ಶುಕ್ರವಾರ, ಜೂನ್ 18, 2021
23 °C

ಮಂಜುಳಾ ವಿರುದ್ಧ ರಾಜ್ಯಪಾಲರಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಾಹಿತಿ ಹಕ್ಕಿನ ಅಡಿ ಪಡೆದ ದಾಖಲೆಗಳನ್ನು ಸುಳ್ಳು ಎಂದು ಆರೋಪಿಸಿ, ಸಂಘಟನೆಯ ಅಧ್ಯಕ್ಷರ ಮೇಲೆ ಪೊಲೀಸರಿಗೆ ದೂರು ನೀಡಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ವಿರುದ್ಧ ಮಾರ್ಚ್ 22ರಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ದೂರು ಸಲ್ಲಿಸಲಾಗುವುದು ಎಂದು ಎನ್‌ಎಸ್‌ಯುಐ ಸಂಘಟನೆ ಮಾಜಿ ಅಧ್ಯಕ್ಷ ಕೆ. ದೇವೇಂದ್ರಪ್ಪ ತಿಳಿಸಿದರು.ಮಂಜುಳಾ ಅವರು ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ. ಅವರು ಸರ್ಕಾರಿ ಕಾರಿನಲ್ಲಿಯೇ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಆದರೆ ಪ್ರಯಾಣ ಭತ್ಯೆ ಎಂದು ಹೇಳಿ ಮತ್ತೆ ವಿಶ್ವವಿದ್ಯಾಲಯದಿಂದ ಹಣ ಪಡೆದಿದ್ದಾರೆ ಎಂದು ಮಾಹಿತಿ ಹಕ್ಕಿನಲ್ಲಿ ದಾಖಲಾತಿ ಪಡೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿತ್ತು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರಯಾಣ ಭತ್ಯೆಯನ್ನೇ ಪಡೆದಿಲ್ಲ. ವಿನಾ ಕಾರಣ ತಮ್ಮ ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ಮಂಜುಳಾ ಎನ್‌ಎಸ್‌ಯುಐ ಅಧ್ಯಕ್ಷ ಮಧುಸೂಧನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮೂಲಕ ಅವರು ತಮ್ಮ ತಪ್ಪನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.ಮಂಜುಳಾ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಮಹಿಳಾ ಆಯೋಗದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.ಶಿವಮೊಗ್ಗ ಲೋಕಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೇಶ್ ಮಾತನಾಡಿ, ವಿಧಾನಸಭೆಯಲ್ಲಿ ಸಚಿವರು ಆಶ್ಲೀಲ ಚಿತ್ರ ವೀಕ್ಷಿಸಿದ ಪ್ರಕರಣದ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.ಅಲ್ಲದೇ, ಉಡುಪಿಯ ಬೀಚ್‌ನಲ್ಲಿ ನಡೆದ ವಿದೇಶಿಯರ ರೇವ್ ಪಾರ್ಟಿಯ ಬಗ್ಗೆಯೂ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇವರು ಮಹಿಳಾ ಹಿತರಕ್ಷಣೆ ಮಾಡುತ್ತಿಲ್ಲ, ಬಿಜೆಪಿ ಹಿತಕಾಯುತ್ತಿದ್ದಾರೆ ಅವರು ಟೀಕಿಸಿದರು.ಸುದ್ದಿಗೋಷ್ಠಿಯಲ್ಲಿ ಎನ್‌ಎಸ್‌ಯುಐ ಅಧ್ಯಕ್ಷ ಮಧುಸೂಧನ್, ನಗರ ಘಟಕದ ಅಧ್ಯಕ್ಷ ಚೇತನ್ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.