ಶನಿವಾರ, ಮೇ 21, 2022
25 °C
*ಕಬ್ಬಿಣಾಂಶ ಯುಕ್ತ ಮಾತ್ರೆ ವಿತರಣೆಗೆ ಚಾಲನೆ *ಡಾ. ಸಜ್ಜನ್ ಶೆಟ್ಟಿ ಹೇಳಿಕೆ

ಮಕ್ಕಳ ರಕ್ತಹೀನತೆ ತಪ್ಪಿಸಲು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ದೇಶದಲ್ಲಿ ಶೇ 55 ಮಕ್ಕಳು ರಕ್ತ ಹೀನತೆಯಿಂದ ಬಳಲುತ್ತಿದ್ದು, ಮುಂದಿನ ನಾಗರಿಕರು ಉನ್ನತ ಮಟ್ಟದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಪಡೆಯಲು ಕೇಂದ್ರ ಸರ್ಕಾರ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಯ 6 ರಿಂದ 10 ವರ್ಷದ ಎಲ್ಲ ಮಕ್ಕಳಿಗೆ ಕಬ್ಬಿಣಾಂಶ ವೃದ್ಧಿಸುವ ಫೋಲಿಕ್ ಆ್ಯಸಿಡ್ ಮಾತ್ರೆಗಳನ್ನು ವಿತರಿಸುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವರಾಜ ಸಜ್ಜನಶೆಟ್ಟಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬುಧವಾರ ಆದರ್ಶ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಫೋಲಿಕ್ ಆ್ಯಸಿಡ್ ಮಾತ್ರೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಪ್ರತಿ ಸೋಮವಾರ ಮಧ್ಯಾಹ್ನ ಬಿಸಿಯೂಟ ನೀಡಿದ ಒಂದು ತಾಸಿನ ನಂತರ ಶಿಕ್ಷಕರು ಮಾತ್ರೆ ವಿತರಿಸಬೇಕು. ಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ ಈ ಮಾತ್ರೆಗಳನ್ನು ವಿತರಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಪ್ರತಿ ಸೋಮವಾರ ಅವರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಅಂಗನವಾಡಿಗೆ ಕರೆದು ಅಲ್ಲಿ ಮಾತ್ರೆ ನೀಡುವ ಕಾರ್ಯ ನಿರ್ವಹಿಸಲಿದ್ದಾರೆ.

ಶಾಲೆಗಳಲ್ಲಿ ಈ ಮಾತ್ರೆಗಳನ್ನು ಸರಿಯಾಗಿ ವಿತರಿಸಿ ಅವುಗಳನ್ನು ನೀಡಲು ಪ್ರತಿ ಶಾಲೆಯಲ್ಲಿ ಇಬ್ಬರು ನೋಡಲ್ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಅವರು ಶಾಲೆಯ ಪ್ರತಿ ವಿದ್ಯಾರ್ಥಿಗೆ ಮಾತ್ರೆ ನೀಡಿ ಅದನ್ನು ದಾಖಲು ಮಾಡಬೇಕು. ಹಾಗೂ ವಿದ್ಯಾರ್ಥಿಗಳೆದುರು ಅವರು ಕೂಡ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಈ ಮಾತ್ರೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಇಲ್ಲ. ಆದರೆ ಖಾಲಿ ಹೊಟ್ಟೆಯಲ್ಲಿ ಮಾತ್ರ ಸೇವಿಸಬಾರದು. ಮಧ್ಯಾಹ್ನ ಊಟವಾದ ಒಂದು ತಾಸಿನ ನಂತರವಷ್ಟೆ ಮಾತ್ರೆಯನ್ನು ಸೇವಿಸಬೇಕು ಎಂದು ಅವರು ಹೇಳಿದರು.ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಲ್ಲವಿ ಆಕುರಾತಿ ಅವರು ಮಾತನಾಡಿ, ಶಾಲೆಗಳಲ್ಲಿ ವಿತರಿಸಲಾಗುವ ಈ ಮಾತ್ರೆಗಳ ಉಪಯುಕ್ತತೆ ಬಗ್ಗೆ ಶಿಕ್ಷಕರು ಮಕ್ಕಳಿಗೆ ತಿಳಿಸಿಕೊಡಬೇಕು. ಮಕ್ಕಳೇ ಸ್ವ ಇಚ್ಛೆಯಿಂದ ಮಾತ್ರೆಗಳನ್ನು ತೆಗೆದುಕೊಳ್ಳುವಂತಾಗಬೇಕು. ಆ ವಾತಾವರಣವನ್ನು ಶಿಕ್ಷಕರು ಸೃಷ್ಟಿಸಬೇಕು ಎಂದರು.ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯರಾಂ, ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರಿ ಸಾವಳೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚನ್ನವೀರಪ್ಪ ಸಲಗಾರ್ ಅವರು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ  ಪಾರ್ವತಿಬಾಯಿ ಶಂಕರ ಚವ್ಹಾಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.