ಮಂಗಳವಾರ, ಮೇ 11, 2021
21 °C
ಜಿಲ್ಲೆಯಲ್ಲಿ ಮುಂದುವರಿದ ಮಳೆ: ಪ್ರವಾಹ ಸಾಧ್ಯತೆ

ಪ್ರವಾಹ: ಮುನ್ನೆಚ್ಚರಿಕೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಪ್ರವಾಹ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಪ್ರಭು ಸೂಚಿಸಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೆ ಎರಡು ಜಾನುವಾರು ಮತ್ತು 23 ಮನೆಗಳು ಹಾನಿಯಾಗಿದ್ದು, ಸುಮಾರು ರೂ 6.20 ಲಕ್ಷ ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಮುಂದಿನ 3 ತಿಂಗಳ ಅವಧಿಯಲ್ಲಿ ನಿರಂತರ ಹಾಗೂ ಅಧಿಕ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ ವ್ಯಾಪ್ತಿಯಲ್ಲಿ ಬರುವ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದಾಗ ಕೂಡಲೇ ತೆರವುಗೊಳಿಸಲು ತಾಲ್ಲೂಕು ಮಟ್ಟದಲ್ಲಿ ಈ ಹಿಂದಿನಂತೆ ಸಮಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಸಮಿತಿ ಅಧ್ಯಕ್ಷರಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ಕಾರ್ಯನಿರ್ವಹಿಸುವರು.ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತ್ಲ್ಲಾಲೂಕುಗಳಲ್ಲಿ ಆಯಾ ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಅಧ್ಯಕ್ಷರು) ಹಾಗೂ ಇತರೆ ಇಲಾಖಾಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ.ಮುಖ್ಯಮಂತ್ರಿಗೆ ಮಾಹಿತಿ ರವಾನೆ

ಪ್ರತಿ ದಿನ ಬೆಳಿಗ್ಗೆ 9 ಗಂಟೆಯೊಳಗೆ ದೈನಂದಿನ ಮಳೆ ವರದಿಯನ್ನು ಮುಖ್ಯಮಂತ್ರಿ ಅವರಿಗೆ ದೂರವಾಣಿ ಮೂಲಕ ನೀಡಬೇಕಾಗಿರುವುದರಿಂದ ಬೆಳಿಗ್ಗೆ 8.30ರೊಳಗೆ ಮಳೆ ವಿವರವನ್ನು ಅಧಿಕಾರಿಗಳು ಜಿಲ್ಲಾ ಕಂಟ್ರೋಲ್ ರೂಂಗೆ ನೀಡುವಂತೆ ಅವರು ಸೂಚಿಸಿದರು.ಪ್ರವಾಹದಂತಹ ತುರ್ತು ಪರಿಸ್ಥಿತಿಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎಲ್ಲ ಇಲಾಖೆಯ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಮಳೆಗಾಲ ಹೆಚ್ಚಿರುವ ಸಮಯದಲ್ಲಿ ಎಲ್ಲ ಇಲಾಖಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣಾ ಕಾರ್ಯದಲ್ಲಿ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ವಿಪರೀತ ಮಳೆ ಬೀಳುವ ಸಂದರ್ಭದಲ್ಲಿ ರಜೆ ಹಾಕದೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜಾ ದಿನಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಯನ್ನು ನಿಯೋಜಿಸಬೇಕೆಂದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ದಿನದ 24 ಗಂಟೆಯಲ್ಲೂ ಕಾರ್ಯನಿರ್ವಹಿಸುವ ಸಹಾಯವಾಣಿ ತೆರೆಯಲಾಗಿದೆ. ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಅತಿವೃಷ್ಟಿಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣಿ ಸಂಖ್ಯೆ: 08272-221077ಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.