ಶನಿವಾರ, ಏಪ್ರಿಲ್ 17, 2021
23 °C

ಬೆಲೆ ಏರಿಕೆ ಈಡೇರಿಕೆಗೆ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.ಸಂತೆ ಮೈದಾನದ ಸಂಘಟನೆ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮುಖ್ಯರಸ್ತೆಯಲ್ಲಿ ಸಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಹೆಚ್ಚುವರಿ ಜಿಲ್ಲಾಧಿಕಾರಿಗೆ  ಮನವಿ ಸಲ್ಲಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ನೀತಿ ಖಂಡಿಸಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ಕ್ವಿಟ್ ಇಂಡಿಯಾ ಚಳವಳಿ ನಡೆದ ದಿನವೇ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಿಪಿಐ ರಾಜ್ಯ ಮಂಡಳಿ ಸದಸ್ಯ ಬಿ.ಅಮ್ಜದ್ ಹೇಳಿದರು.ಕೂಡಲೇ ಬೆಲೆ ಏರಿಕೆ ತಡೆಗಟ್ಟಬೇಕೆಂದು ಒತ್ತಾಯಿಸಿದರು. ಅರ್ಹ ಬಡವರಿಗೆ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡಬೇಕು. ದಿನೇ ದಿನೇ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಸರ್ಕಾರ ಹೊಸ ಉದ್ಯೋಗಗಳನ್ನು ಸೃಷ್ಟಿಸಿ, ಉದ್ಯೋಗ ನೀಡಬೇಕೆಂದು ಮನವಿ ಮಾಡಿದರು.ಗುತ್ತಿಗೆ ಆಧಾರದ ಮೇಲೆ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಪದ್ಧತಿ ರದ್ದುಪಡಿಸಬೇಕು. ಹಂತ ಹಂತವಾಗಿ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಕಾರ್ಮಿಕರಿಗೆ ಕನಿಷ್ಠ ಕೂಲಿ ತಿಂಗಳಿಗೆ 10 ಸಾವಿರ ರೂಪಾಯಿ ನಿಗದಿಪಡಿಸಿ, ಗೌರವ ಧನಕ್ಕೆ ದುಡಿಯುತ್ತಿರುವರನ್ನು ಕಾಯಂಗೊಳಿಸಬೇಕು.

 

ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಬಾರದು. ವಸತಿ ಮತ್ತು ನಿವೇಶನ ರಹಿತರಿಗೆ ಮನೆ ಮತ್ತು ನಿವೇಶನ ನೀಡಬೇಕು. ಕಾಫಿ  ತೋಟದಲ್ಲಿ ದುಡಿಯುವ ಕಾರ್ಮಿಕರು, ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗ ಪಿಂಚಣಿ ಯೋಜನೆ, ಭವಿಷ್ಯ ನಿಧಿಯಡಿ ತಿಂಗಳಿಗೆ 3 ಸಾವಿರ ನೀಡಬೇಕೆಂದು ಒತ್ತಾಯಿಸಿದರು.ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಪ್ರಧಾನ ಕಾರ್ಯದರ್ಶಿ ಕೆ.ಗುಣಶೇಖರ್, ಎನ್.ಸಿ.ಓಬಯ್ಯ, ರಾಧಾ ಸುಂದರೇಶ್, ರಮೇಶ್, ಜಾರ್ಜ್ ಆಸ್ಟಿನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.