ಭಾನುವಾರ, ಮಾರ್ಚ್ 7, 2021
27 °C

ಪ್ರವಾಸಿ ಸ್ಥಳ ಅಭಿವೃದ್ಧಿಗೆ ಶಾಸಕ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರವಾಸಿ ಸ್ಥಳ ಅಭಿವೃದ್ಧಿಗೆ ಶಾಸಕ ಸಲಹೆ

ಚಾಮರಾಜನಗರ: ಜಿಲ್ಲೆಯಲ್ಲಿ ಆಕರ್ಷಕ ಪ್ರವಾಸಿ ತಾಣಗಳಿದ್ದು, ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅವಕಾಶ ಇದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಏರ್ಪಡಿಸಿರುವ  25 ದಿನಗಳ ಪ್ರವಾಸಿ ಮಾರ್ಗದರ್ಶಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರವಾಸೋದ್ಯಮ ಇಂದು ಅತ್ಯಂತ ಲಾಭದಾಯಕ ಉದ್ಯಮವಾಗಿದೆ. ಜಿಲ್ಲೆಯಲ್ಲಿ ಪ್ರವಾಸಿಗರನ್ನು ಸೆಳೆಯುವ ಅತ್ಯತ್ತುಮ ಪ್ರವಾಸಿ ಸ್ಥಳಗಳು ಇವೆ. ಇವುಗಳ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಸಾಧಿಸಬೇಕಿದೆ ಎಂದು ಹೇಳಿದರು.ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗುವಂತೆ ಚಾಮರಾಜನಗರದಿಂದ ಬಿಳಿಗಿರಿರಂಗನ ಬೆಟ್ಟ ಸಂಪರ್ಕಿಸುವ ರಸ್ತೆಯ ಮುಂದುವರೆದ ಕಾಮಗಾರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆಯೋಜಿಸಿರುವ ಪ್ರವಾಸಿ ಮಾರ್ಗದರ್ಶಿ ತರಬೇತಿ ಶಿಬಿರವನ್ನು ಶಿಬಿರಾರ್ಥಿಗಳು ಪ್ರಯೋಜನವನ್ನು ಪಡೆದು ಸ್ವಾವಲಂಬಿ ಬದುಕು ಸಾಗಿಸಲು ಮುಂದಾಗಬೇಕು ಎಂದು ಶಾಸಕರು ಸಲಹೆ ಮಾಡಿದರು.

ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಪ್ರೊ .ಕೆ.ಎಸ್. ನಾಗಪತಿ ಮಾತನಾಡಿ, ಪ್ರವಾಸೋದ್ಯಮ ವಿಶ್ವದಲ್ಲೇ ಹೆಚ್ಚು ಆದಾಯ ತಂದು ಕೊಡುವ ಎರಡನೇ ಉದ್ಯಮವಾಗಿದೆ. ಇದು 235 ಮಿಲಿಯನ್ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದರು.ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸಬೇಕು. ಜಿಲ್ಲೆಯಲ್ಲಿ ಪರಿಸರ ಹಾಗೂ ಸಾಹಸ ಆಧಾರಿತ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲು ವಿಪುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ತಾಣಗಳನ್ನು ಸಂರಕ್ಷಿಸುವ ಅವಶ್ಯಕತೆ ಇದೆ ಎಂದು ನಾಗಪತಿ ತಿಳಿಸಿದರು.ಧೀನ ಬಂಧು ಸಂಸ್ಥೆ ಗೌರವ ಕಾರ್ಯದರ್ಶಿ ಪ್ರೊ.  ಜಿ.ಎಸ್. ಜಯದೇವ್ ಮಾತನಾಡಿ, ಕಲೆ, ಸಂಸ್ಕೃತಿಗೆ ಚಾಮರಾಜನಗರ ಜಿಲ್ಲೆ ಹಿರಿಮೆ ಹೊಂದಿದೆ. ಇಲ್ಲಿ ಸಾಂಸ್ಕೃತಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಗಮನ ಸೆಳೆಯಬೇಕು.ಪ್ರವಾಸಿ ತಾಣಗಳ ಬಗ್ಗೆ ಹೆಮ್ಮೆ ಇರಬೇಕು. ಪರಿಸರ ನಾಶ ಮಾಡಿ ಪ್ರವಾಸೋದ್ಯಮ ಅಭಿವೃದ್ಧಿ ಗೊಳಿಸುವುದು ಸಲ್ಲದು. ಪರಿಸರ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ಪ್ರಗತಿಯಾಗಬೇಕು ಎಂದು  ಅವರು ಅಭಿಪ್ರಾಯಪಟ್ಟರು.ನಗರಸಭೆ ಅಧ್ಯಕ್ಷೆ ಭಾಗ್ಯಮ್ಮ ಅಧ್ಯಕ್ಷತೆ ವಹಿಸಿದ್ದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ವಿ. ಫಣೀಶ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.