ಬರವಣಿಗೆಯೆನ್ನುವುದು ಸ್ವಾತಂತ್ರ್ಯದ ಪ್ರಶ್ನೆ

7

ಬರವಣಿಗೆಯೆನ್ನುವುದು ಸ್ವಾತಂತ್ರ್ಯದ ಪ್ರಶ್ನೆ

Published:
Updated:

ಪ್ರಜ್ಞೆಯ ವಿಶ್ಲೇಷಣೆ ಹಾಗೂ ಇಂದ್ರಿಯಗೋಚರ ವಿಷಯಗಳಿಂದ ತನ್ನ ಅಸ್ತಿತ್ವವಾದಿ ಪ್ರತಿಪಾದನೆಯನ್ನು ಸಾರ್ತ್ರೆ ಆರಂಭಿಸುತ್ತಾನೆ. ಯಾವುದಾದರೊಂದು ಅಸ್ತಿತ್ವದ ಪ್ರಶ್ನೆಯು ಪ್ರಜ್ಞೆಯೇ ಆಗಿರುತ್ತದೆ ಹಾಗೂ ಆ ಸ್ಥಿತಿಯಲ್ಲೇ ಸ್ವೋಪಜ್ಞವಾಗಿರುತ್ತದೆ ಎನ್ನುವ ಸಾರ್ತ್ರೆ ಅಸ್ತಿತ್ವವಾದವನ್ನು ಅತ್ಯಂತ ಭರವಸೆಯ ಸಿದ್ಧಾಂತವೆಂದು ಹೇಳುತ್ತಾನೆ. ಬರಹದಲ್ಲಿ ನಾವು ನಮ್ಮ ಪ್ರಜ್ಞೆಯಲ್ಲಿ ಬಂದಿರುವ  ಸಂಗತಿಗಳನ್ನು ವಿಸ್ತರಿಸುತ್ತೇವೆ. ಬರಹವು ಈ ಅರ್ಥದಲ್ಲಿ ನಮಗೆ ಮುಖ್ಯವಾದ ಸಂವಹನ ಮಾಧ್ಯಮ.

ಬರವಣಿಗೆ ಕೆಲವರಿಗೆ ವಿಮಾನಯಾನವಿದ್ದ ಹಾಗೆ. ಕೆಲವರಿಗೆ ಬರವಣಿಗೆ ಎಂದರೆ ಘೋರ. ಪ್ರತಿಯೊಬ್ಬರಿಗೂ ಬರೆಯಲು ಅವರದೇ ಕಾರಣಗಳಿರುತ್ತವೆ. ಆದರೆ ಆ ಕಾರಣಗಳು ಬೇರೆ ಬೇರೆ ಇರುತ್ತವೆ. ಬರವಣಿಗೆ ಎಂದರೆ ಅವರಿಗೆ ಒಂದು ರೀತಿಯಿಂದ ಯುದ್ಧವೂ ಹೌದು. ಆದರೆ ನಾವು ಅನೇಕರು(ಲೇಖಕರು) ನಿಜವಾದ ಯುದ್ಧವನ್ನು ಮಾಡಲಾರದೆ ಬರವಣಿಗೆ ಯುದ್ಧದಲ್ಲಿ ತೊಡಗಿರುತ್ತೇವೆ. ಇದು ನಮ್ಮ ನಿಜ. (ರಿಯಾಲಿಟಿ) ಬರಹವು ಈ ಅರ್ಥದಲ್ಲಿಯೇ ನಮಗೆ ಒಂದು ರೀತಿಯ ಆಯುಧ. ಬರಹದ ಪರಿಕರಕ್ಕೆ ಪ್ರತಿರೋಧದ ಗುಣವಿದೆ.

ಸಮಾಜ ಮತ್ತು ಮನುಷ್ಯನಿಗೆ ಇರುವ ಸಂಬಂಧ ಏಕಮುಖವಾದುದಲ್ಲ. ಅದು ಅನೇಕ ರೀತಿಯ ಸಂಬಂಧವನ್ನು ಇಟ್ಟುಕೊಂಡಿರುತ್ತದೆ. ಸಮಾಜ ಮತ್ತು ಮನುಷ್ಯನ ನಡುವೆ ಸಂಬಂಧವನ್ನು ಸಾರ್ತ್ರೆ ಬಹುವಿಧದ ಸಂಬಂಧವೆಂದು ಕರೆಯುತ್ತಾನೆ. ಇದು ಮುಖ್ಯ. ನಾವು ಬರಹದ ಮೂಲಕವೇ ಸಂಬಂಧವನ್ನು ಸ್ಥಾಪಿಸಿಕೊಳ್ಳುತ್ತಿದ್ದೇವೆ.

ನಮ್ಮ ಆಧುನಿಕ ಜಗತ್ತಿನಲ್ಲಿ ಬಹುವಿಧದ ಹೊಸ ಮಾದರಿ ಚಟುವಟಿಕೆಯಿಂದಾಗಿ ನಾವು ಜಗತ್ತನ್ನು ಹೊಸರೀತಿಯಿಂದ ನೋಡುತ್ತಿದ್ದೇವೆ. ಮತ್ತು ವಾಸ್ತವವಾಗಿ ಈ ಜಗತ್ತಿನ ಎಲ್ಲಾ ರೀತಿಯ ಆಗುಹೋಗುಗಳಿಗೆ ನಾವು ನಿರ್ದೇಶಕರಲ್ಲ. ಈ ಜಗತ್ತಿನ ನಿರ್ದೇಶಕರು ನಾವಾಗಿದ್ದರೆ ಜಗತ್ತಿನ ಸಕಲವನ್ನೂ ಸೃಷ್ಟಿ ಮಾಡಬಹುದಿತ್ತು. ನಾವು ಜಗತ್ತಿನ ಅನೇಕವನ್ನು ಸೃಷ್ಟಿ ಮಾಡಲಾಗಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಈ ಸಂದರ್ಭದಲ್ಲಿ ಸಾರ್ತ್ರೆ ಇದಕ್ಕೊಂದು ಸಣ್ಣ ಉದಾಹರಣೆ ಕೊಡುತ್ತಾನೆ. ಭೂಮಿಯ ಮೇಲ್ಮೈಯನ್ನು ಬೆಳಕು ಆವರಿಸಿಕೊಂಡಿದ್ದರೆ ಅದರಾಚೆಗಿನ ಆಳದಲ್ಲಿ ಕತ್ತಲೆ ಇರುತ್ತದೆ ಎಂಬುದನ್ನು ಮರೆಯಬಾರದು.

ಹೀಗಾಗಿ ನಾವು ಸೃಷ್ಟಿ ಮಾಡುವ ಸೃಜನಶೀಲವಾದ ಯಾವುದೇ ಸಂಗತಿಗಳು ಕೂಡಾ ಹೊರಗಿನ ಜಗತ್ತಿನ ಜೊತೆಗೆ ನಾವು ಇಟ್ಟುಕೊಂಡಿರುವ ಸಂಬಂಧದ ಸೂಚನೆಯಾಗಿದೆ. ಕಲೆಯ ಉದ್ದೇಶ ಅಂತಿಮವಾಗಿ ಜಗತ್ತಿನೊಂದಿಗೆ ಅದು ಯಾವ ರೀತಿಯ ಸಂಬಂಧವನ್ನು ಇಟ್ಟುಕೊಳ್ಳುತ್ತದೆ ಎಂಬುದೇ ಹೊರತು ಮತ್ತೇನೂ ಅಲ್ಲ. ನಾವು ಒಂದು ಸಂಬಂಧದ ಬಗೆಗೆ ಅಥವಾ ಯಾವುದಾದರೊಂದು ಘಟನೆಯ ಬಗೆಗೆ ಬರೆಯುತ್ತಿದ್ದೇವೆ ಎಂದರೆ ನಾವು ಅದರ ಬಗ್ಗೆ ಯಾವ ರೀತಿಯ ಸಂಬಂಧ ಇಟ್ಟುಕೊಂಡಿದ್ದೇವೆ ಎಂಬುದನ್ನೂ ಸೂಚಿಸುತ್ತದೆ.ಸೃಜನಶೀಲ ಚಟುವಟಿಕೆಯು ಸಾಂದರ್ಭಿಕ ಸಂಬಂಧದ ಸೂಚನೆಯೇ ಹೊರತು ಮತ್ತೇನೂ ಅಲ್ಲ. ಯಾವುದೇ ಒಂದು ವಸ್ತು ಅಥವಾ ಘಟನೆಯನ್ನು ಕುರಿತು ನಾವು ಬರೆಯುತ್ತಿದ್ದೇವೆ ಎಂದಾದರೆ ನಾವು ಆ ವಸ್ತುವಿನಿಂದ ಅಷ್ಟರಮಟ್ಟಿಗೆ ತಪ್ಪಿಸಿಕೊಂಡಿದ್ದೇವೆ ಎಂದರ್ಥ. ಮತ್ತು ಬರವಣಿಗೆಯ ಸಂದರ್ಭದಲ್ಲಿ ಆಯಾ ಘಟನೆಯ ಕಾಲದ ಸೂಚನೆಯನ್ನು ಹೊರತುಪಡಿಸಿಕೊಂಡು ನಾವು ಇರುತ್ತೇವೆ.

ಸಾರ್ತ್ರೆ ತನ್ನ ಲೇಖನದಲ್ಲಿ ಪ್ರತಿಯೊಂದು ಕ್ರಿಯಾತ್ಮಕ ಚಟುವಟಿಕೆಯಲ್ಲಿ ಅದರ ಉತ್ಪಾದನೆಯ ಕಾಲದಲ್ಲಿ ಕ್ರಿಯಾತ್ಮಕವಾಗಿ ಭಿನ್ನವಾದುದೆಂದು ವಾದಿಸುತ್ತಾನೆ. ಹೀಗಾಗಿ ಯಾವುದೇ ರೀತಿಯ ಉತ್ಪಾದನೆಗಳನ್ನು ಹೇಗೆ ಸ್ವೀಕರಿಸುತ್ತೇವೆ ಮತ್ತು ಹೇಗೆ ಅದನ್ನು ಉತ್ಪಾದಿಸುತ್ತೇವೆ ಎಂಬುದು ಬಹಳ ಮುಖ್ಯವಾದುದು. ಬರಹಗಾರರು ಬರಹವನ್ನು ಜೋಡಿಸುತ್ತಾರೆ. ಓದುಗರು ಅದನ್ನು ಸ್ವೀಕಾರ ಮಾಡುತ್ತಾರೆ.

ಸಾಹಿತ್ಯದಲ್ಲಿ ಸೃಜನಶೀಲತೆ ಎನ್ನುವುದು ಮನಸ್ಸಿನ ಅಥವಾ ಹೃದಯದ ಒತ್ತಡದಿಂದ ಬರುವಂಥದಲ್ಲ. ನಮ್ಮ ಹೃದಯದ ಆಳದಿಂದ ಸೃಜನಶೀಲ ಪರಿಕಲ್ಪನೆ ಒಡಮೂಡಲು ಸಾಧ್ಯ. ಆದರೆ ಒಬ್ಬ ಸೃಜನಶೀಲ ಲೇಖಕ ತನ್ನ ಸಾಹಿತ್ಯ ಕೃತಿಯಲ್ಲಿ ಏನನ್ನು ಧಿಕ್ಕರಿಸುತ್ತಾನೋ ಅದು ಆ ಸಾಹಿತ್ಯಕೃತಿಯೂ ಆಗಿರುತ್ತದೆ. ಆದರೆ ಸಾಹಿತ್ಯ ಕೃತಿ ವಸ್ತುವೆನ್ನುವುದು ಬೇರೆ ಬೇರೆ ರೀತಿಯ ಭಾವನೆಗಳ ದ್ಯೋತಕವಾಗಿದೆ.

ವಸ್ತುವನ್ನೇ ಸಾಹಿತ್ಯಕೃತಿಯಲ್ಲಿ ಪ್ರಧಾನವೆಂದು ಪರಿಗಣಿಸಿದಾಗ ಅದರ ವಿಷಯನಿಷ್ಠ ಬರವಣಿಗೆಯು ಅನಗತ್ಯವಾಗುತ್ತದೆ. ವಾಸ್ತವವಾಗಿ ವಿಭಿನ್ನ ರೀತಿಯ ಚಳುವಳಿಗಳು ಸಾಹಿತ್ಯದ ವಸ್ತುವನ್ನು ಒಂದು ಚಳುವಳಿಯ ಕಾರಣಕ್ಕಾಗಿಯೇ ಪರಿಗಣಿಸುತ್ತವೆ. ಸಾರ್ತ್ರೆಯ ಪ್ರಕಾರ, ಸಾಹಿತ್ಯದ ವಸ್ತು ಮತ್ತು ವಿಷಯ ಇವೆರಡೂ ಬೇರೆಬೇರೆಯಾಗಿ ಒಂದು ಸಾಹಿತ್ಯ ಅಥವಾ ಕಲಾಕೃತಿಯ ವಸ್ತುವನ್ನು ಚಳವಳಿಯಲ್ಲಿ ಪ್ರವಹಿಸುವ ರೀತಿ ಬೇರೆ.

ಸಾರ್ತ್ರೆ ಹೇಳುವಂತೆ ಬರವಣಿಗೆ ಎನ್ನುವುದು ಒಂದು ಖಾಲಿಹಾಳೆಯ ಮೇಲಿನ ಕಪ್ಪು ಚಿಹ್ನೆ ಮಾತ್ರ. ಅದರಿಂದಾಚೆಗೆ ಹೆಚ್ಚಿನ ಅರ್ಥವೂ ಅದಕ್ಕಿಲ್ಲ. ಇಲ್ಲಿ ಸಾರ್ತ್ರೆ ಈ ವಾದವನ್ನು ಮಂಡಿಸುವಾಗ ಕುತೂಹಲಕಾರಿಯಾದ ಬೇರೆ ಉದಾಹರಣೆಗಳನ್ನು ಕೊಟ್ಟಿರುವುದು ಗಮನಾರ್ಹವಾಗಿದೆ.

ಷೂ ಮಾಡುವವನು ಅವನ ಕಾಲಿನ ಅಳತೆಗೆ ಸರಿಯಾಗಿ ಷೂ ಮಾಡಬಲ್ಲ. ಮತ್ತು ಅದನ್ನು ಧರಿಸಬಲ್ಲ. ವಾಸ್ತುಶಿಲ್ಪಿಯೊಬ್ಬನು ಅವನೇ ಕಟ್ಟಿದ ಮನೆಯಲ್ಲಿ ವಾಸಮಾಡಬಲ್ಲ. ಆದರೆ ಬರವಣಿಗೆಯಲ್ಲಿ ಇದು ಸಾಧ್ಯವಿಲ್ಲ. ಬರವಣಿಗೆ ಎನ್ನುವುದು ಓದುಗನನ್ನು ಉದ್ದೇಶಿಸಿಕೊಂಡಿದೆ. ವಾಸ್ತುಶಿಲ್ಪಿಯಂತೆ ಲೇಖಕ ತನ್ನ ಬರವಣಿಗೆಯಲ್ಲಿ ತಾನೇ ಸಂರಕ್ಷಣೆ ಪಡೆದುಕೊಳ್ಳಲಾರ. ಅಂದರೆ ಓದು ಎನ್ನುವುದು ಒಂದು ರೀತಿಯಿಂದ ಕಾಯುವಿಕೆ.

ಈ ಕಾಯುವಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಹೋಗುತ್ತಿದೆ. ಒಂದು ಸಾಲು ಓದಿದಂತೆ ಮತ್ತೊಂದು ಸಾಲಿಗೆ ಕಾಯುತ್ತೇವೆ. ಈ ರೀತಿಯ ಕಾಯುವಿಕೆಯಿಂದಲೇ  ಓದು ಪರಿಪೂರ್ಣವಾಗುವುದು ಮತ್ತು ಈ ತರಹ ಕಾಯದೆ ಓದಿನಲ್ಲಿ ಭವಿಷ್ಯವಿಲ್ಲದೆ ಬರಿಯ ಮುಗ್ಧತೆಯಿಂದ ಮಾತ್ರವೇ ಸಾಹಿತ್ಯದ  ಕೃತಿಯೊಂದರ ವಸ್ತುನಿಷ್ಠತೆಯನ್ನು ಗ್ರಹಿಸುತ್ತೇವೆ ಎನ್ನುವುದು ಸುಳ್ಳು.

ಲೇಖಕ ತನ್ನ ಬರವಣಿಗೆಯನ್ನು ತನ್ನ ಹಿಡಿತದಲ್ಲಿರಿಸಿಕೊಳ್ಳಬಲ್ಲ. ಬರವಣಿಗೆ ಎನ್ನುವುದು ಲೇಖಕನ ಸೃಷ್ಟಿ. ಬಿಳಿಯ ಖಾಲಿ ಹಾಳೆಗಳಲ್ಲಿ ಅವನು ಅಕ್ಷರಗಳನ್ನು ತುಂಬಿಸುತ್ತಾನೆ. ತನಗೆ ದೊರೆತ ಜ್ಞಾನ ಅದರ ಮಾದರಿಗಳು ಇತ್ಯಾದಿಗಳನ್ನು ಬರವಣಿಗೆ ಮುಖಾಂತರ ಅನುಸಂಧಾನ ನಡೆಸುತ್ತಾನೆ. ಮತ್ತು ಅನೇಕ ಸಂದರ್ಭದಲ್ಲಿ ಲೇಖಕನೊಬ್ಬ ತನ್ನನ್ನು ತಾನೇ ಸೃಷ್ಟಿಸಿಕೊಳ್ಳುತ್ತಾನೆ.

ಸಾಹಿತ್ಯ ಕೃತಿಯ ಓದುಗರಿಗೆ ಅನೇಕ ಸ್ವಾತಂತ್ರ್ಯಗಳಿರುತ್ತವೆ ಮತ್ತು ಓದುವ ಸ್ವಾತಂತ್ರ್ಯ ಎನ್ನುವುದು ವಿಷಯನಿಷ್ಠವಾದುದು. ಹಾಗೆಯೇ ಸಾಹಿತ್ಯ ಕೃತಿಯ ಓದು ಎನ್ನುವುದು ಒಂದು ಸೀಮಿತವಾದ ನಿರ್ದಿಷ್ಟವಾದ ಚಟುವಟಿಕೆ ಎಂದು ಕರೆಯುವಂತಿಲ್ಲ. ಓದು ಎನ್ನುವುದು ಓದುಗನ ಭಾವನೆಗೆ ಸಂಬಂಧಿಸಿದುದಾಗಿದೆ.

ಓದುಗನ ಸ್ವಾತಂತ್ರ್ಯವನ್ನು ಲೇಖಕ ಪ್ರಶ್ನಿಸುವಂತಿಲ್ಲ. ಹಾಗೂ ಓದುಗನಿಗೆ ನಿರ್ದಿಷ್ಟವಾದ ಸ್ವಾತಂತ್ರ್ಯ ಕೊಡುತ್ತಲೇ ಲೇಖಕ ಬರೆಯುತ್ತಾನೆ. ಅನೇಕ ಸಂದರ್ಭದಲ್ಲಿ ಲೇಖಕನ ಭಾವನೆಗಳೇ ಓದುಗನಿಗೆ ವರ್ಗಾವಣೆಯಾಗುತ್ತವೆ ಮತ್ತು ಲೇಖಕ ಕೊಡುವ ಸ್ವಾತಂತ್ರ್ಯದಲ್ಲಿ ಯಾವುದೇ ರೀತಿಯ ಒತ್ತಡಗಳಿಲ್ಲ. ಕೃತಿ ಮತ್ತು ಓದುಗರ ನಡುವೆ ಸಂಬಂಧ ಈ ದೃಷ್ಟಿಯಿಂದ ಸಹಜ ಎಂದು ಕರೆಯಬಹುದು. ಕೃತಿಕಾರನಿಗೆ ಕೃತಿಯಲ್ಲಿರುವುದು ಅವನ ಸೌಂದರ್ಯಾತ್ಮಕ ಆನಂದ, ಅನುಭವಕ್ಕೆ ಸಂಬಂಧಿಸಿದುದು.

ಓದುಗನಿಗೂ ಇದೇ ರೀತಿಯ ಸೌಂದರ್ಯಾತ್ಮಕ ಅನುಭವನ್ನು ಕೃತಿ ನೀಡುತ್ತದೆ. ಹಾಗೆಂದರೂ ಸಾಹಿತ್ಯ ಕೃತಿಯೊಂದನ್ನು ಓದುವಾಗ ಓದುಗನಿಗೆ ದೊರೆಯುವ ಸ್ವಾತಂತ್ರ್ಯ ಸೀಮಿತವಾದುದು.

ಈ ದೃಷ್ಟಿಯಿಂದ ಬರವಣಿಗೆಯ ಸ್ವಾತಂತ್ರ್ಯ ಎನ್ನುವುದು ಓದಿನ ಸ್ವಾತಂತ್ರ್ಯವೂ ಹೌದು. ನಿರುದ್ದೇಶ್ಶವಾಗಿ ಯಾರೂ ಯಾವುದೇ ಕೃತಿಯನ್ನು ಬರೆಯವುದಿಲ್ಲ ಮತ್ತು ಲೇಖಕರಿಗೆ ಬರವಣಿಗೆಯೆನ್ನುವುದು ಸ್ವಾತಂತ್ರ್ಯದ ಪ್ರಶ್ನೆಯಾಗಿದೆ. ಲೇಖಕರು ಬಯಸುವ ಈ ಸ್ವಾತಂತ್ರ್ಯವನ್ನು ಯಾರೂ ಅಲ್ಲಗಳೆಯಲಾರರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry