ಶುಕ್ರವಾರ, ನವೆಂಬರ್ 22, 2019
22 °C

ಮೈತ್ರಿ ವದಂತಿಗೆ ತೆರೆ ಎಳೆದ ಎಚ್‌ಡಿಕೆ

Published:
Updated:

ಹಲಗೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಪಕ್ಷದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.ಹಲಗೂರು ಸಮೀಪದ ಕುಂತೂರು ಗ್ರಾಮದಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೂಲಕ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎನ್ನುವ ವಿಷಯಕ್ಕೆ ತೆರೆ ಎಳೆದರು.ಚುನಾವಣೆ ಸಂದರ್ಭದಲ್ಲಿ ಮತದಾರರಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ನೀಡಬಾರದು ಎನ್ನುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬರಲಾಗಿದೆ. 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಪಕ್ಕಾ ಮಾಡಲಾಗಿದೆ. ಉಳಿದ ಕ್ಷೇತ್ರಗಳ ಪಟ್ಟಿಯನ್ನೂ ಶೀಘ್ರ ಬಿಡುಗಡೆ ಮಾಡಲಾಗುವುದು. ನಂತರ  ಬೆಂಗಳೂರಿನಲ್ಲಿ ಪಕ್ಷದ ಎಲ್ಲ ಅಭ್ಯರ್ಥಿಗಳನ್ನು ಒಟ್ಟಿಗೆ ಸೇರಿಸಿ ಪ್ರಮಾಣ ಬೋಧನೆ ಮಾಡಿ ಬಿ.ಫಾರಂ ಹಂಚಲಾಗುವುದು ಎಂದರು.ಮದ್ದೂರು ಕ್ಷೇತ್ರದ ಶಾಸಕಿ ಕಲ್ಪನಾ ಸಿದ್ದರಾಜು ಪಕ್ಷ ಬಿಡುವ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ `ಅವರದು ಮುಗಿದ ಅಧ್ಯಾಯ. ಆ ಕುರಿತು ಚರ್ಚೆ ಬೇಡ' ಎಂದರು.

ಪ್ರತಿಕ್ರಿಯಿಸಿ (+)