ಸೋಮವಾರ, ಏಪ್ರಿಲ್ 12, 2021
26 °C

ಭೀಕರ ರಸ್ತೆ ಅಪಘಾತ:3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ:  ಪ್ರಯಾಣಿಕರನ್ನು ಸಾಗಿಸುತ್ತಿದ್ದ ಕ್ರೂಸರ್‌ಗೆ ಹಾರುವ ಬೂದಿ ಸಾಗಿಸುವ ಟ್ಯಾಂಕರ್ ಡಿಕ್ಕಿ ಹೊಡೆದು ಮುವರು ಮೃತಪಟ್ಟು, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮುದ್ನಾಳ ತಾಂಡಾದ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ತಾಲ್ಲೂಕಿನ ಶೆಟಗೇರಾದ ಗುರುಕಾಂತ (22) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮಹೀಂದ್ರಾ ಫೈನಾನ್ಸ್‌ನಲ್ಲಿ ಮ್ಯಾನೇಜರ್ ಆಗಿದ್ದ ಗುಲ್ಬರ್ಗದ ಸಂತೋಷ ಕುಲಕರ್ಣಿ (35) ಹಾಗೂ ಶಹಾಪುರ ತಾಲ್ಲೂಕಿನ ಕದರಾಪುರದ ಸಂಗಮ್ಮ (55) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು   ತಿಳಿಸಿದ್ದಾರೆ.ವಾಡಿಯಿಂದ ಯಾದಗಿರಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಕ್ರೂಸರ್ ಇಲ್ಲಿಯ ಮುದ್ನಾಳ ತಾಂಡಾದ ಬಳಿ ಬಂದಾಗ ಯಾರೋ ಕೂಗಿದಂತಾಗಿದೆ. ಅದಕ್ಕಾಗಿ ವಾಹನವನ್ನು ಸ್ವಲ್ಪ ನಿಧಾನವಾಗಿ ಚಲಾಯಿಸಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್‌ನ ಅರ್ಧ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಚಿವ ಭೇಟಿ: ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಕೆಡಿಪಿ ಸಭೆ ಮೊಟಕುಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ನರಸಿಂಹ ನಾಯಕ (ರಾಜುಗೌಡ) ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಗಾಯಗೊಂಡವರ ಜೊತೆಗೆ ಮಾತುಕತೆ ನಡೆಸಿದ ಅವರು, ಘಟನೆಯ ಕುರಿತು ಮಾಹಿತಿ ಪಡೆದರು. ನಂತರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳುಗಳಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

 

ಘಟನೆಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ ಅವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದರು. ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ದೇವರಾಜ ನಾಯಕ, ಸದಸ್ಯ ಬಸವರಾಜ ಖಂಡ್ರೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವಿಂದ್ರನಾಥ ನಾದ್ ಮುಂತಾದವರು ಹಾಜರಿದ್ದರು.

ಸರ್ಕಲ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ, ಗ್ರಾಮೀಣ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಯಶವಂತ ಬಿಸನಳ್ಳಿ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರು. ಲಾರಿ ಚಾಲಕ ಪೊಲೀಸ್ ಠಾಣೆಗೆ ಹಾಜರಾಗಿದ್ದಾನೆ. ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಾರಿಗೆ ಅವ್ಯವಸ್ಥೆ: ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಸಮರ್ಪಕವಾಗಿ ಬಸ್‌ಗಳು ಸಂಚರಿಸದೇ ಇರುವುದರಿಂದ ಬಹುತೇಕ ಜನರು ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ.

ಹಣದ ಆಸೆಗಾಗಿ ಮೀತಿ ಮೀರಿದ ಪ್ರಯಾಣಿಕರನ್ನು ತುಂಬುತ್ತಿದ್ದು, ಟಂಟಂ ಹಾಗೂ ಜೀಪುಗಳಲ್ಲಿ ಜನರು ಜೀವದ ಹಂಗು ತೊರೆದು ಪ್ರಯಾಣಿಸುತ್ತಿದ್ದಾರೆ.ಸಾಕಷ್ಟು ಬಾರಿ ಮಿತಿಗಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದರೂ, ಸಾರಿಗೆ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಜನ ದೂರುತ್ತಿದ್ದಾರೆ. ಕೂಡಲೇ ಸಾರಿಗೆ ಇಲಾಖೆಯ ಅಧಿಕಾರಿಗಳು ಖಾಸಗಿ ವಾಹನಗಳ ಮೇಲೆ ನಿಯಂತ್ರಣ ಹೇರಬೇಕು. ಅಲ್ಲದೇ ವೇಗವಾಗಿ ಸಂಚರಿಸುವ ಟ್ಯಾಂಕರ್‌ಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದುಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.