ಗುರುವಾರ , ಜೂನ್ 24, 2021
22 °C

ಮಂಡ್ಯ: 17,332 ವಿದ್ಯಾರ್ಥಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಗುರುವಾರದಿಂದ       (ಮಾರ್ಚ್ 15) ಮಾರ್ಚ್ 31ರವರೆಗೂ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟಾರೆ 25 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟಾರೆ 17,332 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ.ಪರೀಕ್ಷಾ ಕೇಂದ್ರಗಳ ಪೈಕಿ ಕೆ.ಆರ್. ಪೇಟೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆರೆಗೋಡುವಿನ ಗ್ರಾಮಾಂತರ ಪದವಿ ಪೂರ್ವ ಕಾಲೇಜು, ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳು ಎಂದು ಇಲಾಖೆಯು ಗುರುತಿಸಿದೆ.ವಿದ್ಯಾರ್ಥಿಗಳ ಪೈಕಿ 13,310 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆಯನ್ನು ಎದುರಿಸುತ್ತಿದ್ದರೆ, 3,285 ವಿದ್ಯಾರ್ಥಿಗಳು ಪುನರಾವರ್ತಿತ ಅಭ್ಯರ್ಥಿಗಳಾಗಿದ್ದರೆ, 737 ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. ಮೊದಲ ದಿನ ಬೆಳಗಿನ ಅವಧಿಯಲ್ಲಿ ಇತಿಹಾಸ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯದ ಪರೀಕ್ಷೆ ನಡೆಯಲಿದೆ.ಸುಗಮ ಪರೀಕ್ಷೆಗಾಗಿ ಜಾಗೃತ ಸಮಿತಿಗಳನ್ನು ರಚಿಸುವುದು, ಪರೀಕ್ಷಾ ಕೇಂದ್ರದ ಸುತ್ತಾ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಆದರೆ, ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರಗಳಲ್ಲಿ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದುದನ್ನು ರದ್ದುಪಡಿಸಲಾಗಿದೆ.ಜಾಗೃತ ಸಮಿತಿಗಳು: ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳಿಗಾಗಿ ಆಯಾ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಡಿಡಿಪಿಐ ನೇತೃತ್ವದಲ್ಲಿ ಜಾಗೃತ ದಳ ಕಾರ್ಯ ನಿರ್ವಹಿಸಲಿದ್ದು, ತಾಲ್ಲೂಕು ಮಟ್ಟದಲ್ಲಿ ಪ್ರಾಂಶುಪಾಲರ ನೇತೃತ್ವದಲ್ಲಿ ನಾಲ್ಕು ಜಾಗೃತದಳ ಕಾರ್ಯ ನಿರ್ವಹಿಸಲಿವೆ. ಅಲ್ಲದೆ, ಸಂಚಾರಿ ಜಾಗೃತ ದಳಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿವೆ.ಜಾತಿ ಅಂಕಣಕ್ಕೆ ಕೋಕ್: ವಿದ್ಯಾರ್ಥಿಗಳಿಗೆ ನೀಡಿರುವ ಪ್ರವೇಶಪತ್ರದಲ್ಲಿ ಇರುವ ಜಾತಿ ಅಂಕಣವನ್ನುಬಿಳಿ ಬಣ್ಣದಿಂದ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ಮೊಬೈಲ್ ಬಳಕೆಯನ್ನು ನಿರ್ಬಂಧಿಸಲಾಗಿದೆ ಎಂದು ಪಿಯು ಇಲಾಖೆಯ ಉಪ ನಿರ್ದೇಶಕರು ವಿವರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.