ಬುಧವಾರ, ಜೂನ್ 16, 2021
26 °C

ಬಿಎಸ್‌ವೈ ಸೇರಿ ಐವರ ವಿರುದ್ಧ ವಾರೆಂಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಕೀಲ ಸಿರಾಜಿನ್ ಬಾಷಾ ಸಲ್ಲಿಸಿದ್ದ ಎರಡು ಮತ್ತು ಮೂರನೇ ಖಾಸಗಿ ದೂರುಗಳ ವಿಚಾರಣೆಗೆ ನಿರಂತರವಾಗಿ ಗೈರು ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ, ಅಳಿಯ ಆರ್. ಎನ್.ಸೋಹನ್‌ಕುಮಾರ್ ಮತ್ತು ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಹೊರಡಿಸಿದೆ.ಯಡಿಯೂರಪ್ಪ ಸೇರಿದಂತೆ ಐವರು ಆರೋಪಿಗಳೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಸೋಮವಾರ ವಿಚಾರಣೆಗೆ ಹಾಜರಾಗಬೇಕಿತ್ತು. ವಕೀಲರ ಬಹಿಷ್ಕಾರದ ನಡುವೆಯೇ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಕಲಾಪ ನಡೆಸಿದರು. ಆದರೆ ಐವರು ಆರೋಪಿಗಳೂ ಹಾಜರಾಗಿರಲಿಲ್ಲ.ಮೊದಲ ಐವರು ಆರೋಪಿಗಳು ವಿಚಾರಣೆಗೆ ಮೂರನೇ ಬಾರಿ ಗೈರು ಹಾಜರಾಗಿದ್ದರು. ನ್ಯಾಯಾಲಯಕ್ಕೆ ಹಾಜರಾಗದೇ ಇರುವ ಬಗ್ಗೆ ವಕೀಲರ ಮೂಲಕ ಸೂಕ್ತ ಅರ್ಜಿಯನ್ನೂ ಸಲ್ಲಿಸಿರಲಿಲ್ಲ. ಆರೋಪಿಗಳ ವರ್ತನೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ಎಲ್ಲ ಆರೋಪಿಗಳ ವಿರುದ್ಧವೂ ಜಾಮೀನುರಹಿತ ವಾರೆಂಟ್ ಹೊರಡಿಸುವಂತೆ ಆದೇಶಿಸಿದರು. ಎರಡೂ ಪ್ರಕರಣಗಳ ವಿಚಾರಣೆಯನ್ನು ನ್ಯಾಯಾಲಯ ಇದೇ 24ಕ್ಕೆ ಮುಂದೂಡಿದೆ.ವಿಚಾರಣೆ ಮುಂದೂಡಿಕೆ: ದಾಸರಹಳ್ಳಿ ಶಾಸಕ ಎಸ್.ಮುನಿರಾಜು ವಿರುದ್ಧ ಯಶವಂತಪುರ ಹೋಬಳಿ ಕೆರೆಗುಡ್ಡದಹಳ್ಳಿ ನಿವಾಸಿ ಪುಟ್ಟಸ್ವಾಮಿ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ನ್ಯಾಯಾಲಯ ಇದೇ 9ಕ್ಕೆ ಮುಂದೂಡಿದೆ. ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆ ಮುಂದೂಡಿದೆ.ಇದೇ ಪ್ರಕರಣದಲ್ಲಿ ಶುಕ್ರವಾರ ಬಂಧಿತರಾಗಿದ್ದ ರಾಮನಗರದ ಚುನಾವಣಾ ತಹಶೀಲ್ದಾರ್ ರಂಗನಾಥಯ್ಯ ಮತ್ತು ಯಶವಂತಪುರ ಹೋಬಳಿ ಕಂದಾಯ ನಿರೀಕ್ಷಕ ಸುರೇಶ್ ಅವರಿಗೆ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.