ಶುಕ್ರವಾರ, ಜೂನ್ 18, 2021
21 °C

ಬಿಎಸ್‌ವೈ ವಿರುದ್ಧ ಎಫ್‌ಐಆರ್ ರದ್ದು: ಸುಪ್ರೀಂಗೆ ಮೊರೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಿಂದಾಲ್ ಸಮೂಹದ ಸೌತ್‌ವೆಸ್ಟ್ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ಆರಂಭಿಸಿದ್ದಾರೆ.

ಮೇಲ್ಮನವಿ ಸಲ್ಲಿಕೆಗೆ ಅನುಮತಿ ಪಡೆಯುವ ಸಂಬಂಧ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎನ್.ಸತ್ಯನಾರಾಯಣ ರಾವ್ ಅವರು ಸಂಸ್ಥೆಯ ಕಾನೂನು ವಿಭಾಗದ ಮುಖ್ಯಸ್ಥರಿಗೆ ಪ್ರಸ್ತಾವ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿರುವ ತೀರ್ಪು ಪ್ರಶ್ನಾರ್ಹವಾದುದು ಮತ್ತು ಮೇಲ್ಮನವಿ ಸಲ್ಲಿಸಲು ಯೋಗ್ಯ ಪ್ರಕರಣ ಎಂಬುದಾಗಿ ಲೋಕಾಯುಕ್ತ ವಿಶೇಷ ವಕೀಲ ಬಿ.ಎ.ಬೆಳ್ಳಿಯಪ್ಪ ನೀಡಿರುವ ಕಾನೂನು ಅಭಿಪ್ರಾಯವನ್ನು ಸಹ ಪ್ರಸ್ತಾವದ ಜೊತೆ ಸಲ್ಲಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ವಿಭಾಗದ ಮುಖ್ಯಸ್ಥರಾಗಿರುವ ಎಡಿಜಿಪಿ ಸಲ್ಲಿಸಿರುವ ಪ್ರಸ್ತಾವವನ್ನು ಪರಿಶೀಲಿಸಿ ಕಾನೂನು ವಿಭಾಗದ ಮುಖ್ಯಸ್ಥರು ಅದನ್ನು ಪರಿಶೀಲಿಸಿ ಕಾನೂನು ಇಲಾಖೆಗೆ ಕಳುಹಿಸುತ್ತಾರೆ. ಕಾನೂನು ಇಲಾಖೆಯ ಒಪ್ಪಿಗೆ ದೊರೆತ ಬಳಿಕವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ.

`ವಾದ ಪರಿಗಣಿಸಿಲ್ಲ~: `ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ಬಗ್ಗೆ ಲೋಕಾಯುಕ್ತ ಪೊಲೀಸರ ಪರ ಆಕ್ಷೇಪಣೆ ಸಲ್ಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ನ್ಯಾಯಾಲಯಕ್ಕೆ ಒದಗಿಸಲಾಗಿತ್ತು. ಆದರೆ, ಲೋಕಾಯುಕ್ತ ಪೊಲೀಸರ ವಾದ ಮತ್ತು ದಾಖಲೆಗಳನ್ನು ಪರಿಗಣಿಸದೇ ವಿಭಾಗೀಯ ಪೀಠವು ತೀರ್ಪು ನೀಡಿದೆ~ ಎಂದು ಬೆಳ್ಳಿಯಪ್ಪ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಸಹಜ ನ್ಯಾಯ ಉಲ್ಲಂಘನೆ ಆಧಾರದ ಮೇಲೆ ಅರ್ಜಿದಾರರ ಮನವಿಯನ್ನು ಪುರಸ್ಕರಿಸಲಾಗಿದೆ. ಆದರೆ, ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕಲಂ 7(2-ಎ) ಮತ್ತು ಕಲಂ 9ರ ನಡುವೆ ಯಾವುದೇ ಸಂಬಂಧವಿಲ್ಲ. ಯಾವುದೇ ವ್ಯಕ್ತಿ ಸಲ್ಲಿಸುವ ದೂರನ್ನು ಆಧರಿಸಿ ಕಲಂ 9ರ ಅಡಿಯಲ್ಲಿ ತನಿಖೆ ನಡೆಯುತ್ತದೆ.

ಸರ್ಕಾರದ ಆದೇಶದ ಮೇರೆಗೆ ಕಲಂ 7(2-ಎ) ಅಡಿಯಲ್ಲಿ ಪ್ರಾಥಮಿಕ ಹಂತದ ತನಿಖೆ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಆರೋಪಿತರಿಗೆ ನೋಟಿಸ್ ನೀಡಿ, ಉತ್ತರ ಪಡೆಯುವುದು ಕಡ್ಡಾಯವಲ್ಲ. ಡಾ.ಕೆ.ಚೌಡಪ್ಪ ಮತ್ತು ಕರ್ನಾಟಕ ಸರ್ಕಾರ ಹಾಗೂ ಇತರರ ಪ್ರಕರಣದಲ್ಲಿ ಇದೇ ಹೈಕೋರ್ಟ್ ನೀಡಿರುವ ತೀರ್ಪನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿಲ್ಲ. ಆದ್ದರಿಂದ ಇದು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸೂಕ್ತವಾದ ಪ್ರಕರಣ~ ಎಂಬ ಅಭಿಪ್ರಾಯವೂ ಪತ್ರದಲ್ಲಿದೆ ಎಂದು ಗೊತ್ತಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.