ಮಂಗಳವಾರ, ಜುಲೈ 14, 2020
27 °C

ಮಿಶ್ರಾ ಆಯೋಗದ ವರದಿ ಅಂಗೀಕಾರ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಿಶ್ರಾ ಆಯೋಗದ ವರದಿ ಅಂಗೀಕಾರ ಬೇಡ

ಬೆಂಗಳೂರು: ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಆಯೋಗದ ವರದಿ ಅಂಗೀಕರಿಸದಂತೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಹಿತರಕ್ಷಣಾ ವೇದಿಕೆ ಸದಸ್ಯರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು `ಜಸ್ಟೀಸ್ ರಂಗನಾಥ್ ಮಿಶ್ರಾ ಆಯೋಗದ ವರದಿಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಮತ್ತು ಮತಾಂತರವನ್ನು ಪ್ರೋತ್ಸಾಹಿಸುವಂತಿದೆ. ಈ ವರದಿ ಜಾರಿಯಾದರೆ ಹಿಂದುಳಿದ ವರ್ಗಗಳ ಹಾಗೂ ದಲಿತರ ಮೀಸಲಾತಿಗೆ ಕೊಡಲಿ ಪೆಟ್ಟು ಬೀಳಲಿದೆ~ ಎಂದರು.`ಮತಾಂತರಕ್ಕೆ ಪ್ರೇರಣೆ ನೀಡುವಂತಿರುವ ಈ ವರದಿಯನ್ನು ಜಾರಿಗೊಳಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ. ಈ ವರದಿಯ ವಿರುದ್ಧ ಬಿಜೆಪಿಯು ಸಂಸತ್‌ನ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲಿದೆ~ ಎಂದು ಅವರು ಹೇಳಿದರು.`ಮುಸ್ಲಿಂರು ಹಾಗೂ ಕ್ರೈಸ್ತರನ್ನು ಓಲೈಸುವ ಉದ್ದೇಶದಿಂದ ಕಾಂಗ್ರೆಸ್ ಈ ವರದಿಯನ್ನು ಜಾರಿಗೊಳಿಸಲು ಮುಂದಾಗಿದೆ. ದಲಿತರಿಗೆ ಮೀಸಲಾತಿಯ ಆಮಿಷವೊಡ್ಡಿ ಅವರನ್ನು ಮತಾಂತರ ಮಾಡಿಸುವ ಹುನ್ನಾರ ಈ ವರದಿಯ ಹಿಂದಿದೆ. ಮತ ಗಳಿಕೆಯ ಕಾರಣಕ್ಕಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಈ ವರದಿಯನ್ನು ಜಾರಿಗೊಳಿಸಲು ಯತ್ನಿಸುತ್ತಿದೆ~ ಎಂದು ವೇದಿಕೆಯ ರಾಜ್ಯ ಘಟಕದ ಸಂಚಾಲಕ ಪಿ.ಪಿ.ಶ್ರೀನಿವಾಸ್ ದೂರಿದರು.ದಲಿತರು ಹಾಗೂ ಹಿಂದುಳಿದ ವರ್ಗದವರು ಹೆಚ್ಚಿನ ಪ್ರಮಾಣದಲ್ಲಿ ಮತಾಂತರಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದವರ ಮೀಸಲಾತಿ ಪ್ರಮಾಣವನ್ನು ಕಡಿಮೆ ಮಾಡಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಹೆಚ್ಚಿನ ಮೀಸಲಾತಿ ನೀಡಬೇಕು ಎಂದು ಮಿಶ್ರಾ ಆಯೋಗವು ವರದಿ ನೀಡಿದೆ. ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಈ ವರದಿಯನ್ನು ಜಾರಿಗೊಳಿಸಿದರೆ ದಲಿತರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.ಚಿತ್ರದುರ್ಗದ ಚಲವಾದಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಬಸವನಾಗಿ ದೇವ ಶರಣರು, ಮಾದಿಗ ದಂಡೋರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎಂ. ಶಂಕರಪ್ಪ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.