ಶುಕ್ರವಾರ, ಮೇ 7, 2021
20 °C
ಅಧಿಕಾರಿಗಳಿಗೆ ಮಣಿ ನಂಜಪ್ಪ ಸೂಚನೆ

ಬಿಸಿಯೂಟ ವ್ಯತ್ಯಯವಾಗದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲೆಯಲ್ಲಿ ಶಾಲೆಗಳು ಈಗಾಗಲೇ ಆರಂಭವಾಗಿದ್ದು, ಎಲ್ಲ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ `ಅಕ್ಷರ ದಾಸೋಹ' ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಣಿ ನಂಜಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಎಲ್ಲ ಶಾಲೆಗಳಿಗೂ ಆಹಾರ ಸಾಮಗ್ರಿಗಳ ಪೂರೈಕೆ ಹಿನ್ನೆಲೆಯಲ್ಲಿ ಅಕ್ಷರ ದಾಸೋಹದಡಿ ಬಿಸಿಯೂಟ ಕಾರ್ಯಕ್ರಮಕ್ಕೆ ಈಗಾಗಲೇ ಟೆಂಡರ್ ಕರೆಯಬೇಕಿತ್ತು. ಆದರೆ ಟೆಂಡರ್ ಆಹ್ವಾನವನ್ನು ವಾಪಸು ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದರು.ಈ ಸಂಬಂಧ ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸುವ ಮುನ್ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರ ಗಮನಕ್ಕೆ ತಂದು ಟೆಂಡರ್ ಆಹ್ವಾನಿಸುವಂತೆ ಸಲಹೆ ನೀಡಿದರು.  ಸ್ಥಾಯಿ ಸಮಿತಿ ಸದಸ್ಯ ಬಾಂಡ್ ಗಣಪತಿ ಮಾತನಾಡಿ, ಜಿಲ್ಲೆಯಲ್ಲಿನ ಹಲವು ಶಾಲೆಗಳ ದಾಖಲೆ ಇಲ್ಲವಾಗಿದೆ. ಅಂತಹ ಶಾಲೆಗಳ ಆರ್.ಟಿ.ಸಿ. ಪಡೆಯಲು ಇಲಾಖಾಧಿಕಾರಿಗಳು ಕ್ರಮವಹಿಸಬೇಕು. ಮುಖ್ಯ ಶಿಕ್ಷಕರ ಕೊಠಡಿ, ಶಾಲಾ ಕೊಠಡಿಗಳ ದುರಸ್ತಿ ಸೇರಿದಂತೆ ಮತ್ತಿತರ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಬಡ ರೋಗಿಗಳಿಗೆ ಉತ್ತಮ ಸೇವೆ ಒದಗಿಸುವುದು. ಕಟ್ಟಡಗಳ ದುರಸ್ತಿ ಮತ್ತಿತರ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.ಸಮಿತಿ ಸದಸ್ಯರಾದ ಬಿ.ಬಿ. ಭಾರತೀಶ್, ಶರೀನ್ ಸುಬ್ಬಯ್ಯ, ಬಿ.ಪಿ. ಧನ್ಯರತಿ, ಚಂದ್ರಿಕಾ ಯೋಗೀಶ್, ಉಪ ಕಾರ್ಯದರ್ಶಿ ಪಿ.ಪುಟ್ಟಸ್ವಾಮಿ ಮತ್ತು ಶಿಕ್ಷಣ, ಆರೋಗ್ಯ, ಯುವಜನ ಸೇವಾ ಮತ್ತಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.