ಬತ್ತ ಖರೀದಿ ಕೇಂದ್ರ ಸ್ಥಾಪನೆಗೆ ಅಧ್ಯಕ್ಷೆ ಸೂಚನೆ

7
ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬತ್ತ ಖರೀದಿ ಕೇಂದ್ರ ಸ್ಥಾಪನೆಗೆ ಅಧ್ಯಕ್ಷೆ ಸೂಚನೆ

Published:
Updated:

ಶಿವಮೊಗ್ಗ: ಜಿಲ್ಲೆಯಲ್ಲಿ ಬತ್ತ ಬೆಳೆದ ರೈತರು ಈಗಾಗಲೇ ಬತ್ತ ಕಟಾವು ಮಾಡುತ್ತಿದ್ದು, ರೈತರು ತಮ್ಮ ಉತ್ಪನ್ನಗಳನ್ನು ವರ್ತಕರಿಗೆ ಮಾರಾಟ ಮಾಡುವ ಮೊದಲು ಸಕಾಲದಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ಜಂಟಿ ಕೃಷಿ ನಿರ್ದೇಶಕ ಡಾ.ಶಿವಮೂರ್ತಪ್ಪ ಅವರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ ದಿಂದ ತೀವ್ರತರಹದ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗಬಹುದಾದ ಸಂಭವ ಇರುವುದರಿಂದ ಈಗಾಗಲೇ ಅನುಮೋದನೆಗೊಂಡು ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾಗಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿರುವ ಪ್ರದೇಶಕ್ಕೆ ಭೇಟಿ ನೀಡಿ, ಪ್ರಗತಿ ವೀಕ್ಷಿಸಿ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು.ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ  ಹೇಮಾಪಾವನಿ ಶ್ರೀನಿವಾಸ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸರಿಯಾಗಿ ತಲುಪುತ್ತಿಲ್ಲ. ಆದ್ದರಿಂದ ಈ ಯೋಜನೆಗಳ ಸೂಕ್ತ ಹಾಗೂ ಸಮರ್ಪಕ ಮಾಹಿತಿಯನ್ನು ಸ್ತ್ರೀಶಕ್ತಿ ಗುಂಪುಗಳ ಮಹಿಳೆಯರ ಮುಖಾಂತರ ತಲುಪಿಸಲು ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಲಕ್ಷ್ಮೀಕಾಂತಮ್ಮ ಅವರಿಗೆ ಸೂಚಿಸಿದರು.ಜಿಲ್ಲಾ ಪಂಚಾಯ್ತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ಮಾತನಾಡಿ, ಮಲ್ಲಿಗೇನಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ವಸತಿ ನಿಲಯಗಳಲ್ಲಿರುವ ವಸತಿ ಪ್ರದೇಶಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಿನ ಕಳೆಯುತ್ತಿದ್ದಾರೆ. ಇದರಿಂದಾಗಿ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ವಸತಿ ನಿಲಯವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ, ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅವರು ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ವೀರಣ್ಣ ಅವರಿಗೆ ಸೂಚಿಸಿದರು.ತೀರ್ಥಹಳ್ಳಿ ತಾಲ್ಲೂಕಿನ ಆಯ್ದ ಫಲಾನುಭವಿಗಳಿಗೆ ಗಂಗಾಕಲ್ಯಾಣ ಯೋಜನೆಯಡಿ ಕಳೆದ 4-5ವರ್ಷಗಳ ಹಿಂದೆ ಕೊರೆಸಿಕೊಡಲಾದ ಕೊಳವೆ ಬಾವಿಗಳಿಗೆ ಈವರೆಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ವಿದ್ಯುತ್ ಸೌಲಭ್ಯ ಕಲ್ಪಿಸಿಕೊಡಲಾಗಿಲ್ಲ. ಇದರಿಂದಾಗಿ ಪುಸ್ತಕಗಳಲ್ಲಿ ಮಾತ್ರ ಪ್ರಗತಿಯಾಗಿದ್ದು, ವಾಸ್ತವದಲ್ಲಿ ಫಲಾನುಭವಿ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಿದ್ದಾನೆ.ಅಧಿಕಾರಿಗಳು ಯಾವುದೇ ಸಬೂಬು ಹೇಳದೇ ಸಂಬಂಧಿಸಿದ ಅಧಿಕಾರಿಗಳು ತಮ್ಮ ನಡುವೆ ಹೊಂದಾಣಿಕೆ ಮಾಡಿಕೊಂಡು ವಿದ್ಯುತ್ ಸೌಲಭ್ಯ ಕಲ್ಪಿಕೊಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ 325 ಮತ್ತು ಪರಿಶಿಷ್ಟ ವರ್ಗದ 113 ಸೇರಿದಂತೆ ಒಟ್ಟು 438 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಿರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು.ಜಿಲ್ಲಾ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ದಾನೇರ ಮಾತನಾಡಿ, ಬಳ್ಳಿಗಾವಿ ಗ್ರಾಮದ ಬಸವಣ್ಣನ ಕೆರೆ ಕಾಮಗಾರಿ ಆರಂಭಗೊಂಡು ವರ್ಷಗಳಾಗುತ್ತಾ ಬಂದಿದ್ದರೂ ಈವರೆಗೆ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಾಯಿತ್ರಿ ಷಣ್ಮುಖಪ್ಪ, ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಗೋಪಾಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry