ಶುಕ್ರವಾರ, ಮೇ 20, 2022
23 °C

ಬಿಜೆಪಿ ಸಭೆ: ಸಂಪುಟ ವಿಸ್ತರಣೆ ದೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ವಿಧಾನಮಂಡಲದ ಸದಸ್ಯರಾಗಲು ಪೂರಕವಾಗಿ ವಿಧಾನ ಪರಿಷತ್ ಸದಸ್ಯ ಶಂಕರಪ್ಪ ಅವರಿಂದ ವಾರದೊಳಗೆ ರಾಜೀನಾಮೆ ಪಡೆಯಲು ಭಾನುವಾರ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ನಿರ್ಧರಿಸಿದ್ದು, ವಿಧಾನ ಪರಿಷತ್‌ನ ಆರು ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ.ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಹಲವು ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಆದಷ್ಟು ಬೇಗ ಸದಾನಂದ ಗೌಡ ಅವರಿಗೆ ಮೇಲ್ಮನೆ ಸದಸ್ಯತ್ವ ನೀಡುವ ಉದ್ದೇಶದಿಂದ ಶಂಕರಪ್ಪ ರಾಜೀನಾಮೆ ಪಡೆಯುವುದನ್ನು ಸಭೆಯಲ್ಲಿ ಖಚಿತಪಡಿಸಲಾಗಿದೆ.ವಾರದೊಳಗೆ ರಾಜೀನಾಮೆ ಪಡೆದು, ನಂತರ ಪರಿಷತ್‌ನ ಸದಸ್ಯ ಸ್ಥಾನ ಖಾಲಿ ಇರುವ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ. ಶಂಕರಪ್ಪ ಅವರು ವಿಧಾನಸಭೆಯಿಂದ ಪರಿಷತ್‌ಗೆ ಚುನಾಯಿತರಾಗಿದ್ದು 2014ರ ಜೂನ್‌ವರೆಗೂ ಅವಧಿ ಇದೆ.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ವಿ.ಸತೀಶ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಸಭೆಯಲ್ಲಿ ಪಾಲ್ಗೊಂಡಿದ್ದರು.ಮಧ್ಯಾಹ್ನ ಆರಂಭವಾದ ಸಭೆ ಸಂಜೆಯವರೆಗೂ ನಡೆಯಿತು. ಸಭೆಯ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಸದಾನಂದ ಗೌಡ, `ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸುವ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಣಯ ಕೈಗೊಳ್ಳುತ್ತೇನೆ~ ಎಂದರು.ಅಭ್ಯರ್ಥಿಗಳ ಆಯ್ಕೆ: ವಿಧಾನ ಪರಿಷತ್‌ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕ ಕ್ಷೇತ್ರಗಳಿಗೆ ಜೂನ್ ತಿಂಗಳಲ್ಲಿ ನಡೆಯುವ ಚುನಾವಣೆಯ ತಯಾರಿಗೆ ಇದೇ ಸಭೆಯಲ್ಲಿ ಚಾಲನೆ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದ್ದು, ಒಂದು ವಾರದೊಳಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ, ಅವರಿಗೇ ಟಿಕೆಟ್ ನೀಡುವ ನಿರ್ಧಾರಕ್ಕೆ ಬರಲಾಗಿದೆ.ಪರಿಷತ್‌ನ ಹಾಲಿ ಸದಸ್ಯರಾಗಿರುವ ಮನೋಹರ ಮಸ್ಕಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಬೇಡ ಎಂಬ ಸಂದೇಶವನ್ನೂ ನೀಡಿದ್ದಾರೆ. ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಮತ್ತು ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಅವರಿಗೆ ಮತ್ತೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.ಮನವೊಲಿಕೆಗೆ ನಿರ್ಧಾರ: ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವೊಲಿಸಲು ಸಾಮೂಹಿಕ ಪ್ರಯತ್ನ ನಡೆಸಲು ತೀರ್ಮಾನಿಸಲಾಗಿದೆ. ಒಂದೆರಡು ದಿನಗಳಲ್ಲಿ ಶ್ರೀರಾಮುಲು ಅವರ ಮನವೊಲಿಕೆ ಕಸರತ್ತು ಪೂರ್ಣಗೊಳಿಸಲು ಯೋಚಿಸಲಾಗಿದೆ.ಎಲ್.ಕೆ.ಆಡ್ವಾಣಿ ಅವರು ಹಮ್ಮಿಕೊಂಡಿರುವ ರಥ ಯಾತ್ರೆ ರಾಜ್ಯದಲ್ಲಿ ಹಾದುಹೋಗುವ ಸಂದರ್ಭದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಎಲ್ಲ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯ ಘಟಕದ ಪದಾಧಿಕಾರಿಗಳಿಗೆ ಸೂಚನೆ ನೀಡಲು ತೀರ್ಮಾನಿಸಲಾಗಿದೆ.ಸಂಪುಟ ವಿಸ್ತರಣೆ: ದೀಪಾವಳಿ ಹಬ್ಬ, ಅದರ ನಂತರ ಬರುವ ಅಡ್ವಾಣಿ ರಥಯಾತ್ರೆ- ಇವೆಲ್ಲವೂ ಮುಗಿದ ನಂತರವೇ ಸಂಪುಟ ವಿಸ್ತರಣೆ ಬಗ್ಗೆ ಚಿಂತಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.ಅ. 17ರಂದು ಕಾರ್ಯಾಗಾರ: ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ಜಿಲ್ಲಾ ಪಂಚಾಯಿತಿಗಳು ಮತ್ತು ತಾಲ್ಲೂಕು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ವಿಶೇಷ ಆದ್ಯತೆ ನೀಡುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಈ ಉದ್ದೇಶಕ್ಕಾಗಿಯೇ  ಇದೇ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ.

 

ಈ ಬಗ್ಗೆ ಮಾತನಾಡಿದ ಈಶ್ವರಪ್ಪ, `ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿಗಳ ಅಧ್ಯಕ್ಷರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುತ್ತಾರೆ. ಸಿಎಂ,  ಯಡಿಯೂರಪ್ಪ. ಶೆಟ್ಟರ್ ಎಲ್ಲರಿಗೂ ಮಾರ್ಗದರ್ಶನ ನೀಡುವರು~ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.