ಶನಿವಾರ, ಮೇ 8, 2021
26 °C

ಮೃತ ಯೋಧರ ಕುಟುಂಬಕ್ಕೆ ಪರಿಹಾರ: ಸಿ.ಎಂ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಇಬ್ಬರು ಮೃತ ಯೋಧರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದರು.ಶೂನ್ಯವೇಳೆಯಲ್ಲಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ವಿಷಯ ಪ್ರಸ್ತಾಪಿಸಿ, ಯೋಧನ ಕುಟುಂಬಕ್ಕೆ ಪರಿಹಾರ ನೀಡಲು ಹಣ ಇಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ಹಾಗೂ ನಿವೇಶನ ನೀಡಬೇಕು ಎಂದು ಆಗ್ರಹಪಡಿಸಿದರು.ಅಗ್ರಹಾರ ಗ್ರಾಮದ ಯೋಗಾನಂದ ಹಾಗೂ ಹರದನಹಳ್ಳಿಯ ಎಚ್.ಟಿ.ಕಾಂತರಾಜ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸುವಾಗ ಮೃತಪಟ್ಟಿದ್ದಾರೆ. 2011ರಲ್ಲಿ ಮೃತರಾದ ಕಾಂತರಾಜ್ ಅವರ ಕುಟುಂಬಕ್ಕೆ ಇದುವರೆಗೂ ಪರಿಹಾರ ನೀಡಿಲ್ಲ ಎಂದು ರೇವಣ್ಣ ಆಕ್ಷೇಪಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ಕೂಡಲೇ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ವೈದ್ಯರ ನೇಮಕ: ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ವಿಧಾನಸಭೆಗೆ ತಿಳಿಸಿದರು.ಶೂನ್ಯವೇಳೆಯಲ್ಲಿ ಬಾಗೇಪಲ್ಲಿಯ ಪಕ್ಷೇತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ವಿಷಯ ಪ್ರಸ್ತಾಪಿಸಿ, `ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರೇ ಇಲ್ಲ. ಕೂಡಲೇ ವೈದ್ಯರನ್ನು ನೇಮಕ ಮಾಡಬೇಕು' ಎಂದು ಒತ್ತಾಯಿಸಿದರು.      `397 ವೈದ್ಯಾಧಿಕಾರಿಗಳ ಹುದ್ದೆಗಳು ಹಾಗೂ 1,198 ತಜ್ಞ ವೈದ್ಯರ ಹುದ್ದೆಗಳು ಖಾಲಿ ಇವೆ. ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ಬಂದರೆ ಈ ಸಮಸ್ಯೆಗೆ ಪರಿಹಾರ ಸಿಗಲಿದೆ' ಎಂದು ಹೇಳಿದರು.ಜೆಡಿಎಸ್‌ನ ಅಖಂಡ ಶ್ರೀನಿವಾಸಮೂರ್ತಿ ಅವರು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು. ಆಸ್ಪತ್ರೆಗಳಿಗೆ ಒಮ್ಮೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಖಾದರ್ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.