ಶುಕ್ರವಾರ, ಮೇ 7, 2021
22 °C

ಮೂಲಸೌಕರ್ಯಕ್ಕೆ ವಿದ್ಯಾರ್ಥಿನಿಯರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಅವಶ್ಯಕ ಮೂಲಸೌಕರ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಮತ್ತು ಅಖಿಲ ಭಾರತೀಯ ಮಹಿಳಾ ಸಾಂಸ್ಕೃತಿಕ ಸಂಘಟನೆ  (ಎಐಎಂಎಸ್‌ಎಸ್) ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.ಈ ಕಾಲೇಜಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿನಿಯರು ಕಲಿಯುತ್ತಿದ್ದಾರೆ. ಆದರೆ ವಿದ್ಯಾರ್ಥಿನಿಯರ ಮತ್ತು ತರಗತಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳಿಲ್ಲ. ಪ್ರೌಢಶಾಲೆಯ ಕಟ್ಟಡದಲ್ಲಿ ತರಗತಿ ನಡೆಯುವ ನಿದರ್ಶನಗಳಿವೆ. ತರಗತಿಗಳಲ್ಲೂ ಸಮರ್ಪಕ ಮೂಲ ಸೌಕರ್ಯಗಳಿಲ್ಲ.ನೆಲದಲ್ಲಿ ಕುಳಿತು ಪಾಠ ಕೇಳುವ ದುಸ್ಥಿತಿಯೂ ಇದೆ. ಗ್ರಂಥಾಲಯವೂ ಇಲ್ಲ. ಪ್ರಯೋಗ ಶಾಲೆ ಸುಸ್ಥಿತಿಯಲ್ಲಿ ಇಲ್ಲ. ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲು ಮೂಲ ಸೌಕರ್ಯಗಳನ್ನು ಒಳಗೊಂಡ ಸಭಾಂಗಣವೂ ಇಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ.ಹೀಗೆ ಹಲವು ಇಲ್ಲಗಳ ಆಗರವಾಗಿರುವ ಈ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಸಂಕಷ್ಟಗಳಿಗೆ ಸರ್ಕಾರ, ಅಧಿಕಾರಿಗಳು, ಜನಪ್ರತಿನಿಧಿಗಳೂ ಸ್ಪಂದಿಸುತ್ತಿಲ್ಲ. ಹೀಗಾಗಿ ಕಾಲೇಜು ಮೂಲಸೌಕರ್ಯಗಳಿಲ್ಲದ ಅವ್ಯವಸ್ಥೆಯ ಆಗರವಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.ಪದ್ಮಾವತಿ, ಜಗನ್ನಾಥ ಎಸ್.ಎಚ್. ಮತ್ತಿತರ ಸಂಘಟನಾ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.