ಶುಕ್ರವಾರ, ಜೂಲೈ 10, 2020
26 °C

ಭಾರದ್ವಾಜ್-ಯಡಿಯೂರಪ್ಪ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬೆಳಿಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರೊಂದಿಗೆ ಮುಖಾಮುಖಿ ಮಾತುಕತೆ ನಡೆಸಿದರು. ಸರ್ಕಾರ- ರಾಜಭವನದ ನಡುವಣ ಸಂಘರ್ಷಕ್ಕೆ ಅಂತ್ಯ ಹಾಡುವ ಉದ್ದೇಶದಿಂದ    ಈ ಭೇಟಿ ನಡೆದಿದೆ.ಬೆಳಿಗ್ಗೆ 10 ಗಂಟೆಗೆ ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಜತೆ ರಾಜಭವನಕ್ಕೆ ತೆರಳಿದ ಯಡಿಯೂರಪ್ಪ 50 ನಿಮಿಷಕ್ಕೂ ಹೆಚ್ಚು ಕಾಲ ರಾಜ್ಯಪಾಲರ ಜೊತೆ ಚರ್ಚೆ ನಡೆಸಿದರು. ಇಬ್ಬರೂ ನೇರವಾಗಿ ಮುಖಾಮುಖಿ ಮಾತುಕತೆ ನಡೆಸಿದರು.ಬಳ್ಳಾರಿಯ ಮೂವರು ಸಚಿವರ ಮೇಲಿನ ತೆರಿಗೆ ವಂಚನೆ ಆರೋಪ ಮತ್ತು ಮುಖ್ಯಮಂತ್ರಿ ಕುಟುಂಬದ ವಿರುದ್ಧದ ಭೂಹಗರಣಕ್ಕೆ ಸಂಬಂಧಿಸಿದಂತೆ ವಿವರ ನೀಡುವಂತೆ ಕೆಲ ದಿನಗಳ ಹಿಂದೆ ರಾಜ್ಯಪಾಲರು ಪತ್ರ ಬರೆದಿದ್ದರು. ಬಳಿಕ ಯಡಿಯೂರಪ್ಪ ಮತ್ತು ಭಾರದ್ವಾಜ್ ನಡುವೆ ಸಂಘರ್ಷ ಸೃಷ್ಟಿಯಾಗಿತ್ತು. ಸಂಘರ್ಷ ಶಮನ ಮಾಡುವ ಪ್ರಯತ್ನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ನಾಯಕ ಅರುಣ್ ಜೇಟ್ಲಿ ಗುರುವಾರ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.‘ಸೌಹಾರ್ದ ಭೇಟಿ’: ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ‘ಇದು ಒಂದು ಸೌಹಾರ್ದ ಭೇಟಿ. ಇದಕ್ಕೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲ. ಕೃಷ್ಣಾ ನ್ಯಾಯಮಂಡಳಿಯ ತೀರ್ಪು ಮತ್ತು ರಾಜ್ಯದ ಅಭಿವೃದ್ಧಿ ವಿಷಯಗಳ ಬಗ್ಗೆ ರಾಜ್ಯಪಾಲರ ಜೊತೆ ಚರ್ಚಿಸಿದ್ದೇನೆ’ ಎಂದರು.‘ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ರಾಜ್ಯಪಾಲರಿಂದ ಸಲಹೆ ಪಡೆದಿದ್ದೇನೆ. ಇನ್ನು ಪ್ರತಿ 15 ದಿನಕ್ಕೊಮ್ಮೆ ರಾಜ್ಯಪಾಲರನ್ನು ಭೇಟಿಮಾಡಿ ಚರ್ಚೆ ನಡೆಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಅಧಿವೇಶನಕ್ಕೆ ಆಹ್ವಾನ: ಜನವರಿ 6ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಆಹ್ವಾನವನ್ನೂ ನೀಡಿದ್ದಾರೆ. ಜಂಟಿ ಅಧಿವೇಶನದಲ್ಲಿ ಸರ್ಕಾರವು ಸಿದ್ಧಪಡಿಸುವ ರಾಜ್ಯಪಾಲರ ಭಾಷಣದಲ್ಲಿನ ಪ್ರಮುಖ ಅಂಶಗಳ ಪಟ್ಟಯೊಂದನ್ನೂ ಭಾರದ್ವಾಜ್ ಅವರಿಗೆ ತಲುಪಿಸಿದ್ದಾರೆ.ಮೊದಲು ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕವೇ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಯಡಿಯೂರಪ್ಪ ಈ ಹಿಂದೆ ಪ್ರಕಟಿಸಿದ್ದರು. ಆದರೆ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದಲ್ಲಿ ಬದಲಾವಣೆ ಮಾಡುವಂತೆ ಭಾರದ್ವಾಜ್ ಹಠ ಹಿಡಿಯಬಹುದು ಎಂಬ ವದಂತಿ ಕೆಲ ದಿನಗಳಿಂದ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ ಇಬ್ಬರ ನಡುವಿನ ವೈಮನಸ್ಸಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.