ಬೇಡಿಕೆ ಈಡೇರಿಕೆಗೆ ಹೋರಾಟ ಅನಿವಾರ್ಯ

7

ಬೇಡಿಕೆ ಈಡೇರಿಕೆಗೆ ಹೋರಾಟ ಅನಿವಾರ್ಯ

Published:
Updated:

ದೊಡ್ಡಬಳ್ಳಾಪುರ: ಶಿಕ್ಷಕರು ಮತ್ತು ಉಪನ್ಯಾಸಕರು ತಮ್ಮ   ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಸಬೇಕಾದ ಅನಿವಾರ್ಯ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹನಿಯೂರು ಮಂಜುನಾಥ್ ಅವರು ಹೇಳಿದರು. ನಗರದ ಲಾವಣ್ಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲಾ ಶಿಕ್ಷಕರೂ ಮತ್ತು ಉಪನ್ಯಾಸಕರು ಸಂಘಟಿತ ಹೋರಾಟ ನಡೆಸುವ ಕಾಲ ಸನಿಹಿತವಾಗಿದೆ. ವೇತನ ತಾರತಮ್ಯ ಸೇರಿದಂತೆ ಪಿಯು ಉಪನ್ಯಾಸಕರ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿರುವುದು ವಿಷಾದನೀಯ ಎಂದರು.ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವಿದ್ಯಾರ್ಹತೆಗೆ ತಕ್ಕಂತೆ  ಸಮಾನ ಕೆಲಸಕ್ಕೆ ಸಮಾನ ವೇತನ, ಪ್ರಾಂಶುಪಾಲರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಪಡಿಸಬೇಕು. ಅನುದಾನಿತ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಸಿಬ್ಬಂದಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ಯಥಾವತ್ತಾಗಿ  ಜಾರಿಮಾಡಬೇಕು.  ಕಾಲ್ಪನಿಕ ವೇತನ ಬಡ್ತಿಯ ವಿಚಾರವನ್ನು ಬಗೆಹರಿಸಬೇಕೆಂಬ ಬೇಡಿಕೆಗಳು ಹಲವು ವರ್ಷಗಳಿಂದ ನಡೆಯುತ್ತಿದೆ ಎಂದರು.ಬೆಂಗಳೂರು ವಿಶ್ವವಿದ್ಯಾಲಯ ಸೆನೆಟ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ ಮಾತನಾಡಿ, ಶಿಕ್ಷಕರು ಮತ್ತು ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಸರ್ಕಾರದಿಂದ ಈಡೇರಿಸಿಕೊಳ್ಳುವುದು ಸ್ವಾಭಿಮಾನದ ಪ್ರಶ್ನೆಯಾಗಿದೆ. ಸರ್ಕಾರ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸದಿರುವುದು ಸರಿಯಾದ ಕ್ರಮವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿರುವ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೇತನಕ್ಕಿಂತ ನಮ್ಮ ರಾಜ್ಯದ ಉಪನ್ಯಾಸಕರು ಪಡೆಯುತ್ತಿರುವ  ವೇತನ ಕಡಿಮೆ ಇದೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಂಘಟನೆ ಅನಿವಾರ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ, ಉಪಾಧ್ಯಕ್ಷ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಜಿ.ರಾಮಚಂದ್ರ, ಸಂಘಟನಾ ಕಾರ್ಯದರ್ಶಿ ಶಿವರಾಮೇಗೌಡ, ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ  ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು  ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry