ಭಾನುವಾರ, ಮೇ 9, 2021
26 °C

ಬಗರ್‌ಹುಕುಂ ಸಮಿತಿ ಶೀಘ್ರ ರಚನೆ : ಕಾಗೋಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: `ಬಗರ್‌ಹುಕುಂ ಸಮಿತಿಗಳನ್ನು ಶೀಘ್ರದಲ್ಲೇ ರಚಿಸುವ ಮೂಲಕ ವಿಲೇವಾರಿಯಾಗದೆ ಉಳಿದಿರುವ ಬಗರ್‌ಹುಕುಂ ಅರ್ಜಿಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗುವುದು' ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.ತಾಲ್ಲೂಕಿನ ಭೀಮನಕೋಣೆ ಗ್ರಾಮದಲ್ಲಿ ಸೋಮವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರಿಂದ ಕುಂದು ಕೊರತೆಗಳ ಕುರಿತು ಮನವಿ ಸ್ವೀಕರಿಸಿ ಮಾತನಾಡಿದ ಅವರು, ನೂತನ ಬಗರ್‌ಹುಕುಂ ಸಮಿತಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವಂತೆ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.  ಗ್ರಾಮೀಣ ಪ್ರದೇಶವೂ ಸೇರಿದಂತೆ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಜಿಲ್ಲೆಯನ್ನು ಕಾಡುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ರಾಜ್ಯ ಸರ್ಕಾರ ಕೆ.ಜಿಗೆ 1ರೂಪಾಯಿ ನಂತೆ ಅಕ್ಕಿ ನೀಡಲು ತೀರ್ಮಾನಿಸಿದ್ದು ಬಿ.ಪಿ.ಎಲ್ ಪಡಿತರ ಚೀಟಿಯನ್ನು ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ವಿತರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಈಗಾಗಲೆ ಸೂಚನೆ ನೀಡಲಾಗಿದೆ. ಆಯಾ ಭಾಗದ ಪಂಚಾಯಿತಿ ಪ್ರತಿನಿಧಿಗಳು ಅರ್ಹ ಫಲಾನುಭವಿಗಳನ್ನು ಗುರುತಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.ಗ್ರಾಮೀಣ ಭಾಗದ ಬಡವರಿಗೆ ಸೂರು ಕಲ್ಪಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಮನೆ ನಿರ್ಮಾಣ ಮಾಡಲು ರೂ 1.25ಲಕ್ಷ  ನೆರವು ನೀಡಲಿದೆ. ಈ ಪೈಕಿ ರೂ 25ಸಾವಿರ ರೂ.ಗಳನ್ನು ಫಲಾನುಭವಿಗಳು ಮರು ಪಾವತಿ ಮಾಡಬೇಕು. ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಇಂತಹ ಯೋಜನೆಗಳ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡಬೇಕು. ಜನರಿಗೆ ಸವಲತ್ತು ತಲುಪಿಸುವಲ್ಲಿ ವಿಳಂಬ ಧೋರಣೆ ತಾಳಿದರೆ ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ, ಉಪಾಧ್ಯಕ್ಷೆ ಗೌರಮ್ಮ, ಸದಸ್ಯೆ ಶ್ಯಾಮಲಾ  ದೇವರಾಜ್, ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಪದ್ಮಾವತಿ ಚಂದ್ರಕುಮಾರ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ನಾಗರಾಜ್, ದೇವಕಮ್ಮ ಹಾಜರಿದ್ದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.