ಸೋಮವಾರ, ಜೂನ್ 14, 2021
21 °C

ಮೀಸಲಾತಿ ಸೌಲಭ್ಯ ಕಾಂಗ್ರೆಸ್ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಿದ್ದೇ ಕಾಂಗ್ರೆಸ್. ಮೀಸಲಾತಿಯನ್ನು ಬಿಜೆಪಿ ಎಂದೂ ಬೆಂಬಲಿಸಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.ನಗರದ ಜಿಲ್ಲಾ ಆಟದ ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತರ ಬಗ್ಗೆ ಬಿಜೆಪಿ ಚಿಂತಿಸಲಿಲ್ಲ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಮಹಿಳೆಯರಿಗೆ ಮೀಸಲಾತಿ ಸೌಲಭ್ಯ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಮೀಸಲು ಕೊಡುವುದನ್ನು ಅನಂತಕುಮಾರ್, ಸದಾನಂದಗೌಡ, ಈಶ್ವರಪ್ಪ, ಯಡಿಯೂರಪ್ಪ ಅವರಾದಿಯಾಗಿ ಬಿಜೆಪಿಯವರೆಲ್ಲರೂ ತೀವ್ರವಾಗಿ ವಿರೋಧಿಸಿದ್ದರು ಎಂದರು.ರಾಜ್ಯದ ರೈತರಿಗೆ ದಿನದ 24 ಗಂಟೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದ ಬಿಜೆಪಿ ಮಾತು ಉಳಿಸಿಕೊಳ್ಳದೆ ವಂಚನೆ ಮಾಡಿದೆ. ಬಹುತೇಕ ಸಚಿವರು ಹಗರಣಗಳಲ್ಲಿ ಸಿಕ್ಕಿಕೊಂಡು, ರಾಜ್ಯ ಅಭಿವೃದ್ಧಿಯಲ್ಲಿ ಹಿಂದುಳಿಯುವಂತೆ ಮಾಡಿದ್ದಾರೆ. ಜನತೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.ಜೆಡಿಎಸ್ ಅಲ್ಪಸಂಖ್ಯಾತರ ಮತಗಳ ಮೇಲೆ ಕಣ್ಣಿಟ್ಟು ಅಭ್ಯರ್ಥಿ ಕಣಕ್ಕಿಳಿಸಿದೆ. ಇದರ ಹಿಂದೆ ಬಿಜೆಪಿ ಗೆಲ್ಲಿಸುವ ಹುನ್ನಾರವಿದೆ. ಮತದಾರರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮಾತನಾಡಿ, ಜಿಲ್ಲೆಯ ಎಲ್ಲೆಡೆ ಕಾಂಗ್ರೆಸ್ ಬಗ್ಗೆ ಜನರ ಒಲವು ಕಾಡುತ್ತಿದೆ. ಈ ಬಾರಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಮತದಾರರು ಆಶೀರ್ವಾದ ಮಾಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಶಾಸಕ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಪಕ್ಷದ ಜಿಲ್ಲಾ ಅಧ್ಯಕ್ಷ ಎಂ.ಎಲ್.ಮೂರ್ತಿ, ಮಾಜಿ ಸಚಿವರಾದ ಸಗೀರ್ ಅಹಮದ್, ಎಚ್.ಎಸ್.ಮಹದೇವಪ್ರಸಾದ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಇನ್ನಿತರರು ಇದ್ದರು.ಕಾರ್ಯಕ್ರಮಕ್ಕೂ ಮೊದಲು ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಗಾಯತ್ರಿ ಕಲ್ಯಾಣ ಮಂಟಪದಿಂದ ಜಿಲ್ಲಾ ಆಟದ ಮೈದಾನದವರೆ ಪಕ್ಷದ ಮುಖಂಡರು, ಕಾರ್ಯಕರ್ತರು ರೋಡ್ ಶೋ ನಡೆಸಿ, ಮತಯಾಚಿಸಿದರು. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.