ಗುರುವಾರ , ಮೇ 19, 2022
24 °C

ಪ್ರಮಾಣ ಪತ್ರ ಸಲ್ಲಿಕೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನದಿತೀರದಲ್ಲಿ ಮರಳು ಗಣಿಗಾರಿಕೆ ನಡೆಸಲು ಸರ್ಕಾರ ರೂಪಿಸಿರುವ ಹೊಸ ಮರಳು ನೀತಿ ಅನುಸರಿಸುವಂತೆ ಎಲ್ಲ ಗುತ್ತಿಗೆದಾರರು ಒಂದು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಹೈಕೋರ್ಟ್ ಗುರುವಾರ ಆದೇಶಿಸಿದೆ.ಪರಿಸರ ಇಲಾಖೆಯ ಅನುಮತಿಗಾಗಿ ಒಂದು ವಾರದ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಅರ್ಜಿದಾರರಿಗೆ ಆದೇಶಿಸಿರುವ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಅರ್ಜಿಯನ್ನು ಇದೇ 28ರ ಒಳಗೆ ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಇಲಾಖೆಗೆ ಸೂಚಿಸಿದೆ.ಯಾಂತ್ರಿಕ ದೋಣಿ ಬಳಸಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯದ ವಿವಿಧ ಭಾಗಗಳ ಹಲವಾರು ಮಂದಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ.‘ಈಗಾಗಲೇ ಮರಳು ಗಣಿಗಾರಿಕೆಯಲ್ಲಿ ತೊಡಗಿರುವವರ ಗುತ್ತಿಗೆಯ ಅವಧಿಯನ್ನು ಇದೇ ಮಾರ್ಚ್ 31ಕ್ಕೆ ಅಂತ್ಯಗೊಳಿಸಬೇಕು. ಹೈಕೋರ್ಟ್‌ನಿಂದ ತಡೆಯಾಜ್ಞೆ ಇರುವ ಕಾರಣದಿಂದಲೋ ಅಥವಾ ಇನ್ನಾವುದೋ ಕಾರಣಕ್ಕೆ ಗಣಿಗಾರಿಕೆ ನಡೆಸಲು ಆಗದಿದ್ದ ವ್ಯಕ್ತಿಗಳಿಗೆ, ಗಣಿಗಾರಿಕೆ ಸ್ಥಗಿತಗೊಂಡ ದಿನಕ್ಕೆ ಪರ್ಯಾಯವಾಗಿ, ಮುಂದೆ ಅಷ್ಟೇ ದಿನಗಳ ಅವಧಿಗೆ ಅದನ್ನು ನಡೆಸಲು ಅನುಮತಿ ನೀಡಬೇಕು’ ಎಂದು ಪೀಠ ಆದೇಶಿಸಿದೆ.ಮರಳು ನೀತಿಯಲ್ಲಿ ಏನಿದೆ: ಮರಳು ನೀತಿಯ ಬಗ್ಗೆ ಕೋರ್ಟ್ ಗಮನಕ್ಕೆ ತಂದ ಸರ್ಕಾರದ ಪರ ವಕೀಲ ರವೀಂದ್ರ ಕೊಲ್ಲೆ ಅವರು, ‘ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದಾದ್ಯಂತ ಏಕರೀತಿಯ ಮರಳು ನೀತಿ ಜಾರಿಗೊಳಿಸಲಾಗಿದೆ. ಭೌಗೋಳಿಕ ಮತ್ತು ಆಡಳಿತಾತ್ಮಕ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಮರಳು ನೀತಿಯನ್ನು ಜಾರಿಗೆ ತರಲಾಗಿದೆ. ಇದರ ಸಂಪೂರ್ಣ ಹೊಣೆಗಾರಿಕೆಯನ್ನು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ವಹಿಸಲಾಗುತ್ತದೆ. ಜಿಲ್ಲಾಧಿಕಾರಿಗಳು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸೇರಿ ಸ್ಥಳೀಯವಾಗಿ ದರ ನಿಗದಿ ಮಾಡಲಿದ್ದಾರೆ.ಪಟ್ಟಾ ಭೂಮಿಯಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ಇಲ್ಲ. ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್/ಆರ್‌ಎಫ್‌ಐಡಿ ಉಪಕರಣ ಕಡ್ಡಾಯ. ಮರಳು ಸಾಗಾಣಿಕೆ ಪರವಾನಗಿ ವಿತರಿಸುವ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗುವುದು.

ಪರಿಸರ ಮಾಲಿನ್ಯಕ್ಕೆ ಎಡೆಮಾಡಿಕೊಡುವ ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆ ಅವಶ್ಯಕತೆಗೆ ಅನುಗುಣವಾಗಿ ಯಾಂತ್ರಿಕ ದೋಣಿ ಹಾಗೂ ಜೆಸಿಬಿಗಳನ್ನು ಬಳಸಿಕೊಳ್ಳಲು ಅವಕಾಶ ಇದೆ. ಫಿಲ್ಟರ್ ಮರಳು ಗಣಿಗಾರಿಕೆ ಮಾಡುವವರಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.