ಮಂಗಳವಾರ, ಏಪ್ರಿಲ್ 20, 2021
23 °C

ಪ್ರಧಾನಿಗೆ ನ್ಯಾಯಾಂಗ ನಿಂದನೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಐಎಎನ್‌ಎಸ್): ಐದನೇ ತರಗತಿಯ ವಿದ್ಯಾರ್ಥಿನಿಗೆ `ಸ್ವಮೂತ್ರಪಾನ ಶಿಕ್ಷೆ~ ವಿಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಭಾರತಿ ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಇತರ ನಾಲ್ವರಿಗೆ ಕೋಲ್ಕತ್ತ ಹೈಕೋರ್ಟ್ ಶುಕ್ರವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಭಾರತಿ ವಿಶ್ವವಿದ್ಯಾಲಯದ ವಿರುದ್ಧ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಸಂಬುದ್ಧ ಚಕ್ರವರ್ತಿ ಈ ನೋಟಿಸ್ ಜಾರಿ ಮಾಡಿದ್ದಾರೆ.ಕುಲಪತಿ ಸುಶಾಂತ್ ದತ್ತ ಗುಪ್ತಾ, ರಿಜಿಸ್ಟ್ರಾರ್ ಮಣಿ ಮುಕುಟ್ ಮಿತ್ರಾ, ಪಶ್ಚಿಮ ಬಂಗಾಳ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಸೇನ್ ಮತ್ತು ವಿದ್ಯಾರ್ಥಿನಿ ನಿಲಯದ ಮೇಲ್ವಿಚಾರಕಿ ಉಮಾ ಪೊದ್ದಾರ್ ಅವರಿಗೂ  ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.ಶಾಲೆಗಳಲ್ಲಿ  ವಿದ್ಯಾರ್ಥಿಗಳಿಗೆ  ಯಾವುದೇ ರೀತಿಯ ದೈಹಿಕ ಶಿಕ್ಷೆ ನೀಡುವುದನ್ನು ನಿಷೇಧಿಸಿ ಕೋಲ್ಕತ್ತ ಹೈಕೋರ್ಟ್  2004ರಲ್ಲಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುವ ಬದಲು ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸುವಂತೆ 2009ರಲ್ಲಿ ನ್ಯಾಯಾಲಯ ಕೆಲವು ಮಾರ್ಗಸೂಚಿಗಳನ್ನು ನಿಗದಿ ಮಾಡಿತ್ತು.ಆದರೆ, ವಿಶ್ವಭಾರತಿ ವಿಶ್ವವಿದ್ಯಾಲಯ ಬಾಲಕಿಗೆ ಸ್ವಮೂತ್ರಪಾನದಂತಹ ಅಮಾನವೀಯ ಶಿಕ್ಷೆ ನೀಡುವ ಮೂಲಕ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದೆ ಎಂದು ತಪಸ್ ಭಂಜಾ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.