ಶನಿವಾರ, ಜೂನ್ 12, 2021
28 °C

ಭ್ರೂಣ ಹತ್ಯೆ ತಡೆಗೆ ಸರ್ಕಾರ ಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮಾಜದಲ್ಲಿ ಹೆಚ್ಚು ತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯಲು ಸರ್ಕಾರ ಕಟಿ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಗುರುವಾರ ಇಲ್ಲಿ ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ `ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಇತರೆ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡು ಬಂದಲ್ಲಿ ಮುಂದಿನ ದಿನಗಳಲ್ಲಿ ಸಂಘರ್ಷ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ~ ಎಂದು ಭರವಸೆ ನೀಡಿದರು.`ಮಹಿಳಾ ಸಬಲೀಕರಣ ಪೇಟೆ ಅಥವಾ ಪಟ್ಟಣದಿಂದ ಪ್ರಾರಂಭವಾಗುವಂಥದ್ದಲ್ಲ. ಬದಲಿಗೆ, ಅದು ಗ್ರಾಮೀಣ ಪ್ರದೇಶದಿಂದ ಆರಂಭವಾಗಬೇಕು. ಇತ್ತೀಚಿನ ವರ್ಷಗಳಲ್ಲಿ ಸ್ತ್ರೀ ಶಕ್ತಿ ಸಂಘಟನೆಗಳ ಮೂಲಕ ಮಹಿಳೆಯರು ಸಬಲರಾ ಗುತ್ತಿರುವುದು ಮೆಚ್ಚುಗೆಯ ಸಂಗತಿ. ಮಹಿಳೆಯರು ಸ್ವಾಭಿಮಾನದ ಬದುಕು ಸಾಗಿಸಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ~ ಎಂದು ಹೇಳಿದರು.`ಮಹಿಳೆ ಮಧ್ಯರಾತ್ರಿಯಲ್ಲಿಯೂ ನಿರ್ಭೀತಿಯಿಂದ ಓಡಾಡುವ ವ್ಯವಸ್ಥೆ ಬರಬೇಕು ಎಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು. ಆದರೆ, ಸ್ವಾತಂತ್ರ್ಯ ಬಂದು ಆರು ದಶಕಗಳು ಕಳೆದ ನಂತರವೂ ವ್ಯವಸ್ಥೆ ಆ ಮಟ್ಟಕ್ಕೆ ಸುಧಾರಿಸಲು ಸಾಧ್ಯವಾಗಲಿಲ್ಲ~ ಎಂದು ವಿಷಾದಿಸಿದರು.`ಮಹಿಳೆಯರು ಸಬಲರಾಗುವುದರ ಜತೆಗೆ, ಶೋಷಣೆ ವಿರುದ್ಧ ಸಂಘಟಿತರಾಗಿ ಹೋರಾಟ ನಡೆಸಬೇಕು. ಆಗ ಮಾತ್ರ ಶೋಷಣೆ ನಿಲ್ಲಲು ಸಾಧ್ಯ. ಎಲ್ಲದಕ್ಕೂ ಪುರುಷರನ್ನೇ ನಂಬಿ ಕೂರಬಾರದು~ ಎಂದು ಸಲಹೆ ಮಾಡಿದರು. `ಸ್ವಾತಂತ್ರ್ಯ ಸಂಗ್ರಾಮದ ಕಾಲದಲ್ಲಿ ನೇಣುಗಂಬಕ್ಕೇರಲು ಹೊರಟ ಮಗನನ್ನು ತಾಯಿ ಬೀಳ್ಕೊಟ್ಟು ದೇಶ ಪ್ರೇಮ ಮೆರೆದದ್ದನ್ನು ಯಾರೂ ಮರೆಯುವಂತಿಲ್ಲ. ಅಂತೆಯೇ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಯೋಧರ ಪತ್ನಿಯರ ಔದಾರ್ಯ ಗುಣವನ್ನು ಪುರುಷರಿಂದ ನಿರೀಕ್ಷಿಸಲು ಸಾಧ್ಯವಿಲ್ಲ~ ಎಂದರು.ಇದೇ ಸಂದರ್ಭದಲ್ಲಿ 2010-11ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಆಯ್ಕೆಯಾದ ಆರು ಮಹಿಳಾ ಅಭಿವೃದ್ಧಿ ಸಂಸ್ಥೆಗಳಿಗೆ ತಲಾ ರೂ. 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಅಲ್ಲದೆ, ಮಹಿಳಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಮಂದಿಗೆ ರೂ. 10 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಜತೆಗೆ, ಕಲೆ, ಸಾಹಿತ್ಯ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಂಬತ್ತು ಮಹಿಳೆಯರಿಗೆ ತಲಾ ರೂ. 10 ಸಾವಿರ ನಗದು ಬಹುಮಾನ ನೀಡಲಾಯಿತು.ಮೂರು ಅತ್ಯುತ್ತಮ ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟಗಳಿಗೆ ಕ್ರಮವಾಗಿ 80, 70 ಹಾಗೂ 60 ಸಾವಿರ ರೂಪಾಯಿ ನಗದು, ಮೂರು ಅತ್ಯುತ್ತಮ ಸ್ತ್ರೀಶಕ್ತಿ ಗುಂಪುಗಳಿಗೆ ಕ್ರಮವಾಗಿ 50, 30 ಹಾಗೂ 20 ಸಾವಿರ ರೂಪಾಯಿ ನಗದು ನೀಡಲಾಯಿತು. ಯಶೋದರಮ್ಮ ದಾಸಪ್ಪ ಸ್ಮರಣಾರ್ಥ ಪ್ರಶಸ್ತಿಗೆ ಆಯ್ಕೆಯಾದ ನಾಲ್ಕು ಸ್ತ್ರೀಶಕ್ತಿ ಗುಂಪುಗಳಿಗೆ ತಲಾ ರೂ. 25 ಸಾವಿರ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.ಮುಖ್ಯಮಂತ್ರಿಗಳ ಪತ್ನಿ ಡಾಟಿ ಸದಾನಂದಗೌಡ, ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ, ವಿಧಾನ ಪರಿಷತ್ತಿನ ಉಪ ಸಭಾಪತಿ ವಿಮಲಾಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸೀಮಾ ಮಸೂತಿ, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಸುಶೀಲಮ್ಮ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ವಿನೋದ ನಟರಾಜ್ ಉಪಸ್ಥಿತರ್ದ್ದಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ಝಳಕಿ ಸ್ವಾಗತಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.