ಬುಧವಾರ, ಅಕ್ಟೋಬರ್ 16, 2019
22 °C

ಬರ: ನೀರು, ಮೇವು ಒದಗಿಸಲು ಸೂಚನೆ

Published:
Updated:

ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಾನುವಾರುಗಳಿಗಾಗಿ ಮೇವು ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಸಹಿಸುವುದಿಲ್ಲ ಎಂದು ಶಾಸಕ ಜಿ.ಹಂಪಯ್ಯ ನಾಯಕ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸೋಮವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ 2011-12ನೇ ಸಾಲಿನ ಬರಪರಿಹಾರ ಯೋಜನೆ ಅಡಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ನಡೆದ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅನೇಕ ಹಳ್ಳಿಗಳಲ್ಲಿ ಪೈಪ್‌ಲೈನ್ ವ್ಯವಸ್ಥೆ ಇಲ್ಲದೆ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಿದೆ. ಕೆಲವೆ ಜಾರಿಯಾದ ಕುಡಿಯುವ ನೀರಿನ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಿದೆ. ಅಧಿಕಾರಿಗಳು ಅನುದಾನದ ಕೊರತೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಹೇಳಿ ಕಾಮಗಾರಿಗಳನ್ನು ಅಪೂರ್ಣಗೊಳಿಸಬಾರದು. ಈ ಕಾಮಗಾರಿಗಳು ಅಪೂರ್ಣಗೊಂಡರೆ ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜನತೆ  ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಜಾನುವಾರಗಳಿಗಾಗಿ ಮೇವು ಸಂಗ್ರಹಕ್ಕೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದರು.ತಾಲ್ಲೂಕಿನ ಪ್ರತಿ ಹೋಬಳಿ ಕೇಂದ್ರಗಳಲ್ಲಿ ಮೇವು ಸಂಗ್ರಹ ಕೇಂದ್ರಗಳನ್ನು ತೆರೆಯಲಾಗುವುದು. ಪ್ರಸ್ತುತ 89 ಲಕ್ಷ ರೂಪಾಯಿ ವೆಚ್ಚದಲ್ಲಿ ಬರ ಪರಿಹಾರ ಯೋಜನೆ ಅಡಿಯಲ್ಲಿ ಕಾಮಗಾರಿಗಳ ಅಂದಾಜು ಪತ್ರಿಕೆ ಸಿದ್ಧಪಡಿಸಿ ಅನುಮೋದನೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪಂಪನಗೌಡ ನೀರಮಾನ್ವಿ, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ ನಾಯಕ, ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅನಿಲ್‌ರಾಜ್, ಲೋಕೋಪಯೋಗಿ ಇಲಾಖೆ  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ, ಸಹಾಯಕ ಕೃಷಿ ನಿರ್ದೇಶಕ ಜಯಪ್ರಕಾಶ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ಮತ್ತಿತರ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿದ್ದರು.

 

Post Comments (+)