ಸೋಮವಾರ, ಮೇ 10, 2021
25 °C

ಬರ: ತಕ್ಷಣ ಉದ್ಯೋಗ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗೂ ಬೇಡಿಕೆ-ಅಗತ್ಯತೆ ಆಧಾರದ ಮೇಲೆ ಗೋಶಾಲೆ ತೆರೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಬರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಮಂಗಳವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥಪ್ರಸಾದ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.ಕಳೆದ ವರ್ಷ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳದೆಯೇ ಕೂಲಿಹಣ ಪಾವತಿಸುವಂತೆ ಬಿಲ್ ಸಲ್ಲಿಸಲಾಗಿದೆ. ಇವುಗಳ ಬಗ್ಗೆ ತನಿಖೆ ನಡೆದಿದ್ದು, ಸದ್ಯ ಬಿಲ್ ಪಾವತಿಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಈಗ ಜಿಲ್ಲೆಯಲ್ಲಿ ಬರ ಬಿದ್ದಿದ್ದು, ಕೂಲಿಕಾರ್ಮಿಕರು ಕೆಲಸವಿಲ್ಲದೇ ಕಂಗಾಲಾಗಿದ್ದಾರೆ. ಹೀಗಾಗಿ ಉದ್ಯೋಗ ಕೇಳಿ ಬರುವ ಕೂಲಿಕಾರ್ಮಿಕರಿಗೆ ತಕ್ಷಣ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕುಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಗೋಶಾಲೆ ತೆರೆಯುವಂತೆ ರೈತರು ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ, ಬೇಡಿಕೆ ಮತ್ತು ಅಗತ್ಯತೆ ಕುರಿತಂತೆ ಸಮೀಕ್ಷೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಪ್ರತಿ ಹೋಬಳಿಗೆ ಎರಡರಂತೆ ಗೋಶಾಲೆಯನ್ನು ತೆರೆಯಲಾಗಿದೆ ಎಂದರು.ಗೋಶಾಲೆಗೆ ಜಾನುವಾರುಗಳನ್ನು ಕರೆದುಕೊಂಡು ಬರುವವರಿಗೆ ಕೂಲಿ ಹಣ ನೀಡಬೇಕು ಎಂಬ ಬೇಡಿಕೆಯೂ ಕೇಳಿ ಬಂದಿದೆ. ಈ ರೀತಿ ಕೂಲಿ ಹಣ ನೀಡಲು ಅವಕಾಶವಿಲ್ಲ. ಆದರೆ, ಗೋಶಾಲೆ ಹತ್ತಿರವೇ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಲಾಗುವುದು ಎಂದು ಹೇಳಿದರು.ಜಿಲ್ಲೆಯಲ್ಲಿ ಮೇವಿನ ಕೊರತೆ ಇಲ್ಲ. ಆದರೆ, ರೈತರ ಬೇಡಿಕೆಯಂತೆ ಜೋಳದ ಹುಲ್ಲು ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದೂ ತಿಳಿಸಿದರು.ಡಿಸೆಂಬರ್‌ನಲ್ಲಿಯೇ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಹಳ್ಳಿಗಳ ಸಮೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ 461 ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವುದು ಕಂಡು ಬಂದಿದೆ. ಹೀಗಾಗಿ ಈ ಗ್ರಾಮಗಳಲ್ಲಿ ಯಾವ ರೀತಿ ತೊಂದರೆ ಇದೆ ಎಂಬುದನ್ನು ಸಹ ಪತ್ತೆ ಹಚ್ಚಿ, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಾ ಬರಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿಲ್ಲ ಎಂದರು.ಚಿಕ್ಕ ಸಮಸ್ಯೆಗಳಿದ್ದರೆ ಆದ್ಯತೆ ಮೇಲೆ ಪರಿಹರಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸದಾಗಿ ಕೊಳವೆಬಾವಿಗಳನ್ನು ಕೊರೆಸಿಲ್ಲ. ಆದರೆ, ಜಲ ಮೂಲಗಳನ್ನು ಪುನಶ್ಚೇತನಗೊಳಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.ಪುನಶ್ಚೇತನಗೊಳಿಸಿದರೆ ನಂತರವೂ ನೀರು ಬರದಿದ್ದ ಸಂದರ್ಭದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲು ನಿರ್ಧರಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ ಎಂದರು.ಮಳೆ ಅಭಾವದಿಂದಾಗಿ ಜಿಲ್ಲೆಯಲ್ಲಿ ಒಟ್ಟು 3 ಕೋಟಿ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಬರ ಪರಿಹಾರ ಕಾಮಗಾರಿ ಕೈಗೊಳ್ಳುವ ಸಲುವಾಗಿ ಬಿಡುಗಡೆಯಾಗಿದ್ದ 7 ಕೋಟಿ ರೂಪಾಯಿಗಳ ಪೈಕಿ 3.5 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಸುದ್ದಿಗೋಷ್ಠಿಯಲ್ಲಿದ್ದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.