ಬಾಲ್ಯವಿವಾಹ ಪಿಡುಗು ಇನ್ನೂ ಜೀವಂತ

ಚಾಮರಾಜನಗರ: ‘ಉಪ್ಪಾರ ಸಮುದಾಯದಲ್ಲಿ ಅನಿಷ್ಟ ಬಾಲ್ಯವಿವಾಹ ಪದ್ಧತಿ ಇಂದಿಗೂ ಜೀವಂತವಾಗಿದೆ. ಇದರ ಮೂಲೋತ್ಪಾಟನೆಗೆ ಜನಾಂಗದ ಗಡಿಮನೆ ಮತ್ತು ಕಟ್ಟೆಮನೆ ಯಜಮಾನರು ಮುಂದಾಗಬೇಕಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ನಗರದ ಹಳೆಯ ಬಸ್ನಿಲ್ದಾಣದ ಬಳಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿ ಕೊಂಡಿದ್ದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ನನ್ನ ಸ್ವಂತ ಊರಿನಲ್ಲಿಯೇ ಅಧಿಕಾರಿಗಳ ಕಣ್ಣುತಪ್ಪಿಸಿ ನಾಲ್ಕು ಬಾಲ್ಯ ವಿವಾಹ ನಡೆದಿವೆ. ಈ ಪದ್ಧತಿ ನಿರ್ಮೂ ಲನೆಯಾದರೆ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಗಡಿಮನೆ ಮತ್ತು ಕಟ್ಟೆಮನೆ ಯಜಮಾನರ ಪಾತ್ರ ಹೆಚ್ಚಿದೆ’ ಎಂದರು.
ಡಿ. ದೇವರಾಜ ಅರಸು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಸಮುದಾಯದ ಅಭಿವೃದ್ಧಿಗೆ ₹ 10 ಕೋಟಿ ಅನುದಾನ ನೀಡಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ‘ಉಪ್ಪಾರ ಸಮುದಾಯವು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆ ಜಾರಿಗೊಳಿಸಿದೆ. ಜತೆಗೆ, ಶೈಕ್ಷಣಿಕ ಅಭಿವೃದ್ಧಿಗೆ ಅನುದಾನ ಕೂಡ ಕಲ್ಪಿಸಿದೆ. ಇದರ ಸದ್ಬಳಕೆ ಮಾಡಿಕೊಂಡರೆ ಅಭಿವೃದ್ಧಿಪಥದಲ್ಲಿ ಸಾಗಬಹುದು ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಪ್ರೊ.ನೀಲಗಿರಿ ತಳವಾರ್ ಮಾತನಾಡಿ, ‘ರಾಜ್ಯದಲ್ಲಿ 35 ಲಕ್ಷಕ್ಕೂ ಹೆಚ್ಚು ಉಪ್ಪಾರ ಸಮುದಾಯವಿದೆ. ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದು ಳಿದಿದೆ. ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳ ಬೇಕಿದೆ’ ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿ ಮಂದಿರದ ಮುಂಭಾಗ ಆರಂಭವಾದ ಭಗೀರಥ ಮಹರ್ಷಿಯ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಚಾಲನೆ ನೀಡಿದರು. ಡೊಳ್ಳುಕುಣಿತ, ವೀರಗಾಸೆ, ಕಂಸಾಳೆ, ಹುಲಿ ವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು. ವಿವಿಧ ಗ್ರಾಮಗಳಿಂದ ನೂರಾರು ಯುವಕರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಉಪಾಧ್ಯಕ್ಷ ಪಿ.ಎನ್. ದಯಾನಿಧಿ, ನಗರಸಭೆ ಅಧ್ಯಕ್ಷೆ ಎಸ್.ಎನ್. ರೇಣುಕಾ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಸ್. ಬಸವರಾಜು, ಸ್ಥಾಯಿಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸದಸ್ಯರಾದ ಶಶಿಕಲಾ, ಯೋಗೀಶ್, ತಾ.ಪಂ. ಸದಸ್ಯರಾದ ಪುಟ್ಟ ಸ್ವಾಮಿ, ನಾಗಸುಂದ್ರಮ್ಮ, ಬಾಲಚಂದ್ರ ಮೂರ್ತಿ, ಶಿವಕುಮಾರ್, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ಕುಮಾರ್ ಆರ್. ಜೈನ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ, ಮುಖಂಡರಾದ ಜಯಕುಮಾರ್, ನೂರೊಂದು ಶೆಟ್ಟಿ, ಬಂಗಾರು ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.