ಮಂಗಳವಾರ, ಏಪ್ರಿಲ್ 20, 2021
25 °C

ಮುಳಬಾಗಲು: ಹೆಚ್ಚಿದ ದಲಿತರ ಮೇಲಿನ ದೌರ್ಜನ್ಯ.ತಹಶೀಲ್ದಾರ್ ಕಚೇರಿ ಮುಂದೆ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಮಾಲೂರು: ತಾಲ್ಲೂಕಿನಾದ್ಯಂತ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದರೂ ನಿಯಂತ್ರಿಸುವಲ್ಲಿ ತಾಲ್ಲೂಕು ಆಡಳಿತ ವಿಫಲಗೊಂಡಿದೆ ಎಂದು ಆರೋಪಿಸಿ ಸಮತಾ ಸೈನಿಕ ದಳ ಮುಳಬಾಗಲು ತಾಲ್ಲೂಕು ಘಟಕದ ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಶುಕ್ರವಾರ ಧರಣಿ ನಡೆಸಿದರು.ಧರಣಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ತಾಲ್ಲೂಕು ಘಟಕದ ಕಾರ್ಯಾಧ್ಯಕ್ಷ ಎಸ್. ನಾರಾಯಣಸ್ವಾಮಿ, ತಾಲ್ಲೂಕಿನಲ್ಲಿ ದಲಿತರು ಮತ್ತು ಅಲ್ಪ ಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯ ನಡೆಸಲಾಗುತ್ತಿದೆ. ದೌರ್ಜನ್ಯ ತಡೆಯಬೇಕಾದ ಅಧಿಕಾರಿಗಳು ಪಟ್ಟಭದ್ರರ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.

ಪೊಲೀಸರು ರಾಜಕಾರಣಿಗಳ ಕೈಬೊಂಬೆಗಳಂತೆ ವರ್ತಿಸುತ್ತಾ ಹಲ್ಲೆ ನಡೆಸಿದವರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಹಲ್ಲೆಗಳು ಹೆಚ್ಚುತ್ತಿವೆ ಎಂದು ದೂರಿದರು. ತಾಲ್ಲೂಕಿನ ಕೊಂಡಶೆಟ್ಟಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನಕ್ಕೆ ನಿವೇಶನ ಕೇಳಲು ಹೋದ ದಲಿತರ ಮೇಲೆ ಹಲ್ಲೆ ನಡೆಸಲಾಗಿದೆ.

 

ಈ ಘಟನೆಯ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಗ್ರಾ.ಪಂನಲ್ಲಿ ಶೇ.18ರ ಯೋಜನೆಯ ಹಣ ದುರುಪಯೋಗವಾಗಿದ್ದು, ಈ ಕುರಿತು ತನಿಖೆಯಾಗಬೇಕು. ಮಾಲೂರು ಪಟ್ಟಣದ ಹನುಮಂತ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು.

 

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ನಿಲಯಗಳಲ್ಲಿರುವ ದಿನಗೂಲಿ ನೌಕರರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು. ಸಮತಾ ಸೈನಿಕ ದಳ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಂ.ಕೃಷ್ಣಪ್ಪ, ಸಂಘಟನಾ ಸಂಚಾಲಕ ಚಂಬೆ ರವೀಂದ್ರ, ಡಿ.ಎಂ.ಪ್ರಕಾಶ್, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ರಘುನಾಥ್, ಮುಳಬಾಗಲು ತಾಲ್ಲೂಕು ಅಧ್ಯಕ್ಷ ಮುನಿಸ್ವಾಮಿ, ಕೆ.ಜಿ.ಎಫ್ ತಾಲ್ಲೂಕು ಅಧ್ಯಕ್ಷ ಅಶೋಕ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷ ಎಂ.ಪಾಪಣ್ಣ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.