ಭಾನುವಾರ, ಜೂನ್ 13, 2021
23 °C

ಬಾಬೂಜಿ, ಅಂಬೇಡ್ಕರ್ ಜಯಂತಿ: ಅದ್ದೂರಿ ಆಚರಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲಾಡಳಿತದಿಂದ ಏ. 5ರಂದು ಹಸಿರುಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಹಾಗೂ ಏ. 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.ಜಿಲ್ಲಾಧಿಕಾರಿ ಕೆ.ಆರ್. ಸುಂದರ್ ಮಾತನಾಡಿ, ಏ. 5ರಂದು ಬಾಬು ಜಗಜೀವನರಾಂ ಅವರ 105ನೇ ಜನ್ಮ ದಿನಾಚರಣೆ ಸಮಾರಂಭವನ್ನು ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅದ್ದೂರಿಯಾಗಿ ಏರ್ಪಡಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ನಡೆಸಬೇಕು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿಮಂದಿರದ ಆವರಣದಿಂದ ಅಲಂಕೃತ ವಾಹನದಲ್ಲಿ ಬಾಬೂಜಿ ಅವರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.ಏ. 14ರಂದು ಅಂಬೇಡ್ಕರ್ ಜಯಂತಿ ಆಚರಣೆ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲು ಪೂರ್ವಸಿದ್ಧತೆ ಕೈಗೊಳ್ಳಬೇಕು. ಅಧಿಕಾರಿಗಳು ಈ ಮಹಾನ್ ನಾಯಕರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಉತ್ತಮ ಜಾನಪದ ಕಲಾತಂಡಗಳನ್ನು ಆಯ್ಕೆ ಮಾಡಬೇಕು ಎಂದರು.ಅಂಬೇಡ್ಕರ್ ಭಾವಚಿತ್ರವನ್ನು ಆನೆಯ ಮೇಲೆ ಇರಿಸಿ ಮೆರವಣಿಗೆ ಮಾಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ಮುಖಂಡರು ಜಿಲ್ಲಾಧಿಕಾರಿ ಮುಂದೆ ಪ್ರಸ್ತಾವ ಮುಂದಿಟ್ಟರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಮೆರವಣಿಗೆಯಲ್ಲಿ ಆನೆ ಬಳಸುವ ಬಗ್ಗೆ ಅವಕಾಶವಿದೆಯೇ? ಎಂಬ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ಮಾತನಾಡಿ, ಜಯಂತಿಯಂದು ಉಪನ್ಯಾಸ ನೀಡಲು ಜಿಲ್ಲೆಯಲ್ಲೂ ಉತ್ತಮ ವ್ಯಕ್ತಿಗಳಿದ್ದಾರೆ. ಹೊರಜಿಲ್ಲೆಗಳಿಂದ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸುವುದಕ್ಕಿಂತ ಸ್ಥಳೀಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.ಅಂಬೇಡ್ಕರ್ ಪ್ರತಿಮೆ

ಸಭೆಯಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ವಿಚಾರವೂ ಪ್ರಸ್ತಾಪವಾಯಿತು. ಜಿಲ್ಲಾಡಳಿತ ಭವನದ ಮುಂಭಾಗ ಸ್ಥಾಪಿಸಲಾಗುವ ಅಂಬೇಡ್ಕರ್ ಪ್ರತಿಮೆ ಉತ್ತಮವಾಗಿ ಮೂಡಿಬರಬೇಕು ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.ಮೈಸೂರು, ಬೆಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗಳು ಚೆನ್ನಾಗಿ ಮೂಡಿಬಂದಿವೆ. ಈ ಜಿಲ್ಲೆಗಳಿಗೆ ಸಮಿತಿಯೊಂದು ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಲಾಯಿತು.`ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಆದರೆ, ಭವನ ನಿರ್ಮಾಣ ಪ್ರಕ್ರಿಯೆ ಆರಂಭವಾಗಿಲ್ಲ. ಶೀಘ್ರವೇ, ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಬೇಕು~ ಎಂದು ಬಾಬು ಜಗಜೀವನರಾಂ ವೇದಿಕೆಯ ಮುಖಂಡರಾದ ಶಿವಮೂರ್ತಿ, ಚಾ.ಗು. ನಾಗರಾಜ್ ಕೋರಿದರು.ಜಿಲ್ಲಾಧಿಕಾರಿ ಮಾತನಾಡಿ, ಭವನ ನಿರ್ಮಾಣ ಸಂಬಂಧ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.ಸಭೆಯಲ್ಲಿ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಬಿ.ಪಿ. ಪುಟ್ಟಬುದ್ಧಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರಪ್ರಸಾದ್, ಜಿ.ಪಂ. ಪ್ರಭಾರ ಸಿಇಒ ಎ.ಪಿ. ಶಂಕರರಾಜ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎಸ್. ಪ್ರತಿಭಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.