ಮಂಗಳವಾರ, ಮೇ 24, 2022
21 °C

ಬಿಎಸ್‌ವೈ ವಿರುದ್ಧ 3ನೇ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಕೀಲ ಸಿರಾಜಿನ್ ಬಾಷಾ ಸಲ್ಲಿಸಿದ್ದ ಮೊದಲನೇ ಖಾಸಗಿ ದೂರಿನಲ್ಲಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಸೋಮವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಇದರೊಂದಿಗೆ ಅವರ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ಸಂಖ್ಯೆ ಮೂರಕ್ಕೇರಿದೆ.ಈ ಪ್ರಕರಣದಲ್ಲಿ ಯಡಿಯೂರಪ್ಪ, ಅವರ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್.ಎನ್.ಸೋಹನ್‌ಕುಮಾರ್, ಮಾಲೂರು ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಮತ್ತು ಯಡಿಯೂರಪ್ಪ ಅವರ ಪುತ್ರರು, ಅಳಿಯನ ಒಡೆತನದ ಧವಳಗಿರಿ ಪ್ರಾಪರ್ಟೀಸ್ ಅಂಡ್ ಡೆವಲಪರ್ಸ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಜನವರಿ 24ರಂದು ಸಿರಾಜಿನ್ ಅವರು `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಕಲಂ 202ರ ಅಡಿಯಲ್ಲಿ ದೂರನ್ನು ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿದ್ದ ನ್ಯಾಯಾಧೀಶರು, ದೂರಿನಲ್ಲಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದರು.ನ್ಯಾಯಾಲಯದ ಆದೇಶದಂತೆ ಬೆಂಗಳೂರು ನಗರ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯ ಕಾನೂನುಬಾಹಿರ ಡಿನೋಟಿಫಿಕೇಷನ್ ಆರೋಪವುಳ್ಳ ಮೂರು ಪ್ರಕರಣಗಳು ಈ ದೂರಿನಲ್ಲಿವೆ. ವಿಚಾರಣೆ ಅಂತಿಮ ಹಂತ ತಲುಪಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಸಿದ್ಧತೆ ನಡೆಸಿರುವ ಲೋಕಾಯುಕ್ತ ಪೊಲೀಸರು, ಪೂರಕವಾಗಿ ಎಫ್‌ಐಆರ್ ದಾಖಲಿಸಿದ್ದಾರೆ. ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಯಲಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.