ಶನಿವಾರ, ಮೇ 15, 2021
23 °C

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ದಿನಬಳಕೆ ವಸ್ತುಗಳು, ಬಸ್ ಪ್ರಯಾಣ ದರ ಸೇರಿದಂತೆ ಇಂಧನ ಬೆಲೆ ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹಾಕಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಜಿಲ್ಲಾ ಬಿಜೆಪಿ ಘಟಕ ಗುರುವಾರ ನಗರದಲ್ಲಿ ರಸ್ತೆತಡೆ ಮೂಲಕ ಪ್ರತಿಭಟನೆ ನಡೆಸಿತು.ನಗರದ ಪುರಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿರುವ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡ ಬಿಜೆಪಿ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ನಂತರ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿ ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆತಡೆ ನಡೆಸಿದರು.ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಡಾ.ಮಲ್ಲೇಶಪ್ಪ ಹರಿಜನ ಮಾತನಾಡಿ, ಕೇಂದ್ರ ಇಂಧನ ಬೆಲೆಗಳನ್ನು ಹೆಚ್ಚಿಸಿದರೂ ಕೂಡಾ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿತ್ತು. ಈಗ ಅಧಿಕಾರಕ್ಕೆ ಬಂದ ತಕ್ಷಣವೇ ರಾತ್ರೋ ರಾತ್ರಿ ಬಸ್ ದರ ಏರಿಕೆ ಮಾಡಿ ಜನರ ಮೇಲೆ ಹೊರೆ ಹೇರಿದೆ ಎಂದು ಆರೋಪಿಸಿದರು.ಇನ್ನೂ ಅಗತ್ಯ ವಸ್ತುಗಳ ಬೆಲೆ ಏರಿಕೆ, ಎಪಿಎಲ್ ಕಾರ್ಡದಾರರಿಗೆ ಪಡಿತರವನ್ನು ರದ್ದುಪಡಿಸಲು ಮುಂದಾಗುವ ಮೂಲಕ ಮಾರುಕಟ್ಟೆಯಲ್ಲಿ ಪರೋಕ್ಷವಾಗಿ ಅಕ್ಕಿಯ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರದ ಆರ್ಥಿಕ ನೀತಿ ಸಂಪೂರ್ಣ ಹದಗೆಟ್ಟಿದ್ದು, ಈ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಗಗನಕ್ಕೆ ಹೋಗಿದೆ. ಇದು ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ಇಂದನಗಳ ಮೇಲೆ ರಾಜ್ಯ ಸರ್ಕಾರ ವಿಧಿಸುವ ಸುಂಕವನ್ನು ತೆಗೆದು ಹಾಕುವಂತೆ ಒತ್ತಾಯಿಸಿದ್ದ ಕಾಂಗ್ರೆಸ್, ಈಗ ತಾನಿ ಅಧಿಕಾರದಲ್ಲಿದೆ. ಆ ಸುಂಕವನ್ನು ಏಕೆ ತೆಗೆದು ಹಾಕಬಾರದು ಎಂದು ಪ್ರಶ್ನಿಸಿದರು.ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿದ್ದರಾಜ ಕಲಕೋಟಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಜಾರಿಯಾದ ಬಡ ಮಕ್ಕಳಿಗೆ ಸೈಕಲ್ ವಿತರಣೆ, ಎಪಿಎಲ್‌ಗೆ ಪಡಿತರ ವಿತರಣೆ, ಮಠ ಮಾನ್ಯಗಳಿಗೆ ಮಂಜೂರ ಮಾಡಿರುವ ಅನುದಾನವನ್ನು ರದ್ದುಪಡಿಸಲು ಮುಂದಾಗಿರುವ ಕ್ರಮ ಖಂಡನೀಯ ಎಂದರು. ಇದೇ ಸಂದರ್ಭದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ. ಬಸ್ ಪ್ರಯಾಣ ದರ ಇಳಿಕೆ ಮಾಡುವುದು, ಎಪಿಎಲ್ ಪಡಿತರ ಚೀಟಿಗೂ ಆಹಾರಧಾನ್ಯ ಮುಂದುವರಿಸುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ್ ಶಿವಲಿಂಗ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಶಹರ ಘಟಕದ ಅಧ್ಯಕ್ಷ ಶಿವಲಿಂಗಪ್ಪ ಕಲ್ಯಾಣಿ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸಾತೇನಹಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭು ಹಿಟ್ನಳ್ಳಿ, ಓಬಿಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಪ್ರದೀಪ ಮುಳ್ಳೂರ, ಪಿಎಲ್‌ಡಿ ಬ್ಯಾಂಕ ನಿರ್ದೇಶಕ ಮಲ್ಲಣ್ಣ ಸಾತೇನಹಳ್ಳಿ, ನಗರಸಭೆ ಸದಸ್ಯರಾದ ನಿರಂಜನ ಹೆರೂರ, ಗುಡ್ಡನಗೌಡ ಅಂದಾನಿಗೌಡ್ರ, ಕರಬಸಪ್ಪ ಹಳದೂರ, ಲಲಿತಾ ಗುಂಡೇನಹಳ್ಳಿ, ಪಕ್ಷದ ಮುಖಂಡರಾದ ಸೋಮಶೇಖರ ತಿಪ್ಪಶೆಟ್ಟಿ, ಈರಣ್ಣ ಹೆರೂರ, ಸಂಜೀವ ಪುತಳೇಕರ, ದಾವಲಸಾಬ್ ಹಿರೆಮುಗದೂರ, ರುದ್ರಮುನಿ ಹಿರೇಮಠ, ಬಾಬು ಏಕಬೊಟೆ, ರಾಜು ಅರ್ಕಾವಾರಿ ಅಲ್ಲದೇ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.