಃ ಮಂಡ್ಯದವರಾದ ಜಗದೀಶ್(37) ಮೃತಪಟ್ಟವರು.

 

ಬನಶಂಕರಿ ಎರಡನೇ ಹಂತದ ಇಟ್ಟುಮಡುವಿನ ನಿವಾಸಿಯಾದ ಜಗದೀಶ್, ಬನ್ನೇರುಘಟ್ಟದಲ್ಲಿರುವ ಖಾಸಗಿ ಕಂಪೆನಿಯೊಂದರ ವ್ಯವಸ್ಥಾಪಕರಾಗಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.ಸಂಜೆ 4.30ರ ಸುಮಾರಿಗೆ ಬನ್ನೇರುಘಟ್ಟ ಕಡೆಯಿಂದ ಬೈಕ್‌ನಲ್ಲಿ ಮನೆಗೆ ಹೋಗುವಾಗ ಗೊಟ್ಟಿಗೆರೆ ಸಮೀಪ ಟಿಪ್ಪರ್ ಲಾರಿಯೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ಲಾರಿಯ ಹಿಂದಿನ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು. ಚಾಲಕ ಪರಾರಿಯಾಗಿದ್ದು ಆರೋಪಿಯ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಮೈಕೊಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.