ಮಂಗಳವಾರ, ಜನವರಿ 28, 2020
19 °C

ಬೋಧನೆಯಲ್ಲಿ ಕ್ರಿಯಾಶೀಲತೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗೆ ಹೆಚ್ಚಿನ ಒತ್ತು ಹಾಗೂ ಬೋಧನೆಯಲ್ಲಿ ಕ್ರಿಯಾಶೀಲತೆ ಹೆಚ್ಚುಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ಬೆಂಗಳೂರು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಆರ್.ಎನ್. ಶೆಟ್ಟಿ ತಿಳಿಸಿದರು.ಶಂಕರಘಟ್ಟದ ಕುವೆಂಪು ವಿವಿಯ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಗಳ ಸಿಂಡಿಕೇಟ್ ಸದಸ್ಯರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ತಂತ್ರಜ್ಞಾನ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಅಮೆರಿಕ, ಚೀನಾದ ನಂತರದ ಸ್ಥಾನ ಭಾರತದ್ದಾಗಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಅವರು ಹೇಳಿದರು.ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆಯಾದರೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಆವಶ್ಯವಿರುವ ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯರ ಸಮಾವೇಶ ಆಯೋಜಿಸಿರುವುದು ಸೂಕ್ತವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಉನ್ನತ ಶಿಕ್ಷಣ ಪೂರೈಸಿದವರಿಗೆ ಇಲ್ಲಿಯೇ ಸೂಕ್ತ ಹುದ್ದೆ ಸ್ಥಾನಮಾನ ದೊರೆಯುವಂತಾಗಬೇಕು. ಇದರಿಂದ ಭಾರತದ ಬುದ್ಧಿವಂತಿಕೆ ವಿದೇಶಿಯರ ಪಾಲಾಗುವುದನ್ನು ತಪ್ಪಿಸಬಹುದು ಹಾಗೂ ಉನ್ನತ ಶಿಕ್ಷಣ ಪೂರೈಸಿದವರು ಸಹ ತಾಯ್ನಾಡಲ್ಲೆ ಸೇವೆ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.ಇಂದು ನಮ್ಮ ದೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸೂಕ್ತ ಹಣಕಾಸು ಸಹಾಯವೂ ದೊರೆಯುತ್ತಿದೆ. ಅದಕ್ಕೆ ತಕ್ಕಂತೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಿವೆ. ಸೂಕ್ತ ವ್ಯಕ್ತಿತ್ವ ಹಾಗೂ ಬುದ್ಧಿವಂತಿಕೆಗೆ ಸಮಯೋಚಿತ ಮನ್ನಣೆಯೂ ದೊರೆಯುತ್ತಿದೆ ಎಂದರು.ಸಿಂಡಿಕೇಟ್ ಸದಸ್ಯರು ಹಾಗೂ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಬದಲಾವಣೆಗೆ ಶಿಫಾರಸ್ಸು ಮಾಡಬಹುದು. ಆದರೆ, ಅದನ್ನು ಜಾರಿಗೆ ತರುವ ಅಧಿಕಾರವಿಲ್ಲ. ಈ ಹಿನ್ನೆಲೆಯಲ್ಲಿ ಸೂಕ್ತ ಬದಲಾವಣೆ ಕುರಿತು ಚರ್ಚೆ ನಡೆಸಿ ಸರ್ಕಾರಕ್ಕೆ ಶಿಫಾರಸುಮಾಡಬೇಕು ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುವೆಂಪು ವಿವಿ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿಶ್ವವಿದ್ಯಾನಿಲಯಗಳ ಸಿಂಡಿಕೇಟ್ ಸಮಿತಿಯು ಗುಣಮಟ್ಟದ ನಿರ್ವಾಹಕನಂತೆ ಕಾರ್ಯ ನಿರ್ವಹಿಸಬೇಕಿದೆ ಎಂದರು.ಎರಡು ದಿನಗಳ ಈ ಸಮ್ಮೇಳನದಲ್ಲಿ ಉನ್ನತ ಶಿಕ್ಷಣದ ವಿವಿಧ ಮಜಲುಗಳ ಚಿಂತನ-ಮಂತನ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆಯೂ ಅವರು ನೆರೆದಿದ್ದ ವಿವಿಧ ವಿವಿಗಳ ಸಿಂಡಿಕೇಟ್ ಸದಸ್ಯರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಟಿ.ಆರ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)